ಬೊಮ್ಮಾಯಿ ತವರು ಹಾವೇರಿಯಲ್ಲಿ ಇಂದು ಸಿದ್ದು ಪ್ರಗತಿ ಪರಿಶೀಲನೆ
ತಿಂಗಳ ಹಿಂದೆ ದಾವಣಗೆರೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದ ಸಿದ್ದರಾಮಯ್ಯ, ಬಳಿಕ ಬಜೆಟ್ ಅಧಿವೇಶನದಲ್ಲಿ ಬ್ಯುಸಿಯಾಗಿದ್ದರು. ಈಗ ನೇರವಾಗಿ ಹಾವೇರಿಯಿಂದಲೇ ಪ್ರಗತಿ ಪರಿಶೀಲನೆ ಆರಂಭಿಸುತ್ತಿರುವುದು ರಾಜಕೀಯ ಮಹತ್ವವನ್ನೂ ಪಡೆದುಕೊಂಡಿದೆ.
ಹಾವೇರಿ(ಜು.25): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹಾವೇರಿಗೆ ಭೇಟಿ ನೀಡಲಿದ್ದು, ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯಿಂದಲೇ ಸಿದ್ದರಾಮಯ್ಯನವರು ಉತ್ತರ ಕರ್ನಾಟಕ ಪ್ರವಾಸ ಆರಂಭಿಸಿರುವುದು ಮಹತ್ವ ಪಡೆದುಕೊಂಡಿದೆ.
ತಿಂಗಳ ಹಿಂದೆ ದಾವಣಗೆರೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದ ಸಿದ್ದರಾಮಯ್ಯ, ಬಳಿಕ ಬಜೆಟ್ ಅಧಿವೇಶನದಲ್ಲಿ ಬ್ಯುಸಿಯಾಗಿದ್ದರು. ಈಗ ನೇರವಾಗಿ ಹಾವೇರಿಯಿಂದಲೇ ಪ್ರಗತಿ ಪರಿಶೀಲನೆ ಆರಂಭಿಸುತ್ತಿರುವುದು ರಾಜಕೀಯ ಮಹತ್ವವನ್ನೂ ಪಡೆದುಕೊಂಡಿದೆ. ರಾಜ್ಯದಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ನಡೆದ 42 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಹಾವೇರಿ ಜಿಲ್ಲೆಯಲ್ಲೇ 18 ರೈತರ ಆತ್ಮಹತ್ಯೆ ಪ್ರಕರಣ ನಡೆದಿದ್ದು, ವಿಧಾನಸಭೆಯ ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರೂ ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿದ್ದರು. ಈಗ ಅಧಿವೇಶನ ಮುಗಿಯುತ್ತಲೇ ದಿಢೀರ್ ಆಗಿ ಮುಖ್ಯಮಂತ್ರಿಗಳ ಪ್ರವಾಸ ಆಯೋಜನೆಗೊಂಡಿದೆ.
ಡಿ.21ಕ್ಕೆ ಮೈಲಾರ ಲಿಂಗೇಶ್ವರ ದೇಗುಲದಲ್ಲಿ ಬೃಹತ್ ದೋಣಿ ಸೇವೆ, ಏನಿದು ದೋಣಿ ಸೇವೆ?
ಸಿದ್ದರಾಮಯ್ಯನವರು ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ 11.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ದಾರೆ. ನಂತರ, 11.45ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಹಾವೇರಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 12.30ರಿಂದ ಸಂಜೆ 5.30ರವರೆಗೆ ಹಾವೇರಿಯ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಈ ವೇಳೆ, ಜಿಲ್ಲೆಯ ರೈತರ ಆತ್ಮಹತ್ಯೆ ಬಗ್ಗೆಯೂ ಮಾಹಿತಿ ಪಡೆಯುವ ಸಾಧ್ಯತೆಯಿದೆ. ಸಭೆ ಬಳಿಕ, ಹಾವೇರಿಯಿಂದ ರಸ್ತೆ ಮೂಲಕ ಹುಬ್ಬಳ್ಳಿಗೆ ಆಗಮಿಸಿ, ಅಲ್ಲಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ತವರು ಜಿಲ್ಲೆ ಮೈಸೂರಿಗಿಂತ ಮೊದಲು ಹಾವೇರಿಯಲ್ಲಿ ಪ್ರಗತಿ ಪರಿಶೀಲನೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೇರಿದಂತೆ ಜಿಲ್ಲೆಯ ಶಾಸಕರು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.