ಬೆಳಗಾವಿ ಗಡಿ, ಮಹದಾಯಿ ಸಮಸ್ಯೆ ನಿವಾರಣೆಗೆ ಕ್ರಮ: CM BSY
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಎರಡು ತಿಂಗಳಿಗೊಮ್ಮೆ ಸಂಪುಟ ಸಭೆ| ಬಜೆಟ್‌ನಲ್ಲಿ ಭಾಗ್ಯಲಕ್ಷ್ಮಿ ಯೋಜನೆಗೆ ಆದ್ಯತೆ:ಸಿಎಂ| ಮಹದಾಯಿ ವಿವಾದ ಬಗೆಹರಿಸಲು ಶ್ರಮ| ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆ|
ಬೆಳಗಾವಿ/ಶಿವಮೊಗ್ಗ(ಜ.30): ಬೆಳಗಾವಿ, ಮಹಾರಾಷ್ಟ್ರ ನಡುವಿನ ಗಡಿ ವಿವಾದ ಮತ್ತು ಕರ್ನಾಟಕ, ಗೋವಾ ನಡುವಿನ ಮಹದಾಯಿ ವಿವಾದವನ್ನು ಬಗೆಹರಿಸಲು ಶ್ರಮಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಎಂಇಎಸ್‌ನಿಂದಾಗಿ ಇತ್ತೀಚೆಗೆ ಬೆಳಗಾವಿ, ಮಹಾರಾಷ್ಟ್ರ ನಡುವಿನ ಗಡಿ ವಿವಾದ ಮತ್ತೆ ಬುಗಿಲೆದ್ದಿರುವುದರಿಂದ ಮುಖ್ಯಮಂತ್ರಿಗಳ ಹೇಳಿಕೆ ಮಹತ್ವ ಪಡೆದಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಬುಧವಾರ ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇವೆ. ಅದೇ ರೀತಿ ಮಹಾರಾಷ್ಟ್ರದ ಜತೆ ನೀರು ವಿನಿಮಯ ಕುರಿತು ದೆಹಲಿಯಲ್ಲಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಎರಡು ತಿಂಗಳಿಗೊಮ್ಮೆ ಸಚಿವ ಸಂಪುಟದ ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ, ಯಾವ ಪ್ರಮುಖ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು ಎಂಬುದರ ಕುರಿತು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಪಿಎಫ್‌ಐ ನಿಷೇಧ ತೀರ್ಮಾನವಾಗಿಲ್ಲ:
ರಾಜ್ಯದಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಈ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಯಾವ ಚರ್ಚೆ ಕೂಡ ನಡೆದಿಲ್ಲ ಎಂದು ತಿಳಿಸಿದರು. ಪ್ರವಾಹದಿಂದ ಉಂಟಾಗಿರುವ ಹಾನಿ ಸರಿಪಡಿಸಲು ಮೂಲಸೌಕರ್ಯಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ 865 ಕೋಟಿ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಕೂಡ ಸ್ಪಂದಿಸಿದೆ. ನೆರೆ ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಮಾಡುತ್ತಿವೆ ಎಂದು ತಿಳಿಸಿದರು.
ಸ್ಮಾರ್ಟ್‌ಸಿಟಿ ಕಾಮಗಾರಿಗೆ ಮೆಚ್ಚುಗೆ:
ಬೆಳಗಾವಿ ಮಹಾನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಯಡಿಯೂರಪ್ಪ, ಸ್ಮಾರ್ಟ್ ಸಿಟಿ ಕಾಮಗಾರಿ ಒಳ್ಳೆಯ ರೀತಿಯಲ್ಲಿ ಆಗಿವೆ. ಇನ್ನಷ್ಟು ಚುರುಕುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ, ಆರ್ಥಿಕವಾಗಿ ರಾಜ್ಯದ ಪ್ರಮುಖ ನಗರವಾಗಿ ಬೆಳಗಾವಿ ಬೆಳೆದಿದೆ. ಸ್ಮಾರ್ಟ್ ಸಿಟಿಯಡಿ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಿರುವುದು ಶ್ಲಾಘನೀಯವಾಗಿದೆ. ಸಂಚಾರ ದಟ್ಟಣೆ ನಿರ್ವಹಣೆ ವಿನೂತನ ಪ್ರಯತ್ನ ಇದಾಗಿದೆ. ಸ್ಮಾರ್ಟ್ ಸಿಟಿಯಡಿ ಕೈಗೊಳ್ಳುವ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ದಾವೋಸ್‌ನಲ್ಲಿ ನಡೆದ ಕೈಗಾರಿಕೋದ್ಯಮ ಮೇಳದಲ್ಲಿ 40ಕ್ಕೂ ಹೆಚ್ಚು ಕೈಗಾರಿಕಾ ಉದ್ಯಮಿಗಳ ಜೊತೆ ಮಾತನಾಡಿದ್ದೇನೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸಲು ತಮಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದೇನೆ. ರಾಜ್ಯದಲ್ಲಿ ಹೊಸ ಹೊಸ ಉದ್ಯಮವನ್ನು ಬೆಳೆಸಲು ಶ್ರಮಿಸಲಾಗುವುದು ಎಂದು ತಿಳಿಸಿದರು.
ಬಜೆಟ್‌ನಲ್ಲಿ ಕೃಷಿಗೆ ಒತ್ತು:
ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಈ ಮೂಲಕ ರೈತರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಶ್ರಮಿಸಲಿದೆ ಎಂದು ಭರವಸೆ ನೀಡಿದರು. ಅದೇ ರೀತಿ ಬಜೆಟ್‌ನಲ್ಲಿ ಭಾಗ್ಯಲಕ್ಷ್ಮಿ ಯೋಜನೆಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.