ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಮಿತ್ರಪಕ್ಷ ಜೆಡಿಎಸ್ ಜೊತೆಗೂಡಿ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಲು ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಸಿ.ಟಿ. ರವಿ ಅವರಿಗೆ ಬಿಜೆಪಿ ಜವಾಬ್ದಾರಿ ವಹಿಸಿದೆ.
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ತೆರವಾದ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಿದ್ಧತೆ ಆರಂಭಿಸಿರುವ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಮಿತ್ರ ಪಕ್ಷ ಜೆಡಿಎಸ್ ಜತೆ ಈ ಸಂಬಂಧ ಚರ್ಚೆ ನಡೆಸಲು ಮೂವರು ನಾಯಕರಿಗೆ ಜವಾಬ್ದಾರಿ ನೀಡಿದೆ.
ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲು ಭಾನುವಾರ ನಡೆದ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ.
ಹಿರಿಯೂರು ಕ್ಷೇತ್ರ ಗೆಲ್ಲಲು ಕಾರ್ಯತಂತ್ರ
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೋರ್ ಕಮಿಟಿ ಸಭೆಯಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆ ಬಗ್ಗೆ ಚರ್ಚೆ ಆಗಿದೆ. ಹಿರಿಯರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಸಿ.ಟಿ.ರವಿ ಅವರು ಜೆಡಿಎಸ್‌ನ ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ಮಾಡಿ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹಿರಿಯೂರು ಕ್ಷೇತ್ರ ಗೆಲ್ಲಲು ಕಾರ್ಯತಂತ್ರ ರೂಪಿಸಲು ಜವಾಬ್ದಾರಿ ನೀಡಿದ್ದೇವೆ ಎಂದು ತಿಳಿಸಿದರು.


