ಬೆಂಗಳೂರು [ಜು.25] :  ಪೊಲೀಸ್‌ ಠಾಣೆಯಿಂದ ಬಿಡುಗಡೆ ಮಾಡಲು ಲಂಚ ಪಡೆಯುತ್ತಿದ್ದ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ಸೇರಿದಂತೆ ಇಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಕಲಾಸಿಪಾಳ್ಯ ಪೊಲೀಸ್‌ ಠಾಣೆ ಎಎಸ್‌ಐ ಶ್ರೀನಿವಾಸ ಮತ್ತು ಖಾಸಗಿ ವ್ಯಕ್ತಿ ಬಾಬು ಬಂಧಿತ ಆರೋಪಿಗಳಾಗಿದ್ದಾರೆ. ನಗರದ ನಿವಾಸಿಯೊಬ್ಬರ ಮಗನನ್ನು ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಲಾಸಿಪಾಳ್ಯ ಪೊಲೀಸ್‌ ಠಾಣೆಗೆ ಅನುಮಾನದ ಮೇರೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗಿದೆ. ಆತನನ್ನು ಠಾಣೆಯಿಂದ ಬಿಡುಗಡೆ ಮಾಡಲು ಎಎಸ್‌ಐ ಶ್ರೀನಿವಾಸ .40 ಸಾವಿರ ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಖಾಸಗಿ ವ್ಯಕ್ತಿ ಬಾಬು, ಪೊಲೀಸ್‌ ಅಧಿಕಾರಿ ಪರವಾಗಿ .22 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯನ್ವಯ ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಹೇಳಿದ್ದಾರೆ.