Agumbe Ghat: ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಸಂಪರ್ಕ ಕೊಂಡಿಯಾಗಿರುವ ಆಗುಂಬೆ ಘಾಟಿ ರಸ್ತೆಯ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ₹18 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ.

ಕಾರ್ಕಳ: ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಸಂಪರ್ಕ ಕೊಂಡಿಯಾಗಿರುವ ಆಗುಂಬೆ ಘಾಟ್ ರಸ್ತೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ₹18 ಕೋಟಿ ರು. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಆಗುಂಬೆ ಘಾಟ್‌ನಿಂದ ಹೆಬ್ರಿ ಪೇಟೆಯವರೆಗೆ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು. ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಪ್ರಮುಖ ತಿರುವುಗಳಲ್ಲಿ ಅಗತ್ಯ ಕಾಮಗಾರಿಗಳ ಜೊತೆಗೆ ಕಾಂಕ್ರೀಟ್ ತಡೆಗೋಡೆಗಳನ್ನು ನಿರ್ಮಿಸಲು ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅನುದಾನ ಬಿಡುಗಡೆ ಮಾಹಿತಿ ನೀಡಿದ ಸುನಿಲ್ ಕುಮಾರ್

ಆಗುಂಬೆ ಘಾಟ್ ರಸ್ತೆಯ ಅಭಿವೃದ್ಧಿ ಹಾಗೂ ಅಪಾಯಕಾರಿ ತಿರುವುಗಳಲ್ಲಿ ವಾಹನಗಳ ಸಂಚಾರವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಈ ಹಿಂದೆ ಸಂಸದರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮೂಲಕ ₹18 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.

ಅನುದಾನ ಬಿಡುಗಡೆಗೆ ವಿಶೇಷ ಮುತುವರ್ಜಿ ವಹಿಸಿದ ಕೇಂದ್ರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಪರ್ಕ ಮತ್ತಷ್ಟು ಸುಗಮ

ರಸ್ತೆ ಅಭಿವೃದ್ಧಿಯಿಂದ ಆಗುಂಬೆ ಘಾಟ್ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಹೆಚ್ಚಿನ ಸುರಕ್ಷತೆ ದೊರೆಯಲಿದ್ದು, ಕರಾವಳಿ–ಮಲೆನಾಡು ಹಾಗೂ ಉತ್ತರ ಕರ್ನಾಟಕದ ನಡುವಿನ ಸಂಪರ್ಕ ಮತ್ತಷ್ಟು ಸುಗಮವಾಗಲಿದೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.