ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹೈಕೋರ್ಟ್‌ಗೆ ಲಿಖಿತ ಸ್ಪಷ್ಟನೆ ನೀಡಿದೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದು, ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಬೆಂಗಳೂರು (ನ.16): ರಾಜ್ಯಾದ್ಯಂತ ತೀವ್ರ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ 2025 ಹಾಗೂ 2026ನೇ ಸಾಲಿನಲ್ಲಿ ನಡೆದ ಸಿಇಟಿ (CET) ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹೈಕೋರ್ಟ್‌ಗೆ ಮಹತ್ವದ ಸ್ಪಷ್ಟನೆ ನೀಡಿದೆ. ಕೆಇಎ ಸಲ್ಲಿಸಿದ ಲಿಖಿತ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಕರ್ನಾಟಕ ಹೈಕೋರ್ಟ್, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಇತ್ಯರ್ಥಪಡಿಸಿದೆ.

ಜನಿವಾರ ತೆಗೆಸುವಂತೆ ಯಾವುದೇ ಸೂಚನೆ ನೀಡಿರಲಿಲ್ಲ: ಕೆಇಎ ಸ್ಪಷ್ಟನೆ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದನ್ನು ಪ್ರಶ್ನಿಸಿ 'ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ' ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಲಿಖಿತ ಹೇಳಿಕೆ ಸಲ್ಲಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, "ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸುವಂತೆ ಪ್ರಾಧಿಕಾರದಿಂದ ಯಾವುದೇ ಸೂಚನೆ ನೀಡಿರಲಿಲ್ಲ" ಎಂದು ಸ್ಪಷ್ಟಪಡಿಸಿದೆ.

ಮರುಕಳಿಸದಂತೆ ಅಗತ್ಯ ಕ್ರಮ; ವಿವಿಧ ಆಯೋಗಗಳಿಗೂ ವರದಿ

ಅಲ್ಲದೆ, ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ಮರುಕಳಿಸುವುದನ್ನು ತಡೆಯಲು ಈಗಾಗಲೇ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೆಇಎ ನ್ಯಾಯಾಲಯಕ್ಕೆ ತಿಳಿಸಿದೆ. ಪರೀಕ್ಷಾ ನಿಯಮಗಳ ಪಾಲನೆ ಕುರಿತು ಎಲ್ಲಾ ಜಿಲ್ಲಾಡಳಿತಗಳಿಗೂ ಸ್ಪಷ್ಟ ಹಾಗೂ ಅಗತ್ಯ ಸೂಚನೆಗಳನ್ನು ಒದಗಿಸಲಾಗಿದೆ. ಇದರ ಜೊತೆಗೆ, ಘಟನೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ರಾಜ್ಯ ಮಾನವ ಹಕ್ಕುಗಳ ಆಯೋಗ ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೂ ಸಮಗ್ರ ವರದಿ ಸಲ್ಲಿಸಲಾಗಿದೆ ಎಂದು ಪ್ರಾಧಿಕಾರ ಮಾಹಿತಿ ನೀಡಿದೆ.

ಸುವ್ಯವಸ್ಥಿತ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ:

ಕೆಇಎ ಪರ ವಕೀಲರು ಸಲ್ಲಿಸಿದ ಲಿಖಿತ ಹೇಳಿಕೆ ಮತ್ತು ಕೈಗೊಂಡಿರುವ ಸುಧಾರಣಾ ಕ್ರಮಗಳನ್ನು ಪರಿಗಣಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ಸುವ್ಯವಸ್ಥಿತ ಹಾಗೂ ಏಕರೂಪದ ಪರೀಕ್ಷೆಗಳನ್ನು ನಡೆಸುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿತು.

ಪ್ರಕರಣದ ಹಿನ್ನೆಲೆಯೇನು?

ಕಳೆದ ವರ್ಷ ಅಂದರೆ 2025ರಲ್ಲಿ ನಡೆಸಲಾಗಿದ್ದ ಸಿಇಟಿ ಪರೀಕ್ಷೆಯ ವೇಳೆ ಬೀದರ್ ಮತ್ತು ಶಿವಮೊಗ್ಗದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿತ್ತು. ಈ ಬಗ್ಗೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಒಬ್ಬ ವೊಇದ್ಯಾರ್ಥಿ ಜನಿವಾರ ತೆಗೆಯುವುದಾದರೆ ನಾನು ಪರೀಕ್ಷೆಯನ್ನೇ ಬರೆಯುವುದಿಲ್ಲ ಎಂದು ಹೊರಗೆ ಬಂದಿದ್ದನು. ಈ ಕುರಿತ ಸುದ್ದಿ ಮಾಧ್ಯಮಗಳನ್ನು ಪ್ರಸಾರ ಆಗುತ್ತಿದ್ದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ವರದಿ ಕೇಳಿ, ಇಂತಹ ಘಟನೆಗಳು ಮರುಕಳಿಸದಂತೆ ಸೂಚನೆ ನೀಡಿತ್ತು. ಪುನಃ 2026ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಕೋರಮಂಗಲದ ಖಾಸಗಿ ಪಿಯು ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿಯೂ ಜನಿವಾರವನ್ನು ತೆಗೆಸಲಾಗಿತ್ತು. ಈ ಸಂಬಂಧ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಮೂವರು ಸಿಬ್ಬಂದಿಯನ್ನು ವಜಾ ಮಾಡಿತ್ತು. ಜೊತೆಗೆ, ಘಟನೆಗೆ ಸಂಬಂಧಪಟ್ಟ ಮೂವರನ್ನು ಪೊಲೀಸರು ಬಂಧಿಸಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದರು.