ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ತ್ವರಿತ ಪರಿಹಾರ ನೀಡಿ: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಕೆಲವು ತಾಂತ್ರಿಕ ಕಾರಣಗಳು ಅಡ್ಡಿಯಾಗುತ್ತಿದ್ದು, ಇಂಥ ಸಂದರ್ಭದಲ್ಲಿ ತ್ವರಿತ ಕ್ರಮವಾಗಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ 

Compensation to the Family of the Farmer who Committed Suicide Says Lakshmi Hebbalkar grg

ಬೆಳಗಾವಿ(ಮೇ.31): ಮಳೆಗಾಲ ಶುರುವಾಗುತ್ತಿದ್ದು, ಜಿಲ್ಲೆಯಲ್ಲಿ ನಾಳೆಯಿಂದಲೇ ಎಲ್ಲ ಸ್ಥಳೀಯ ಶಾಸಕರ ಗಮನಕ್ಕೆ ತಂದು ರೈತರಿಗೆ ಬೀಜ​-ಗೊಬ್ಬರ ವಿತರಣೆ ಕಾರ್ಯ ಆರಂಭಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಸೂಚನೆ ನೀಡಿದರು. ಇಲ್ಲಿನ ಸುವರ್ಣ ವಿಧಾನ ಸೌಧದಲ್ಲಿ ಮಂಗಳವಾರ ಜಿಲ್ಲೆಯ ಅಭಿವೃದ್ಧಿ ಕುರಿತು ನಡೆದ ಎಲ್ಲ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೀಜ ಖರೀದಿಗೆ ರೈತರು ದೂರ ಅಲೆಯುವುದನ್ನು ತಪ್ಪಿಸಲು ಆದಷ್ಟುಸಮೀಪದಲ್ಲೇ ಬೀಜ ಲಭಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರ ಬಾಕಿ ಇದ್ದರೆ ಕೂಡಲೇ ಬಿಡುಗಡೆ ಮಾಡಬೇಕು. ಆತ್ಮಹತ್ಯೆ ವರದಿಯಾದ ಕೂಡಲೇ ಮರಣೋತ್ತರ ಪರೀಕ್ಷೆ ನಡೆಸಿ ಪರಿಹಾರ ಬಿಡುಗಡೆಗೊಳಿಸಬೇಕು. ಈ ನಿಟ್ಟಿನಲ್ಲಿ ತಹಶೀಲ್ದಾರ್‌ ಹಾಗೂ ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ತಿಳಿಸಿದರು.

ಅತ್ತೆ ಒಪ್ಪಿದಲ್ಲಿ ಮಾತ್ರ ಸೊಸೆಗೆ ಕಾಂಗ್ರೆಸ್‌ ಗ್ಯಾರಂಟಿ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಿಪತ್ತು ಸಂದರ್ಭದಲ್ಲಿ ಜಾನುವಾರುಗಳು ಮೃತಪಟ್ಟಾಗ ಅವುಗಳ ಮಾಲೀಕರಿಗೆ ಅಧಿಕಾರಿಗಳು ಸ್ವತಃ ಮನೆಗೇ ತೆರಳಿ ಪರಿಹಾರ ವಿತರಿಸಬೇಕು. ಪರಿಹಾರ ಪಡೆಯುವ ಪ್ರಕ್ರಿಯೆ ಗೊತ್ತಿಲ್ಲದಿರುವುದರಿಂದ ಅನೇಕ ಜನರು ಪರಿಹಾರ ಪಡೆಯಲು ಮುಂದಾಗುತ್ತಿಲ್ಲ. ಆದ್ದರಿಂದ ಅಧಿಕಾರಿಗಳೇ ಆಸಕ್ತಿ ವಹಿಸಿ ಪರಿಹಾರ ನೀಡಬೇಕು ಎಂದು ನಿರ್ದೇಶಿಸಿದರು.

ಅತಿಥಿ ಶಿಕ್ಷಕರನ್ನು ನೇಮಿಸಿ:

ಶಾಲೆ ಆರಂಭಗೊಳ್ಳುತ್ತಿರುವುದರಿಂದ ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆ ಆರಂಭಿಸಬೇಕು. ಶಿಥಿಲಗೊಂಡಿರುವ ಶಾಲಾ ಕಟ್ಟಡಗಳನ್ನು ತೆರವುಗೊಳಿಸಬೇಕು. ಜಿಲ್ಲೆಯ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಔಷಧಿಗಳ ದಾಸ್ತಾನು ಇರಬೇಕು. ಬೆಳಗಾವಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣ ಒದಗಿಸಿ ಶೀಘ್ರವೇ ಉದ್ಘಾಟನೆಗೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅತಿ ಹೆಚ್ಚು ಬಿಪಿಎಲ… ಕಾರ್ಡ್‌ ಇರುವ ಕಡೆಗಳಲ್ಲಿ ಪಡಿತರ ಅಂಗಡಿ ಆರಂಭಿಸಲು ಪರವಾನಿಗೆ ನೀಡಬೇಕು ಎಂದು ಸಚಿವ ಸತೀಶ್‌ ಜಾರಕಿಹೊಳಿ ಸೂಚನೆ ನೀಡಿದರು.

ಕುಡಿವ ನೀರು ಯೋಜನೆ ಪೂರ್ಣಗೊಳಿಸಿ:

ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬವಾದಷ್ಟುಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬಗೊಳ್ಳಬಾರದು. ಅಧಿಕಾರಿಗಳು ನಿರಂತರ ನಿಗಾ ವಹಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಳಗಾವಿ ನಗರದ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಪ್ರಮುಖ ವಿಷಯಗಳ ಕುರಿತು ಪ್ರತ್ಯೇಕವಾಗಿ ಸಭೆ ನಡೆಸಿ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಹೊಸ ಸರ್ಕಾರದ ಆಶಯದಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಜನರಿಗೆ ಉತ್ತಮ ಆಡಳಿತ ನೀಡಬೇಕು. ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು. ಕ್ರಿಯಾಶೀಲ ಅಧಿಕಾರಿಗಳಿಗೆ ಕೆಲಸ ಮಾಡಲು ಪೋ›ತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದರು.
ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಪಿಕೆಪಿಎಸ್‌ ಮೂಲಕ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಸಿಡಿಲು ಬಡಿದು ರೈತರ ಬಣವೆ ಸುಟ್ಟಾಗ ನೈಸರ್ಗಿಕ ವಿಪತ್ತು ಮಾರ್ಗಸೂಚಿಯಡಿ ಕೂಡಲೇ ಪರಿಹಾರ ಬಿಡುಗಡೆಗೆ ಸೂಚಿಸುವಂತೆ ಸಚಿವರನ್ನು ಒತ್ತಾಯಿಸಿದರು.

ಬೆಳಗಾವಿಗೆ ಮತ್ತೆ ತನ್ನಿ ರೇಷ್ಮೆ ಇಲಾಖೆ:

ರೇಷ್ಮೆ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಬೆಳಗಾವಿಯಿಂದ ಹಾವೇರಿ ಜಿಲ್ಲೆಗೆ ಸ್ಥಳಾಂತರಿಸಲಾಗಿದೆ. ಆದ್ದರಿಂದ ಜಂಟಿ ನಿರ್ದೇಶಕರ ಕಚೇರಿಯನ್ನು ಮತ್ತೆ ಬೆಳಗಾವಿಗೆ ಸ್ಥಳಾಂತರಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು. ನೇಮಕಗೊಂಡ ಅತಿಥಿ ಶಿಕ್ಷಕರನ್ನು ನಿಯೋಜಿಸುವಾಗ ಶಿಕ್ಷಕರ ಕೊರತೆ ಇರುವ ಗ್ರಾಮೀಣ ಪ್ರದೇಶಗಳ ಶಾಲೆಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಒಟ್ಟಾರೆ 170 ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ವಿವರಿಸಿದರು. ತೋಟಗಾರಿಕೆ ಇಲಾಖೆ ಯಾವುದೇ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಮಾಡುವಾಗ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಮೂಲಕವೇ ಮಾಡಬೇಕು ಎಂದರು.

ಬೆಳಗಾವಿ ಉತ್ತರ ಶಾಸಕ ಆಸಿಫ್‌(ರಾಜು) ಸೇಠ್‌, ಶಿಕ್ಷಕರ ಕೊರತೆ ಇರುವ ಕಡೆಗಳಲ್ಲಿ ಕೂಡಲೇ ಅತಿಥಿ ಶಿಕ್ಷಕರನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಸವದತ್ತಿ ಶಾಸಕ ವಿಶ್ವಾಸ್‌ ವೈದ್ಯ, ಕಿತ್ತೂರು ಶಾಸಕ ಬಾಬಾಸಾಹೇಬ್‌ ಪಾಟೀಲ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಡಾ.ಸಾಬಣ್ಣ ತಳವಾರ ಸಭೆಯಲ್ಲಿ ಉಪಸ್ಥಿತರಿದ್ದರು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ… ಭೋಯರ, ಡಿಸಿಪಿ ಸ್ನೇಹಾ.ಪಿ.ವಿ ಸೇರಿದಂತೆ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ತ್ವರಿತ ಪರಿಹಾರ ನೀಡಿ: ಲಕ್ಷ್ಮಿ ಹೆಬ್ಬಾಳ್ಕರ್‌

ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಕೆಲವು ತಾಂತ್ರಿಕ ಕಾರಣಗಳು ಅಡ್ಡಿಯಾಗುತ್ತಿದ್ದು, ಇಂಥ ಸಂದರ್ಭದಲ್ಲಿ ತ್ವರಿತ ಕ್ರಮವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.

ಹನಿ ನೀರಾವರಿ ಯೋಜನೆ ಫಲಾನುಭವಿಗಳ ಆಯ್ಕೆ ವೇಳೆ ಆಯಾ ಮತಕ್ಷೇತ್ರದ ಶಾಸಕರ ಗಮನಕ್ಕೆ ತಂದು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಮಾಡುವ ಕೆಲಸ ರೈತರಿಗೆ ಉಪಯೋಗವಾಗಬೇಕು. ಅಗತ್ಯ ಶಾಲೆಗಳಿಗೆ ಡೆಸ್ಕ್‌ ಮತ್ತಿತರ ಪೀಠೋಪಕರಣ ಒದಗಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳ ದುರಸ್ತಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಿ ಮಾಹಿತಿ ನೀಡಿದರೆ ಸರ್ಕಾರದ ಮಟ್ಟದಲ್ಲಿ ಅನುಮೋದನೆ ಪಡೆದುಕೊಳ್ಳಲಾಗುವುದು. ಸಾಂಬ್ರಾದಲ್ಲಿ 3500 ಬಿಪಿಎಲ… ಕಾರ್ಡುದಾರರಿದ್ದು, ಹೆಚ್ಚುವರಿ ಪಡಿತರ ಅಂಗಡಿ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ನಿವೇಶನ ಅಗತ್ಯವಿರುವ ಮಾಹಿತಿಯನ್ನು ಕೂಡಲೇ ಪಡೆದುಕೊಂಡು ತಕ್ಷಣವೇ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ತಿಳಿಸಿದರು. ಕಂದಾಯ, ಗ್ರಾಮೀಣಾಭಿವೃದ್ಧಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ಅಂಗನವಾಡಿ ಕೇಂದ್ರ ಸ್ಥಾಪನೆಗೆ ನಿವೇಶನ ಒದಗಿಸಬೇಕು ಎಂದು ಸೂಚಿಸಿದರು.

ತಾಳ್ಮೆಯಿಂದ ಇರಿ, ಗ್ಯಾರಂಟಿ ಭರವಸೆ ಈಡೇರಿಸುತ್ತೇವೆ: ಲಕ್ಷ್ಮೀ ಹೆಬ್ಬಾಳ್ಕರ್

ಸಂಭವನೀಯ ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಚಂದನ ಹೊಸೂರ, ಬೆಕ್ಕಿನಕೇರಿ, ಬೆನಕನಹಳ್ಳಿ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅಧಿಕಾರಿಗಳು ಟ್ಯಾಂಕರ್‌ ಮೂಲಕ ಕುಡಿಯುವ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನೂತನ ಸಚಿವರಿಗೆ ಸನ್ಮಾನ

ನೂತನ ಸಚಿವರಾದ ಸತೀಶ್‌ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಹಾಗೂ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರು ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಿದರು. ಇದೇ ವೇಳೆ ಎಲ್ಲ ಶಾಸಕರನ್ನು ಜಿಲ್ಲಾಡಳಿತದ ಪರವಾಗಿ ಶಾಲು ಹೊದಿಸಿ, ಸಸಿಗಳನ್ನು ವಿತರಿಸಿ ಸನ್ಮಾನಿಸಲಾಯಿತು.

Latest Videos
Follow Us:
Download App:
  • android
  • ios