ಬೆಂಗಳೂರು(ಡಿ.06): ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡುತ್ತಿದ್ದಂತೆ ಬಿಜೆಪಿ ಚುನಾವಣೆಗೆ ಸಜ್ಜಾಗುತ್ತಿದ್ದು, ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಬೆಂಗಳೂರಿನ ಸಚಿವರು, ಶಾಸಕರು ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ. 

ಶನಿವಾರ ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಸಭೆ ನಡೆಸಿದ ಮುಖಂಡರು, ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನೆ ಸಲ್ಲಿಸುವ ಬಗ್ಗೆಯೂ ಚರ್ಚೆ ನಡೆಸಿದರು. ಸಭೆಯಲ್ಲಿ ಸಚಿವರಾದ ಎಸ್‌.ಟಿ.ಸೋಮಶೇಖರ್‌, ಗೋಪಾಲಯ್ಯ, ಶಾಸಕರಾದ ರವಿ ಸುಬ್ರಹ್ಮಣ್ಯ, ರಘು ಸೇರಿದಂತೆ ಇತರರು ಭಾಗವಹಿಸಿದ್ದರು. ಆದರೆ, ಬೆಂಗಳೂರಿನ ಮೇಲೆ ತಮ್ಮದೇ ಹಿಡಿತ ಹೊಂದಿದ್ದಾರೆ ಎನ್ನಲಾದ ಕಂದಾಯ ಸಚಿವ ಆರ್‌.ಅಶೋಕ್‌ ಸಭೆಗೆ ಗೈರಾಗಿದ್ದರು. ಬೆಳಗಾವಿಯಲ್ಲಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ಸಮಯದಲ್ಲಿಯೇ ಈ ಸಭೆ ಸೇರಿರುವುದು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಬಿಬಿಎಂಪಿ ಚುನಾವಣೆ ಭವಿಷ್ಯ: ಮಹತ್ವದ ತೀರ್ಪು ನೀಡಿದ ಹೈಕೋರ್ಟ್..!

ತೆರೆಮರೆಯಲ್ಲೇ ನಾಯಕರ ಸೆಳೆಯಲು ಸಿದ್ಧತೆ:

ಚುನಾವಣೆ ನಡೆಸುವುದಾದರೆ ಯಾವ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು. ಈ ಬಾರಿ ಪಾಲಿಕೆ ಗದ್ದುಗೆಯನ್ನು ಹಿಡಿಯಲು ಯಾವ ರೀತಿಯಲ್ಲಿ ಕಾರ್ಯತಂತ್ರ ರೂಪಿಸಬೇಕು ಎಂಬುದರ ಕುರಿತು ಮುಖಂಡರು ಸಮಾಲೋಚನೆ ನಡೆಸಿದರು. ಈ ನಡುವೆ, ಬಿಬಿಎಂಪಿ ಚುನಾವಣೆ ನಡೆಸುವಂತೆ ನ್ಯಾಯಾಲಯ ಸೂಚನೆ ನೀಡಿದ ಬೆನ್ನಲ್ಲೇ ತೆರೆಮರೆಯಲ್ಲಿ ಚುನಾವಣೆಗೆ ಬಿಜೆಪಿ ತಯಾರಿ ಆರಂಭಿಸಿದೆ. ಕಾಂಗ್ರೆಸ್‌-ಜೆಡಿಎಸ್‌ನ ಪಾಲಿಕೆ ಮಾಜಿ ಸದಸ್ಯರನ್ನು ಬಿಜೆಪಿಗೆ ಸೆಳೆಯಲು ಕಾರ್ಯತಂತ್ರಗಳು ನಡೆಯುತ್ತಿದ್ದು, ಕೆಲವರು ಕಾಂಗ್ರೆಸ್‌, ಜೆಡಿಎಸ್‌ ತೊರೆದು ಬಿಜೆಪಿ ಬಾವುಟ ಹಿಡಿಯಲು ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಭೆ ಅಪೂರ್ಣ:

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌, ಬಿಬಿಎಂಪಿ ಚುನಾವಣೆ ಬಗ್ಗೆ ಹೈಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಚರ್ಚೆ ಮಾಡಲು ಸಭೆ ಸೇರಿ ಮಾತುಕತೆ ನಡೆಸಲಾಗಿದೆ. ಆದರೆ, ಸಭೆಯು ಅಪೂರ್ಣವಾಗಿದೆ. ಸಚಿವ ಆರ್‌.ಅಶೋಕ್‌ ಮತ್ತು ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಇನ್ನು ಕೆಲವು ನಾಯಕರು ಬೆಳಗಾವಿಯಲ್ಲಿದ್ದಾರೆ. ಸೋಮವಾರದಿಂದ ಅಧಿವೇಶನ ಪ್ರಾರಂಭವಾಗಲಿದ್ದು, ಮತ್ತೊಮ್ಮೆ ಸಭೆ ಸೇರಿ ಚರ್ಚಿಸಲಾಗುವುದು ಎಂದು ಹೇಳಿದರು.

ಬಿಬಿಎಂಪಿ ಚುನಾವಣೆ: ಸುಪ್ರೀಂಕೋರ್ಟ್ ಮೆಟ್ಟಿಲೇರಲು ಮುಂದಾದ ಸರ್ಕಾರ

ಪಕ್ಷಾಂತರ ವಲಸೆ ಆರಂಭ?

ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಹಲವು ಮಾಜಿ ಸದಸ್ಯರು ಹಾಗೂ ಮುಖಂಡರು ಆಡಳಿತಾರೂಢ ಬಿಜೆಪಿಗೆ ವಲಸೆ ಬರುವ ಸಾಧ್ಯತೆಯಿದೆ. ಭಾನುವಾರ ನಡೆಯಲಿರುವ ಗೋವಿಂದರಾಜನಗ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಉದ್ಘಾಟನಾ ಸಮಾರಂಭದ ವೇಳೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ವಸತಿ ಸಚಿವ ವಿ.ಸೋಮಣ್ಣ ಸಮ್ಮುಖದಲ್ಲಿ ಪಾಲಿಕೆ ಮಾಜಿ ಸದಸ್ಯರು ಬಿಜೆಪಿ ಸೇರುವ ಸಂಭವವಿದೆ. ಇನ್ನು ಕೆಲವರು ಪಕ್ಷದ ಕಚೇರಿಯಲ್ಲಿ ಸೇರ್ಪಡೆಯಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.