Asianet Suvarna News Asianet Suvarna News

ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಬೈರತಿ ಬಸವರಾಜ್

ಚಿಕ್ಕನಾಯಕನಹಳ್ಳಿ ಪಟ್ಟಣಕ್ಕೆ ಸಮಗ್ರ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲು 55.42 ಕೋಟಿ ರು.ವೆಚ್ಚದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ (ಬೈರತಿ) ತಿಳಿಸಿದರು.

Complete quality work on time says minister byrathi basavaraj at tumakuru gvd
Author
Bangalore, First Published Aug 6, 2022, 10:25 AM IST

ತುಮಕೂರು (ಆ.06): ಚಿಕ್ಕನಾಯಕನಹಳ್ಳಿ ಪಟ್ಟಣಕ್ಕೆ ಸಮಗ್ರ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲು 55.42 ಕೋಟಿ ರು.ವೆಚ್ಚದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ (ಬೈರತಿ) ತಿಳಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಚಿ.ನಾ.ಹಳ್ಳಿ ಪುರಸಭೆ ಸಂಯುಕ್ತಾಶ್ರಯದಲ್ಲಿ ಒಳಚರಂಡಿ ಯೋಜನೆಗೆ ಶಿಲಾನ್ಯಾಸ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ನಗರಾಭಿವೃದ್ಧಿ ಇಲಾಖೆಯಿಂದ ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಮೂಲಸೌಕರ್ಯಗಳನ್ನು ಒದಗಿಸಿ ನಾಗರಿಕರಿಗೆ ನೆಮ್ಮದಿಯ ವಾತಾವರಣ ಇರುವಂತೆ ಮಾಡಲಾಗಿದೆ.

ಅಮೃತ್‌ 2.0 ಯೋಜನೆಯಡಿ ಪಟ್ಟಣಕ್ಕೆ ನೀರು ಸರಬರಾಜು ಮಾಡಲು ಯೋಜನೆಯನ್ನು ಕೈಗೆತ್ತಿಕೊಳ್ಳಲು 76.41 ಕೋಟಿ ರು. ವೆಚ್ಚದಲ್ಲಿ ಪ್ರಸ್ತಾವನೆಯನ್ನು ತಯಾರಿಸಲಾಗುತ್ತಿದೆ. ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಒಳಚರಂಡಿ ವ್ಯವಸ್ಥೆ ನೀರು ಸರಬರಾಜು ಮಾಡಲಾಗುವುದು ಎಂದ ಅವರು, ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಇರುವ ಪ್ರತಿ ಮನೆಗಳಿಂದ ಬರುವ ತ್ಯಾಜ್ಯವನ್ನು ಸಂಗ್ರಹಿಸಿ ಅದನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಜಾಗವನ್ನು ಗುರುತಿಸಿ ನಿರ್ವಹಣೆ ಮಾಡಲಾಗುತ್ತಿದೆ. 

ಕನ್ನಡ ಶಾಲೆ ಮುಚ್ಚಿದರೆ ಮಾತೃಭಾಷೆಗೆ ಕುತ್ತು: ಡಾ.ಮಹೇಶ್‌ ಜೋಷಿ

ಹೇಮಾವತಿ ನೀರನ್ನು ಚಿಕ್ಕನಾಯಕನಹಳ್ಳಿ ಕೆರೆಗೆ ತುಂಬಿಸಿದ ನೀರನ್ನು ಶುದ್ದೀಕರಣ ಮಾಡಿ ಒದಗಿಸಲಾಗುತ್ತಿದ್ದು, ಸದ್ಯ ಶುದ್ದೀಕರಣ ಘಟಕ ಹಳೆಯದಾಗಿದೆ. ಅದನ್ನು ದುರಸ್ಥಿಗೊಳಿಸಬೇಕಾಗಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ಮೋಹನ್‌ ರಾಜ್‌ ಅವರು ದುರಸ್ಥಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಪುರಸಭೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡ ಹಳ್ಳಿಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಅಗತ್ಯವಿದ್ದು, ಹೊಸ ಬಡಾವಣೆಗಳ ನಿರ್ಮಾಣದೊಂದಿಗೆ ಕಡ್ಡಾಯವಾಗಿ ಪೈಪ್‌ಲೈನ್‌ ಮೂಲಕ ಶುದ್ದೀಕರಣಗೊಂಡ ನೀರು ಸರಬರಾಜು ಮಾಡಬೇಕು. 

ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಹೆಚ್ಚಿನ ಅಗತ್ಯ ನೆರವು ನೀಡುವಂತೆ ಸಚಿವರಿಗೆ ಮನವಿ ಮಾಡಿದರು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ಮೋಹನ್‌ರಾಜ್‌ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆದ್ಯತೆಯ ಮೇಲೆ ಒಳಚರಂಡಿ ನಿರ್ಮಾಣ ಮತ್ತು ಕುಡಿಯುವ ನೀರಿನ ಪೂರೈಕೆಯನ್ನು ಯೋಜಿತ ರೀತಿಯಲ್ಲಿ ಮಾಡಲಾಗುತ್ತಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಡಿಸೈನ್‌ ಬಿಲ್ಡ್‌ ಆಪರೇಟರ್‌ ಟ್ರಾನ್ಸಫರ್‌ ( ಡಿಬಿಒಟಿ) ಮೂಲಕ ಅತ್ಯಾಧುನಿಕ ರೀತಿಯಲ್ಲಿ ಒಳಚರಂಡಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಚಿಕ್ಕನಾಯಕನಹಳ್ಳಿ ಪುರಸಭೆ ಅಧ್ಯಕ್ಷೆ ಪುಷ್ಪ ಹನುಮತರಾಜು, ಉಪಾಧ್ಯಕ್ಷೆ ಎ.ಲಕ್ಷ್ಮಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಿ.ಎಚ್‌. ದಯಾನಂದ್‌, ಪುರಸಭೆಯ ಎಲ್ಲಾ ಸದಸ್ಯರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಎಂಜಿನಿಯರ್‌ ಎಸ್‌.ಬಿ. ಸಿದ್ದನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತುಮಕೂರಿನಲ್ಲಿ ಭಜರಂಗದಳ ಹಾಗೂ ವಿಎಚ್‌ಪಿ ಪ್ರತಿಭಟನೆ

700ಕ್ಕೂ ಅಧಿಕ ಮನೆ ನಿರ್ಮಾಣಕ್ಕೆ ಆದ್ಯತೆ: ಚಿಕ್ಕನಾಯಕನಹಳ್ಳಿ ಪಟ್ಟಣಕ್ಕೆ ಹೊಸದಾಗಿ ರಾಜ್ಯ ಸಾರಿಗೆ ನಿಗಮದಿಂದ ಶೀಘ್ರ ಡಿಪೋ ನಿರ್ಮಾಣ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು ಶುಶ್ರೂಕರಿಗೆ ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣವು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಗೆ ಮೇಲ್ದರ್ಜೆಗೇರಿದ್ದು, ಪಟ್ಟಣದ ಸಮಗ್ರ ಅಭಿವೃದ್ಧಿ ಮಾಡಬೇಕಾಗಿದೆ. ಒಳಚರಂಡಿ ವ್ಯವಸ್ಥೆ ಶೀಘ್ರವಾಗಿ ಆಗಬೇಕು. ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಿಂದ ಪಟ್ಟಣಕ್ಕೆ ಬೋರನಕಣಿವೆ ಜಲಾಶಯದಿಂದ ನೀರನ್ನು ಒದಗಿಸಲಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ 6 ಎಕರೆ ಜಮೀನನ್ನು ಗುರುತಿಸಲಾಗಿದ್ದು, ವಸತಿ ಇಲಾಖೆಯಿಂದ 700ಕ್ಕೂ ಅಧಿಕ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

Follow Us:
Download App:
  • android
  • ios