ಬೆಂಗಳೂರು (ಡಿ.20): ನಿಷೇಧಾಜ್ಞೆ ಉಲ್ಲಂಘಿಸಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಹಾಗೂ ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್‌ ಅರ್ಷದ್‌ ಸೇರಿದಂತೆ 43 ಮಂದಿ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. 

ಗುರುವಾರ ಪೌರತ್ವ ಕಾಯ್ದೆ ವಿರೋಧಿಸಿ ಮೈಸೂರು ಬ್ಯಾಂಕ್‌ ಸರ್ಕಲ್‌ ಹಾಗೂ ಪುರಭವನ ಮುಂಭಾಗದಲ್ಲಿ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರೂ ಹಲವಾರು ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದ್ದವು. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪುರಭವನ ಮುಂದೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಇತಿಹಾಸಕಾರ ರಾಮಚಂದ್ರ ಗುಹಾ ಹಾಗೂ ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್‌ ಅರ್ಷದ್‌ ಸೇರಿದಂತೆ 21 ವಿರುದ್ಧ ಎಸ್‌.ಜೆ. ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟಿಸಿದ 23 ಜನರ ಮೇಲೆ ಹಲಸೂರು ಗೇಟ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆಯುಕ್ತರು ವಿಧಿಸಿದ್ದ ನಿಷೇಧಾಜ್ಞೆ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆಗೆ ಇಳಿದಿರುವುದು ಹಾಗೂ ಸಾರ್ವಜನಿಕ ಜೀವನಕ್ಕೆ ಅಡ್ಡಿ ಉಂಟು ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ.