ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ಕಾಂಗ್ರೆಸ್‌ನಿಂದ ಹಳ್ಳಿಗಳಲ್ಲಿ ಫಿವರ್ ಕ್ಲಿನಿಕ್
* ಲಾಕ್‌ಡೌನ್ ಅವಧಿಯಲ್ಲಿ ಆಸ್ಪತ್ರೆಗೆ ಬಂದ ರೋಗಿಗಳಿಗೆ ಹಾಗೂ ಸಂಬಂಧಿಕರಿಗೆ ಊಟದ ಸಮಸ್ಯೆ
* ಕಾಂಗ್ರೆಸ್ ಪಕ್ಷದ ವತಿಯಿಂದ ಮಧ್ಯಾಹ್ನದ ಊಟದ ವ್ಯವಸ್ಥೆ
* ಲಸಿಕೆ ವಿತರಣೆಯಲ್ಲಿ ಸರ್ಕಾರ ವಿಳಂಬ ಧೋರಣೆ
ರಾಣಿಬೆನ್ನೂರು(ಜೂ.07): ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪಿಕೆಕೆ ಇನಿಷಿಯೇಟಿವ್ಸ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಪ್ರಕಾಶ ಕೋಳಿವಾಡ ತಿಳಿಸಿದ್ದಾರೆ.
ನಗರದಲ್ಲಿ ಜೂಮ್ ಆ್ಯಪ್ ಮೂಲಕ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇರುವ ಕಡೆ ಬಿಟ್ಟು ನಮ್ಮ ಪಕ್ಷದ ವತಿಯಿಂದ ಈಗಾಗಲೇ 40 ಹಳ್ಳಿಗಳಲ್ಲಿ ಫಿವರ್ ಕ್ಲಿನಿಕ್‌ಗಳನ್ನು ತೆರೆಯಲಾಗಿದೆ. ಮುಂದಿನ ದಿನಮಾನಗಳಲ್ಲಿ ಇನ್ನೂ 25 ಕಡೆ ತೆರೆಯಲಾಗುವುದು. ಈ ಕ್ಲಿನಿಕ್‌ಗಳಲ್ಲಿ ಕೆಮ್ಮು, ನೆಗಡಿ, ಜ್ವರ ಕಾಣಿಸಿಕೊಂಡ ರೋಗಿಗಳನ್ನು ಆನ್‌ಲೈನ್ ಮೂಲಕ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ನೀಡಲಾಗುವುದು. ಆಕ್ಸಿಜನ್ ಪ್ರಮಾಣ ಕಡಿಮೆಯಾದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ನಮ್ಮ ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗಿ ದಾಖಲಿಸಲಾಗುವುದು. ಇನ್ನು 6 ಕಡೆ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಅಳವಡಿಸಲಾಗಿದೆ ಎಂದರು.
ಹಾವೇರಿ ಜಿಲ್ಲೆಯ 419 ಗ್ರಾಮಗಳಿಗೆ ವ್ಯಾಪಿಸಿದ ಕೊರೋನಾ..!
ಲಸಿಕೆ ವಿತರಣೆಯಲ್ಲಿ ಸರ್ಕಾರ ವಿಳಂಬ ಧೋರಣೆ ಮಾಡುತ್ತಿದೆ. ಲಸಿಕೆ ಹಾಕಿಸಿಕೊಳ್ಳಲು ಆನ್‌ಲೈನ್ ನೋಂದಣಿ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ. ಆದರೆ, ಗ್ರಾಮೀಣ ಭಾಗದಲ್ಲಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಲು ಸಮಸ್ಯೆಯಾಗುತ್ತಿದ್ದು, ಹೀಗಾಗಿ ಮುಂದಿನ ದಿನಗಳಲ್ಲಿ ನಮ್ಮ ಪಕ್ಷದ ವತಿಯಿಂದ ತಾಲೂಕಿನಲ್ಲಿರುವ 65 ಸಾವಿರಕ್ಕೂ ಕುಟುಂಬಗಳಿಗೆ ಆನ್‌ಲೈನ್ ನೋಂದಣಿ ಮಾಡಿಸಲಾಗುವುದು ಎಂದರು.
ಲಾಕ್‌ಡೌನ್ ಅವಧಿಯಲ್ಲಿ ಆಸ್ಪತ್ರೆಗೆ ಬಂದ ರೋಗಿಗಳಿಗೆ ಹಾಗೂ ಸಂಬಂಧಿಕರಿಗೆ ಊಟದ ಸಮಸ್ಯೆಯಾಗುತ್ತಿದೆ. ಹೀಗಾಗಿ ನಮ್ಮ ಪಕ್ಷದ ವತಿಯಿಂದ ಈಗಾಗಲೆ ಕಳೆದ 9 ದಿನಗಳಿಂದ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಲಾಕ್‌ಡೌನ್ ಮುಗಿಯುವವರೆಗೂ ಈ ಕಾರ್ಯ ಮುಂದುವರಿಯುತ್ತದೆ ಎಂದರು.