ನಾಗಮಂಗಲ (ನ.24):  ಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ ಮಾಡಿಕೊಂಡು ಕಾಂಗ್ರೆಸ್‌ ಕಾರ್ಯಕರ್ತನಿಗೆ ಬಿಜೆಪಿ ಶಾಲು ಹಾಕಿ ಅಧ್ಯಕ್ಷ ಸ್ಥಾನಕ್ಕೆ ತಂದು ಕೂರಿಸಿದ್ದಾರೆ ಎಂದು ಮಾಜಿ ಸಚಿವ ಎನ್‌. ಚಲುವರಾಯಸ್ವಾಮಿ ವ್ಯಂಗ್ಯವಾಡಿದರು.

ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭಾನುವಾರ ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸುತ್ತಿರುವ ರೈತರ ಜತೆ ಮಠದ ಸಭಾಂಗಣದಲ್ಲಿ ಚರ್ಚಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಡಿಸಿಸಿ ಬ್ಯಾಂಕ್‌ನಲ್ಲಿ ಕಾಂಗ್ರೆಸ್‌ಗೆ ಬಹುಮತವಿದ್ದರೂ ಬಿಜೆಪಿ ಮತ್ತು ಜೆಡಿಎಸ್‌ ಅಧಿಕಾರದಾಸೆಗೆ ಮೈತ್ರಿಯಾಗಿ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಡಿಸಿಸಿ ಬ್ಯಾಂಕ್‌ನ ಅಧಿಕಾರಕ್ಕಾಗಿ ಸರ್ಕಾರದ ಮತಗಳನ್ನು ಪಡೆಯುವ ದೃಷ್ಟಿಯಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಎಚ್‌ಡಿಕೆಗೆ ಜಿಲ್ಲೆಯ ಅಭಿವೃದ್ಧಿ ಹಾಗೂ ರೈತಪರ ಕೆಲಸ ಬೇಕಾಗಿಲ್ಲ. ಕೇವಲ ಅಧಿಕಾರವಷ್ಟೇ ಬೇಕಾಗಿದೆ. ಬಿಜೆಪಿಗೆ ಅಧ್ಯಕ್ಷ ಸ್ಥಾನ ಕೊಟ್ಟಿರುವುದೇ ಜೆಡಿಎಸ್‌ನವರ ಸಾಧನೆಯಾಗಿದೆ. ಈಗ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತನಿಗೆ ಬಿಜೆಪಿ ಶಾಲು ಹಾಕಿ ಅಧ್ಯಕ್ಷನನ್ನಾಗಿ ಮಾಡಲಾಗಿದೆ. ಡಿಸಿಸಿ ಬ್ಯಾಂಕ್‌ ಅಧಿಕಾರ ಈ ಎಲ್ಲ ಬೆಳವಣಿಗೆಗಳಿಂದ ಕೈತಪ್ಪಿರುವುದಕ್ಕೆ ಯಾವುದೇ ಬೇಸರವಿಲ್ಲ ಎಂದರು.

ಜೆಡಿಎಸ್‌ನಲ್ಲಿ ನಡೆಯುತ್ತಿದೆ ಭರ್ಜರಿ ಸಿದ್ಧತೆ : 28ರಂದು ಎಚ್‌ಡಿಕೆ ಸಭೆ ...

ಮೈಷುಗರ್‌ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆ ಮುಚ್ಚಿದಾಗ ಮುಖ್ಯಮಂತ್ರಿ ಬಳಿ ಹೋಗದ ಜೆಡಿಎಸ್‌, ಈಗ ಡಿಸಿಸಿ ಬ್ಯಾಂಕ್‌ ಅಧಿಕಾರಕ್ಕಾಗಿ ಹೋಗಿರುವುದು ಜನರ ಹಿತದೃಷ್ಟಿಗಿಂತ ವೈಯಕ್ತಿಕ ಹಿತಾಸಕ್ತಿಯೇ ಮೇಲು ಎಂಬುದನ್ನು ಸಾಕ್ಷೀಕರಿಸುತ್ತದೆ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಟೀಕಿಸಿದರು.

ಚುಂಚಶ್ರೀಗಳು ನೇತೃತ್ವ:  ಬೆಳ್ಳೂರು ಹೋಬಳಿ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ರೈತರ ಜಮೀನನ್ನು ಸ್ವಾಧೀನಪಡಿಸಿರುವುದನ್ನು ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಈ ವಿಚಾರದಲ್ಲಿ ರಾಜಕೀಯ ಮಾಡುವುದು ತರವಲ್ಲ. ಕೈಗಾರಿಕೆ ಸ್ಥಾಪನೆ ಈ ಭಾಗದಲ್ಲಿ ಸಂಪೂರ್ಣವಾಗಿ ಬೇಡವೆಂಬುದು ನಮ್ಮ ಒತ್ತಾಯವಾಗಿದೆ. ಈ ಕುರಿತು ಸರ್ಕಾರದ ಜತೆ ಮಾತನಾಡಲಾಗಿದ್ದು, ರೈತರಿಗೆ ನ್ಯಾಯ ಸಿಗುವ ಎಲ್ಲ ವಿಶ್ವಾಸವಿದೆ. ಇದರ ನೇತೃತ್ವವನ್ನು ಆದಿಚುಂಚನಗಿರಿಯ ಶ್ರೀಗಳು ವಹಿಸಿದ್ದು, ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದರು.