ಕೋಲಾರ: ಕುರುಡುಮಲೆಯಲ್ಲಿಂದು ಮೋದಿ ಜನ್ಮದಿನ ನಿಮಿತ್ತ ಯಡಿಯೂರಪ್ಪ ಪೂಜೆ
ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯಾದ್ಯಂತ ಬಿಜೆಪಿ ನಾಯಕರ ರಾಜ್ಯ ಪ್ರವಾಸದ ರೂಪುರೇಷೆ ಬಿಡುಗಡೆಯಾಗಲಿದೆ. ಬರ, ರೈತರ ಸಮಸ್ಯೆ, ಕಾವೇರಿ ಹೋರಾಟ ಸೇರಿ ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ರಾಜ್ಯಾದ್ಯಂತ ಸುತ್ತಾಟ ನಡೆಸಲಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು ಮುಂದಾಗಲಿದ್ದಾರೆ.
ಕೋಲಾರ(ಸೆ.17): ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಇದೀಗ ಮೊದಲ ಹಂತದ ಪ್ರಚಾರಕ್ಕೆ ಸಜ್ಜಾಗಿದ್ದಾರೆ. ರಾಜ್ಯದ ಮೂಡಣ ಬಾಗಿಲು ಕೋಲಾರದ ಮುಳಬಾಗಲು ಕುರುಡುಮಲೆ ವಿನಾಯಕನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಭಾನುವಾರ(ಸೆ.17) ವಿಶೇಷ ಪೂಜೆ ಸಲ್ಲಿಸುವ ಮೂಲಕ ಬಿಜೆಪಿ ನಾಯಕರು ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಲಿದ್ದಾರೆ.
ಅದರಂತೆ ಕುರುಡುಮಲೆಗೆ ಬೆಳಗ್ಗೆ 10 ಗಂಟೆಗೆ ಆಗಮಿಸಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸುವಂತಾಗಲೆಂದು ಪ್ರಾರ್ಥಿಸಲಾಗುವುದು ಎಂದು ಸಂಸದ ಮುನಿಸ್ವಾಮಿ ಹೇಳಿದರು.
ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ: ಸಚಿವ ಭೈರತಿ ಸುರೇಶ್ ಹೀಗೆ ಹೇಳಿದ್ಯಾಕೆ?
ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಸದಾನಂದಗೌಡ, ಮಾಜಿ ಸಚಿವರಾದ ಅಶೋಕ್, ಅಶ್ವತ್ಥನಾರಾಯಣ, ಡಾ.ಸುಧಾಕರ್, ಸಿ.ಟಿ.ರವಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ನೂರಾರು ಸಂಖ್ಯೆಯಲ್ಲಿ ನಾಯಕರು, ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ ಎಂದು ಸಂಸದ ಮುನಿಸ್ವಾಮಿ ಮಾಹಿತಿ ನೀಡಿದರು.
ಆ ಬಳಿಕ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯಾದ್ಯಂತ ಬಿಜೆಪಿ ನಾಯಕರ ರಾಜ್ಯ ಪ್ರವಾಸದ ರೂಪುರೇಷೆ ಬಿಡುಗಡೆಯಾಗಲಿದೆ. ಬರ, ರೈತರ ಸಮಸ್ಯೆ, ಕಾವೇರಿ ಹೋರಾಟ ಸೇರಿ ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ರಾಜ್ಯಾದ್ಯಂತ ಸುತ್ತಾಟ ನಡೆಸಲಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು ಮುಂದಾಗಲಿದ್ದಾರೆ. ಬಳಿಕ ಶ್ರೀನಿವಾಸಪುರ ತಾಲೂಕಿಗೆ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರ ತಂಡ ಭೇಟಿ ನೀಡಲಿದೆ. ಅಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಪರಿಶೀಲನೆ ನಡೆಸಲಿದೆ.