ಬೆಂಗಳೂರು [ಸೆ.15]: ಸರ್ಕಾರಿ ಯೋಜನೆ ಜಾರಿಗೊಳಿಸಲು ಎದುರಾಗುವ ಸಮಸ್ಯೆಗಳ ನಿವಾರಣೆಗೆ ಮಹಾರಾಷ್ಟ್ರ ಮಾದರಿಯಲ್ಲಿ ‘ವಿಶೇಷ ವಾರ್‌ ರೂಮ್‌’ ವ್ಯವಸ್ಥೆ ಜಾರಿಗೊಳಿಸುಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿ) ನಿರ್ಧರಿಸಿದೆ.

ಶುಕ್ರವಾರ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ಮೆಟ್ರೋ ಯೋಜನೆ ಮತ್ತು ಕಾಮಗಾರಿಗಳ ಕುರಿತು ಬಿಎಂಆರ್‌ಸಿಎಲ್‌ ಅಧಿಕಾರಿಗಳ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ಕೇವಲ 42 ಕಿ.ಮೀ. ಮೆಟ್ರೋ ಪಥ ನಿರ್ಮಾಣವಾಗಿದೆ. ದೆಹಲಿಯಲ್ಲಿ ಕಳೆದ ಏಳು ವರ್ಷದಲ್ಲಿ 210 ಕಿ.ಮೀ. ಮೆಟ್ರೋ ಪಥ ನಿರ್ಮಾಣವಾಗಿದೆ. ಮೆಟ್ರೋ ಪಥವನ್ನು ತ್ವರಿತಗತಿಯಲ್ಲಿ ನಿರ್ಮಿಸಲು ಬೆಂಗಳೂರು ಮೆಟ್ರೋ ಎದುರಿಸುತ್ತಿರುವ ಸಮಸ್ಯೆ ಏನು ಎಂಬುದರ ಕುರಿತು ಚರ್ಚೆ ನಡೆಸಲಾಯಿತು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಭೆಯಲ್ಲಿ ಯಾವುದೇ ಸರ್ಕಾರಿ ಯೋಜನೆಯನ್ನು ಜಾರಿಗೊಳಿಸಲು ಎದುರಾಗುವ ತೊಂದರೆಗಳನ್ನು ನಿವಾರಿಸಲು ಬೇಕಾದ ವಿಶೇಷ ವಾರ್‌ ರೂಮ್‌ ಮಾದರಿಯ ವ್ಯವಸ್ಥೆಯನ್ನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು. ಮಹಾರಾಷ್ಟ್ರದಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದ್ದು, ಅದನ್ನು ಅಭ್ಯಸಿಸಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ನಿಯೋಗವೊಂದು ಮುಂಬೈಗೆ ಹೋಗಲು ನಿರ್ಧರಿಸಲಾಯಿತು. ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಜಯ್‌ಸೇಠ್‌ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.