ಚಿಕ್ಕಮಗಳೂರಿನಲ್ಲಿ ಕೃಷಿ ಜಮೀನು ಸರ್ವೆಗೆ ಲಕ್ಷಗಟ್ಟಲೆ ಲಂಚ ಕೇಳಿದ ಇಬ್ಬರು ಸರ್ವೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮತ್ತೊಂದೆಡೆ, ರಸ್ತೆ ಗುಂಡಿಗಳನ್ನು ವಿರೋಧಿಸಿ ಬಿಜೆಪಿ ನಾಯಕರು ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಚಿಕ್ಕಮಗಳೂರು: ಲಕ್ಷ ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಸರ್ವೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಸರ್ವೆಯರ್ ದೊರೆರಾಜ್, ರಂಗನಾಥ್ ಅಧಿಕಾರಿಗಳಾಗಿದ್ದಾರೆ.
ಏನಿದು ಪ್ರಕರಣ?
ಬಂಧಿತ ಅಧಿಕಾರಿಗಲು ಕೃಷಿ ಜಮೀನಿನ ಸರ್ವೆ ಮಾಡಿ ಸ್ಕೆಚ್ ತಯಾರಿಸಲು 10 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರಂತೆ. ಚಿಕ್ಕಮಗಳೂರು ನಗರದ ಹೊರವಲಯದ ಇಂದಾವರ ಗ್ರಾಮದ ಧರಣೇಶ್ ಅವರ ಕೃಷಿ ಜಮೀನು ಸರ್ವೆಗಾಗಿ 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರ, ಇದರಿಂದ ನೊಂದು ರೈತ ಲೋಕಾಯುಕ್ತ ಕಚೇರಿಯಲ್ಲಿ ದೂರು ನೀಡಿದ್ದರಂತೆ.
ಇದರಂತೆ ಮುಂಗಡವಾಗಿ ಎರಡು ಲಕ್ಷ ರೂಪಾಯಿ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಧಿಕಾರಿಗಳು ತಮ್ಮ ಖಾಸಗಿ ಕಚೇರಿಯಲ್ಲಿ ಎರಡು ಲಕ್ಷ ಪಡೆಯುವಾಗ ಬಲೆಗೆ ಬಿದ್ದಿದ್ದು, ಚಿಕ್ಕಮಗಳೂರು ಲೋಕಾಯುಕ್ತ ಡಿ ವೈ ಎಸ್ ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಘಟನೆ ಸಂಬಂಧ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.
ರಸ್ತೆಯಲ್ಲಿನ ಗುಂಡಿಗಳ ವಿರುದ್ಧ ಬೀದಿಗಿಳಿದ ಬಿಜೆಪಿ
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಗ್ರಾಮದಲ್ಲಿ ಬಿಜೆಪಿ ನಾಯಕರು, ಆಲ್ದೂರು ಟು ಚಿಕ್ಕಮಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ರಸ್ತೆಯಲ್ಲಿನ ಗುಂಡಿಗೆ ಬಾಳೆಗಿಡ ನೆಟ್ಟು ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಚಿಕ್ಕಮಗಳೂರು-ಆಲ್ದೂರು-ಬಾಳೆಹೊನ್ನೂರು-ಶೃಂಗೇರಿ ಮಾರ್ಗದಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿ ಬಿದ್ದಿರುವ ಕಾರಣ, ರಸ್ತೆ ದುರಸ್ಥಿ ಮಾಡುವಂತೆ 18 ಕಿ.ಮೀ ಪಾದಯಾತ್ರೆ ಕೈಗೊಂಡಿದ್ದಾರೆ. ಶೃಂಗೇರಿ ಶಾಸಕ ರಾಜೇಗೌಡ, ಮೂಡಿಗೆರೆ ಶಾಸಕಿ ನಯನ ಮೋಟಮ್ಮ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಳೆಗಾಲದಲ್ಲಿ ಬೇಸಿಗೆ ಬರಲಿ ಅಂತಾರೆ, ಬೇಸಿಗೆಯಲ್ಲಿ ಕೆಲಸ ಮಾಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


