ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿನ ವ್ಯಾಪಕ ಮಳೆಯಿಂದಾಗಿ, ಉಜನಿ ಮತ್ತು ವೀರ್ ಜಲಾಶಯಗಳಿಂದ ಭೀಮಾ ನದಿಗೆ 1,43,000 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಇದರಿಂದ ವಿಜಯಪುರದ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಉಂಟಾಗಿದ್ದು, ಜಿಲ್ಲಾಡಳಿತವು ನದಿ ತೀರದ ಜನರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ವಿಜಯಪುರ (ಆ.1): ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಭೀಮಾ ನದಿಯಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಹಾರಾಷ್ಟ್ರದ ಪ್ರಮುಖ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗುತ್ತಿದ್ದು, ಉತ್ತರ ಕರ್ನಾಟಕದ ನದಿ ಪಾತ್ರದ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಆವರಿಸಿದೆ.
ಮಹಾರಾಷ್ಟ್ರದ ಕಡೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿರುವುದರಿಂದ ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಉಜನಿ ಜಲಾಶಯದಿಂದ 80,000 ಕ್ಯೂಸೆಕ್ ಹಾಗೂ ವೀರ್ ಜಲಾಶಯದಿಂದ 63,000 ಕ್ಯೂಸೆಕ್ ಸೇರಿದಂತೆ ಒಟ್ಟು 1,43,000 ಕ್ಯೂಸೆಕ್ నీರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ.
24 ಗಂಟೆಗಳಲ್ಲಿ ಭೀಮಾ ನದಿ ಮಟ್ಟ ಏರಿಕೆ ಸಾಧ್ಯತೆ
ಬೃಹತ್ ಪ್ರಮಾಣದ ನೀರು ನದಿಗೆ ಹರಿದು ಬರುತ್ತಿರುವ ಪರಿಣಾಮ, ಮುಂದಿನ 24 ಗಂಟೆಗಳಲ್ಲಿ ವಿಜಯಪುರ ಜಿಲ್ಲೆಯ ಚಡಚಣ, ಇಂಡಿ ಹಾಗೂ ಆಲಮೇಲ ತಾಲೂಕುಗಳ ಭೀಮಾ ನದಿ ಪಾತ್ರದಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿಕೆಯಾಗಲಿದೆ. ಮಹಾರಾಷ್ಟ್ರದ ಮೇಲ್ಭಾಗದಲ್ಲಿ ಮಳೆ ಹೀಗೆಯೇ ಮುಂದುವರಿದರೆ, ಜಲಾಶಯಗಳಿಂದ ಹೊರಹರಿವಿನ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ನದಿ ತೀರದ ಜನರಿಗೆ ಜಿಲ್ಲಾಡಳಿತದ ಕಟ್ಟುನಿಟ್ಟಿನ ಎಚ್ಚರಿಕೆ
ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತ ನದಿ ತೀರದ ಗ್ರಾಮಗಳ ಜನರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನದಿ ತೀರದ ಹಾಗೂ ತಗ್ಗು ಪ್ರದೇಶಗಳ ಜನರು ಸುರಕ್ಷಿತವಾಗಿರಬೇಕು ಮತ್ತು ನದಿ ದಂಡೆಗೆ ಅನಗತ್ಯವಾಗಿ ತೆರಳಬಾರದು. ಉಕ್ಕಿ ಹರಿಯುತ್ತಿರುವ ನದಿಯ ಬಳಿ ಸೆಲ್ಫಿ ತೆಗೆಯುವುದು, ಈಜಾಡುವುದು ಅಥವಾ ಯಾವುದೇ ರೀತಿಯ ಸಾಹಸ ಪ್ರದರ್ಶನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ರೈತರು ತಮ್ಮ ಜಾನುವಾರುಗಳನ್ನು ನದಿ ಪಾತ್ರಕ್ಕೆ ನೀರು ಕುಡಿಸಲು ಅಥವಾ ತೊಳೆಯಲು ಕರೆದೊಯ್ಯಬಾರದು ಎಂದು ಸೂಚಿಸಲಾಗಿದೆ.
ಸ್ಥಳೀಯ ತಾಲೂಕು ಆಡಳಿತ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನದಿ ತೀರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.


