ಶಿವಮೊಗ್ಗದಲ್ಲಿ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತ ಸಮುದಾಯಗಳನ್ನು ಕಡೆಗಣಿಸುತ್ತಿದೆ ಎಂದು ಮುಸ್ಲಿಂ ಹಾಗೂ ಕ್ರೈಸ್ತ ಮುಖಂಡರು ಆರೋಪಿಸಿದ್ದಾರೆ. ಸ್ಥಳೀಯ ನಿಗಮ ಮಂಡಳಿಗಳಲ್ಲಿ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದು, ಅವರ ಬೇಡಿಕೆಯನ್ನು ಬೆಂಬಲಿಸಿರುವ ಮಾಜಿ ಸಂಸದ ಆಯನೂರು ಮಂಜುನಾಥ್, ಈ ವಿಷಯವನ್ನು ಪಕ್ಷದ ವರಿಷ್ಠರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ.
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯ ಸಿಗುತ್ತಿಲ್ಲ. ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಗುತ್ತಿದೆ ಎಂದು ಮುಸ್ಲಿಂ ಹಾಗೂ ಕ್ರೈಸ್ತ ಮುಂಖಂಡರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಅವರ ಕೋರಿಕೆಯ ಮೇರೆಗೆ ಅವರ ಮನವಿಯನ್ನು ಕಾಂಗ್ರೆಸ್ ನಾಯಕರಿಗೆ ತಿಳಿಸುತ್ತೇನೆ. ಪಕ್ಷಕ್ಕೆ ಈ ಸಮುದಾಯಗಳು ಎಷ್ಟು ಪ್ರಾಮುಖ್ಯತೆ ಇದೆ ಎಂಬುದನ್ನು ಕೂಡ ಮನದಟ್ಟು ಮಾಡುತ್ತೇನೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಪ್ರಾಧಿಕಾರ ಮತ್ತು ನಿಗಮ ಮಂಡಳಿಗಳಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡುವಂತೆ ಅಲ್ಪಸಂಖ್ಯಾತ ಸಮುದಾಯಗಳ ಮುಖಂಡರು ಒತ್ತಾಯಿಸುತ್ತಿದ್ದಾರೆ.
ಕಾಂಗ್ರೆಸ್ ಅಲ್ಪಸಂಖ್ಯಾತದವರಿಗೆ ನೀಡಿದ ಭರವಸೆ ಈಡೇರಿಲ್ಲ
ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಕೊಡುಗೆ ಅಪಾರ. ಶಿವಮೊಗ್ಗವೊಂದರಲ್ಲಿಯೇ ಎರಡು ಸಮುದಾಯದ ಜನಸಂಖ್ಯೆ ಒಂದು ಲಕ್ಷ ಇದೆ. ಭದ್ರಾವತಿಯಲ್ಲೂ ಇಷ್ಟೇ ಪ್ರಮಾಣದಲ್ಲಿ ಅಲ್ಪಸಂಖ್ಯಾತರಿದ್ದಾರೆ. ಪ್ರತಿ ಚುನಾವಣಾ ಸಂದರ್ಭದಲ್ಲೂ ಕಾಂಗ್ರೆಸ್ ಪಕ್ಷ ಸಮುದಾಯಗಳಿಗೆ ಭರವಸೆ ನೀಡುತ್ತಿದ್ದರೂ ಆ ಜನಾಂಗದವರನ್ನು ತಲುಪಿಲ್ಲ ಎಂದು ತಿಳಿಸಿದರು.
ಚುನಾವಣೆ ಸಂದರ್ಭದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯದ ಒಬ್ಬರಿಗೆ ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಭರವಸೆಯನ್ನು ಕಾಂಗ್ರೆಸ್ ನಾಯಕರು ನೀಡಿದ್ದರು. ಆದರೆ, ಸರ್ಕಾರ ಬಂದು ಮೂರೂವರೆ ವರ್ಷ ಕಳೆದಿದ್ದರೂ ಈ ಭರವಸೆ ಈಡೇರಿಲ್ಲ. ಈಗ ಹೊಸ ಮುಖ್ಯಮಂತ್ರಿಗಳು ಬಂದಿದ್ದಾರೆ. ಈ ಸಂದರ್ಭದಲ್ಲಾದರೂ ಕೊಟ್ಟ ಮಾತು ಈಡೇರಿಸಬೇಕು ಎಂಬುದು ಅಲ್ಪಸಂಖ್ಯಾತರ ಒತ್ತಾಯವಾಗಿದೆ.
ಶಿವಮೊಗ್ಗ-ಭದ್ರಾವತಿಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಗೆ ಬೆನ್ನೆಲುಬಾಗಿ ನಿಂತಿದ್ದು ಅವರ ಬೇಡಿಕೆ ನ್ಯಾಯ ಸಮ್ಮತವಾಗಿ ಇದಕ್ಕೆ ನನ್ನ ಬೆಂಬಲವೂ ಇದೆ ಎಂದರು.
ಮುಸ್ಲಿಂ-ಕ್ರಿಶ್ಚಿಯನ್ ಸಮುದಾಯ ಶೇ.100ರಷ್ಟು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ
ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಶೇ.100ರಷ್ಟು ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸಿಕೊಂಡು ಬಂದಿದ್ದಾರೆ. ಜಿಲ್ಲೆಯಲ್ಲಿ ಈ ಎರಡು ಸಮುದಾಯಗಳ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿದ್ದು, ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರ, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ಮುಸ್ಲಿಮರಿಗೆ ಮೀಸಲಾಗಿರುವ ವಕ್ಪ್ ಮಂಡಳಿಯಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದರು.
ಬಲ್ಕೀಶ್ ಬಾನು ಅವರನ್ನು ಎಂಎಲ್‌ಸಿ ಮಾಡಿರುವುದು ಇಡೀ ಮುಸ್ಲಿಂ ಸಮುದಾಯದ ಪ್ರಾತಿನಿಧ್ಯ ಎನ್ನುವಂತಿಲ್ಲ. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಎಲ್ಲಾ ಸಮುದಾಯಗಳಿಗೂ ಕೊಟ್ಟಿರುವ ಅವಕಾಶ ಅಷ್ಟೇ. ಅದನ್ನು ಮುಸ್ಲಿಂ ಪ್ರಾತಿನಿಧ್ಯ ಎನ್ನುವಂತಿಲ್ಲ. ಸ್ಥಳೀಯವಾಗಿ ಅಲ್ಪಸಂಖ್ಯಾತರಿಗೆ ಅವಕಾಶಗಳನ್ನು ನೀಡುವುದು ಮುಖ್ಯವಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಿಗೆ ಸ್ಥಳೀಯ ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಆಗಿರುವ ಅನ್ಯಾಯವನ್ನು ನಾನು ಖುದ್ದಾಗಿ ಸಿಎಂ ಡಿ.ಕೆ. ಶಿವಕುಮಾರ್. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರನ್ನು ಬಿಟ್ಟು ಚುನಾವಣೆ ನಡೆಸುವುದು ಸಾಧ್ಯವಿಲ್ಲ. ಪಕ್ಷ ಸಂಘಟನೆ ಕಷ್ಟವಾಗಲಿದೆ, ಜಿಲ್ಲೆಯಲ್ಲಿ ರಾಜಕೀಯದ ಪರಿಸ್ಥಿತಿಯನ್ನು ವಿವರಿಸಿ ಮನವರಿಕೆ ಮಾಡಿಕೊಡುತ್ತೇನೆ. ಅಲ್ಪಸಂಖ್ಯಾತರ ಪರ ನಿಲ್ಲುತ್ತೇನೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಮಾಜಿ ಸದಸ್ಯ ಮುಕ್ತಿಯಾರ್ ಆಹ್ಮದ್, ಮರಿಯಪ್ಪ ಕಿರಣ್ ಫರ್ನಾಂಡೀಸ್, ರಿಯಾಜ್ ಆಹಮದ್, ಎಲಿಜಬಿತ್ ರೋಡ್ರಿಸ್, ಫಾಸ್ಟರ್ ಹರೀಶ್, ಲಾರೆನ್ಸ್ ಡಿಸೋಜ, ಮಹಮ್ಮದ್ ಷರೀಪ್, ಸಂಧ್ಯಾರಾಣಿ, ಸೆಲ್ವ ಮಾರ್ಟೀಸ್ ಉಪಸ್ಥಿತರಿದ್ದರು.


