ಚಿಕ್ಕಮಗಳೂರಿನ ಕಾಫಿ ಎಸ್ಟೇಟ್ ಒಂದರಲ್ಲಿ ತಮಿಳುನಾಡು ಮೂಲದ ವಲಸೆ ಕಾರ್ಮಿಕರ ಮೇಲೆ ಮಾಲೀಕನಿಂದ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಹಿಳೆಗೆ ಥಳಿಸಿ, ಬಂದೂಕು ತೋರಿಸಿ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸ್ ತನಿಖೆ ಆರಂಭವಾಗಿದೆ.
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಫಿ ಎಸ್ಟೇಟ್ ಮಾಲೀಕನ ವಿರುದ್ಧ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಿದ ಗಂಭೀರ ಆರೋಪ ಕೇಳಿಬಂದಿದೆ. ತಮಿಳುನಾಡು ಮೂಲದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ, ಬಂದೂಕು ತೋರಿಸಿ ಜೀವ ಬೆದರಿಕೆ ಹಾಕಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಮಹಿಳೆಯರು ಮತ್ತು ಮಕ್ಕಳನ್ನೂ ಜೀತದಾಳುಗಳಂತೆ ನಡೆಸಿಕೊಂಡಿದ್ದಾರೆ ಎನ್ನಲಾಗಿದ್ದು, ಮಹಿಳೆಯೊಬ್ಬರ ಮೇಲೆ ಪೈಪ್ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿರುವ ಆರೋಪವೂ ಕೇಳಿಬಂದಿದೆ. ಸದ್ಯ ಹಲ್ಲೆಗೊಳಗಾದ ಮೀನಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರ್ಮಿಕರ ಮೇಲೆ ಹಲ್ಲೆ ಆರೋಪ
ಇದು ಕಾಫಿನಾಡಿನ ಕಾಫಿ ತೋಟದಲ್ಲಿ ನಡೆದಿರುವ ಅಮಾನವೀಯ ಕೃತ್ಯ, ಕಾಫಿ ತೋಟದಲ್ಲಿ ದುಡಿಯುವ ಕಾರ್ಮಿಕರ ಮೇಲೆ ಎಸ್ಟೇಟ್ ಮಾಲೀಕನ ದೌರ್ಜನ್ಯವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ, ಮನುಷ್ಯತ್ವವನ್ನೇ ಬಿಟ್ಟು ತೋಟದ ಮಾಲಿಕ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾತ್ರವಲ್ಲ ಬಂದೂಕು ತೋರಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದಲ್ಲಿ ನಡೆದಿದೆ.
ಬಂದೂಕು ತೋರಿಸಿ ಬೆದರಿಕೆ, ಆಸ್ಪತ್ರೆ ಸೇರಿದ ಮಹಿಳೆ
ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾಫಿ ಎಸ್ಟೇಟ್ನಲ್ಲಿ ತಮಿಳುನಾಡು ಮೂಲದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಸ್ಟೇಟ್ ಮಾಲೀಕ ಭರತ್ ಎಂಬುವವರ ವಿರುದ್ಧ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. 60 ಎಕ್ರೆ ಕಾಫಿತೋಟವನ್ನು ಹೊಂದಿರುವ ಭರತ್, ಕಾಫಿ ತೋಟದ ಕೆಲಸಕ್ಕೆ ಹೊರ ಜಿಲ್ಲೆ, ರಾಜ್ಯದ ಕಾರ್ಮಿಕರನ್ನು ಕರೆತಂದಿದ್ದರು, ಕೆಲವರಿಗೆ ಸಾಲ ಕೊಟ್ಟು ನಿತ್ಯವೂ ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಅದೇ ರೀತಿ ತಮಿಳುನಾಡು ಮೂಲದ ಮೀನಾ ಅವರ ಕುಟುಂಬಕ್ಕೂ ಸಾಲಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಮೀನಾ ಕುಟುಂಬ ಕಳೆದ ಎರಡು ಮೂರು ದಿನಗಳಿಂದ ಕೆಲಸಕ್ಕೆ ಬಾರದೆ ಪಕ್ಕದ ತೋಟದ ಕೆಲಸಕ್ಕೆ ಹೋಗುತ್ತಿದ್ದರು. ಇದೇ ವಿಚಾರಕ್ಕೆ ಮಾತಿನ ಚಕ್ಕಿಮಕ್ಕಿ ನಡೆದು ಗಲಾಟೆ ಆಗಿದೆ. ಇನ್ನೊಂದೆಡೆ ಕಾರ್ಮಿಕ ಮಹಿಳೆಯ ಮೇಲಿನ ಹಲ್ಲೆ ಪ್ರಕರಣವನ್ನು ದಲಿತ ಹಾಗೂ ಕಾರ್ಮಿಕ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.
ವಲಸೆ ಕಾರ್ಮಿಕರಿಗೆ ಸೂಕ್ತ ರಕ್ಷಣೆ ನೀಡಬೇಕು. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿಯ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಈಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳೆಯ ಮೇಲೆ ಪೈಪ್ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಕಾರ್ಮಿಕರನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸಿಸಲಾಗುತ್ತಿತ್ತು. ಜೀತದಾಳುಗಳಂತೆ ನಡೆಸಿಕೊಳ್ಳಲಾಗುತ್ತಿತ್ತು. ಪ್ರಶ್ನಿಸಿದರೆ ಬಂದೂಕು ತೋರಿಸಿ ಜೀವ ಬೆದರಿಕೆ ಹಾಕಲಾಗುತ್ತಿತ್ತು ಎನ್ನುವುದು ಕಾರ್ಮಿಕರ ಕಡೆಯಿಂದ ಕೇಳಿಬರುತ್ತಿರುವ ಗಂಭೀರ ಆರೋಪ.
ಹಲ್ಲೆಯಿಂದ ಗಾಯಗೊಂಡಿರುವ ಕಾರ್ಮಿಕ ಮಹಿಳೆ ಮೀನಾ ಸದ್ಯ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ವಾರ್ಡ್ನಲ್ಲೇ ನಡೆದ ಘಟನೆಯನ್ನು ವಿವರಿಸಿರುವ ಮೀನಾ, ಎಸ್ಟೇಟ್ ಮಾಲೀಕ ಭರತ್ ಅವರು ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಿದೆ. ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಅವರು ಸಂತ್ರಸ್ತೆ ಮೀನಾ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಒಟ್ಟಿನಲ್ಲಿ, ಕಾಫಿನಾಡಿನ ಎಸ್ಟೇಟ್ನಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆದಿದೆಯೆನ್ನಲಾದ ದೌರ್ಜನ್ಯ ಪ್ರಕರಣ ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ದುಡಿಯುವ ಕೈಗಳಿಗೆ ರಕ್ಷಣೆ ನೀಡಬೇಕಾದ ವ್ಯವಸ್ಥೆಯೇ ಎಲ್ಲಿ ವಿಫಲವಾಗಿದೆ? ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಹೊಣೆ ಯಾರು? ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಸಂತ್ರಸ್ತ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಹಾಗೂ ನ್ಯಾಯ ಸಿಗಬೇಕಿದೆ. (ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು)












