ಚಿಕ್ಕಮಗಳೂರು: ಕಳಸ ತಾಲೂಕಿನಲ್ಲಿ ಹದಗೆಟ್ಟ ರಸ್ತೆ: ವ್ಯಂಗ್ಯ ಚಿತ್ರಗಳ ಮೂಲಕ ಆಕ್ರೋಶ
Chikkamagaluru Kalasa Taluku Dusty Road: ಹದಗೆಟ್ಟ ರಸ್ತೆಯ ದುಸ್ಥಿತಿಯನ್ನು ವ್ಯಂಗ್ಯ ಚಿತ್ರಗಳ ಮೂಲಕ ವಿಡಂಬನೆ ಮಾಡಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ನ. 07): ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಳಸ ತಾಲ್ಲೂಕಿನ ಹದಗೆಟ್ಟ ರಸ್ತೆಯ ದುಸ್ಥಿತಿಯನ್ನು ವ್ಯಂಗ್ಯ ಚಿತ್ರಗಳ (Caricature) ಮೂಲಕ ವಿಡಂಬನೆ ಮಾಡಿರುವ ಪೋಟೋಗಳು ಇಂದು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿವೆ. ರಸ್ತೆ ದುರಸ್ತಿಗೆ ಅಗ್ರಹಿಸಿ ಜನರು ವಿನೂತನವಾಗಿ ಸಾಮಾಜಿಕ ಜಾಲತಾಣವನ್ನು ಬಳಕೆ ಮಾಡಿಕೊಂಡು ಅಧಿಕಾರಿಗಳು ಜನಪ್ರತಿನಿಧಿಗಳನ್ನು ಎಚ್ಚರಿಸುವ ಪ್ರಯತ್ನವನ್ನು ಮಾಡಿದ್ದಾರೆ. ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಸೆಳೆಯುವ ನಿಟ್ಟಿನಲ್ಲಿ ನಾಗರಿಕರು ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದು, ರಸ್ತೆ ದೂಳಿನಿಂದಾಗುತ್ತಿರುವ ಸಮಸ್ಯೆಗಳನ್ನು ವ್ಯಂಗ್ಯ ಚಿತ್ರಗಳ ಮೂಲಕ ಬಿಂಬಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಕಳಸ ಪಟ್ಟಣದ ಮುಖ್ಯ ರಸ್ತೆ ಹಾಗೂ ಹೊರನಾಡು ರಸ್ತೆ ಸಂಪೂರ್ಣವಾಗಿ ಹೊಂಡಗುಂಡಿಗಳಿಂದ ಹದಗೆಟ್ಟಿದ್ದು, ರಸ್ತೆಗಳಲ್ಲಿ ವಾಹನಗಳು ಸಂಚರಿಸುವ ವೇಳೆ ಭಾರೀ ಧೂಳು ಎದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಒಂದು ಕಿಲೋ ಮೀಟರ್ ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕರು ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮನವಿ ಮಾಡಿದರೂ ಪುಯೋಜನವಾಗಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ನಾಗರಿಕರು ರಸ್ತೆ ದುರಸ್ತಿಗೆ ಆಗ್ರಹಿಸಿ ಅಧಿಕಾರಿಗಳ ಗಮನಸೆಳೆಯಲು ವ್ಯಂಗ್ಯ ಚಿತ್ರಗಳನ್ನು ಸೃಷ್ಟಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ. ಈ ವ್ಯಂಗ್ಯ ಚಿತ್ರಗಳು ರಸ್ತೆ ಅವ್ಯವಸ್ಥೆಯಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳನ್ನು ಬಿಂಬಿಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ಕಾರವಾರ: ಧೂಳುಮಯ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ: ಸವಾರರ ಪರದಾಟ