ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ

Bidadi Farmers Protest: ಭೂ ಸಮೀಕ್ಷೆಗೆ ಆಗಮಿಸಿದ್ದ ಅಧಿಕಾರಿಗಳ ವಿರುದ್ಧ ರೈತರು ಹಾಗೂ ರೈತ ಮಹಿಳೆಯರು ಆಕ್ರೋಶ ಹೊರಹಾಕಿದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

Share this Video
  • FB
  • Linkdin
  • Whatsapp

ರಾಮನಗರ (ಜು.15): ಬಿಡದಿ ಸಮೀಪದ ಬೈರಮಂಗಲ ಗ್ರಾಮದಲ್ಲಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಭೂ ಸಮೀಕ್ಷೆಗೆ ಆಗಮಿಸಿದ್ದ ಅಧಿಕಾರಿಗಳ ವಿರುದ್ಧ ರೈತರು ಹಾಗೂ ರೈತ ಮಹಿಳೆಯರು ಆಕ್ರೋಶ ಹೊರಹಾಕಿದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಭೂಸ್ವಾಧೀನಕ್ಕಾಗಿ ಅಧಿಕಾರಿಗಳು ಸರ್ವೇ ನಡೆಸಲು ಮುಂದಾಗುತ್ತಿದ್ದಂತೆಯೇ ನೂರಾರು ರೈತರು ಅವರನ್ನು ತಡೆದು ಪ್ರತಿಭಟನೆ ನಡೆಸಿದರು. ಕೆಲ ರೈತ ಮಹಿಳೆಯರು ಪೊರಕೆ ಹಿಡಿದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರೆ, ಪ್ರತಿಭಟನಾಕಾರರು ಅಧಿಕಾರಿಗಳ ವಾಹನಗಳನ್ನು ಮುತ್ತಿಗೆ ಹಾಕಿದರು. ಈ ವೇಳೆ ಭೂ ಸಮೀಕ್ಷೆಗೆ ಬಂದ ಕೆಲವು ವಾಹನಗಳ ಗಾಜುಗಳು ಜಖಂಗೊಂಡ ಘಟನೆ ಕೂಡ ನಡೆಯಿತು.

ಸರ್ಕಾರ ಯಾವುದೇ ಕಾರಣಕ್ಕೂ ತಮ್ಮ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ರೈತರು ಪಟ್ಟು ಹಿಡಿದರು. "ಬಲವಂತವಾಗಿ ಸರ್ವೇ ನಡೆಸಲು ಮುಂದಾದರೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ" ಎಂದು ಎಚ್ಚರಿಕೆ ನೀಡಿದ ಕೆಲ ರೈತರು ಕ್ರಿಮಿನಾಶಕದ ಬಾಟಲಿಗಳನ್ನು ಪ್ರದರ್ಶಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ರೈತರೊಂದಿಗೆ ನೇರ ಮಾತುಕತೆ ನಡೆಸಿದ ಅವರು, ಕಾನೂನು ಕೈಗೆತ್ತಿಕೊಳ್ಳದಂತೆ ಮನವಿ ಮಾಡಿದರು. ಆದರೆ, ರೈತರು ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. "ನಮ್ಮ ಭೂಮಿಯನ್ನು ಬಲವಂತವಾಗಿ ಕಸಿದುಕೊಳ್ಳಲು ಯತ್ನಿಸಿದರೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ" ಎಂದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ವಿಡಿಯೋ ಸಂದೇಶದ ಮೂಲಕ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸಿದರು. ಶಾಂತಿಯುತ ಹೋರಾಟ ನಡೆಸುವಂತೆ ಮನವಿ ಮಾಡಿದ ಅವರು, ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಭೂಸ್ವಾಧೀನ ಪ್ರಕ್ರಿಯೆ ಕುರಿತು ಸರ್ಕಾರ ಮತ್ತು ಅಧಿಕಾರಿಗಳ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಭೂಸ್ವಾಧೀನ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ, ಬೈರಮಂಗಲದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.

Related Video