ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನಿಗಾಗಿ ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ನಂತರ ಪರಾರಿಯಾಗಿರುವ ಆರೋಪಿಯ ಕಾರು ಹಾಸನ-ಮಂಗಳೂರು ಮಾರ್ಗದ ಬಳಿ ಪತ್ತೆಯಾಗಿದೆ.
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನಿಗಾಗಿ ಪೊಲೀಸರು ಶೋಧ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ, ರಾಜೀವ್ ಗೌಡ ಬಂಧನದಿಂದ ತಪ್ಪಿಸಿಕೊಳ್ಳಲು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ರಾಜೀವ್ ಗೌಡ ಹಾಸನ–ಮಂಗಳೂರು ಮಾರ್ಗದ ಸಮೀಪದ ರೈಲ್ವೆ ನಿಲ್ದಾಣದ ಬಳಿ ತಮ್ಮ ಕಾರನ್ನು ಬಿಟ್ಟು ತಪ್ಪಿಸಿಕೊಂಡಿರುವ ಸಾಧ್ಯತೆ ಇದೆ. ಈ ಸಂಬಂಧ ಹಾಸನ–ಮಂಗಳೂರು ಮಾರ್ಗದ ಸಮೀಪ ರಾಜೀವ್ ಗೌಡ ಬಳಸುತ್ತಿದ್ದ ಕಾರು ಪತ್ತೆಯಾಗಿದ್ದು, ಆರೋಪಿಯು ರೈಲ್ವೆ ಮಾರ್ಗದ ಮೂಲಕ ಪರಾರಿಯಾಗಿರುವ ಶಂಕೆಯ ಮೇಲೆ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಾಹಿತಿ ಸುವರ್ಣ ನ್ಯೂಸ್‌ಗೆ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ.
ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಬಂಧನ ವಿಳಂಬ ಕುರಿತು ಪ್ರತಿಕ್ರಿಯೆ ನೀಡಿದ, ರಾಜೀವ್ ಗೌಡ ಬಂಧನ ವಿಳಂಬವಾಗಿರುವ ಕುರಿತು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿ, “ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಮೊದಲ ದಿನವೇ ಕೂಡಲೇ ಬಂಧನಕ್ಕೆ ಸೂಚನೆ ನೀಡಿದ್ದೆ. ಆದರೆ ಅಷ್ಟರಲ್ಲಿ ಆತ ತಪ್ಪಿಸಿಕೊಂಡು ಹೋಗಿದ್ದಾನೆ. ಎಷ್ಟು ದಿನ ತಪ್ಪಿಸಿಕೊಂಡು ಹೋಗಲು ಸಾಧ್ಯ? ಖಂಡಿತವಾಗಿಯೂ ಅವನನ್ನು ಬಂಧಿಸುತ್ತೇವೆ” ಎಂದು ಹೇಳಿದರು. ಈ ಪ್ರಕರಣದಲ್ಲಿ ಯಾವುದೇ ಒತ್ತಡ, ರಾಜಿ ಅಥವಾ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ. ಕಾನೂನು ತನ್ನ ದಾರಿಯಲ್ಲಿ ಸಾಗುತ್ತದೆ ಎಂದು ಗೃಹ ಸಚಿವರು ಸ್ಪಷ್ಟವಾಗಿ ಹೇಳಿದರು.
ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನದ ಭೀತಿ ಹೆಚ್ಚಳ
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ರಾಜೀವ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಚಿಂತಾಮಣಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಈ ಆದೇಶದಿಂದಾಗಿ ರಾಜೀವ್ ಗೌಡರಿಗೆ ಬಂಧನದ ಭೀತಿ ಮತ್ತಷ್ಟು ಹೆಚ್ಚಾಗಿದೆ.
ಪ್ರಕರಣದ ಹಿನ್ನೆಲೆ
ಶಿಡ್ಲಘಟ್ಟ ನಗರದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಟಿಸಿರುವ ‘ಕಲ್ಟ್’ ಸಿನಿಮಾ ಪ್ರಚಾರಕ್ಕೆ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ್ದರು. ಇದರಿಂದ ಕೋಪಗೊಂಡ ರಾಜೀವ್ ಗೌಡ, ಪೌರಾಯುಕ್ತೆ ಜಿ. ಅಮೃತಾ ಗೌಡ ಅವರಿಗೆ ದೂರವಾಣಿ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಂತರ ರಾಜೀವ್ ಗೌಡ ಕಾಣೆಯಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ಅವರು ಚಿಂತಾಮಣಿಯ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದರ ನಡುವೆಯೇ, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ಕಾನೂನು ಸಂಕಷ್ಟ ಮತ್ತಷ್ಟು ಗಂಭೀರವಾಗಿದೆ.
ಶೋಧ ಕಾರ್ಯ ಮುಂದುವರಿಕೆ
ಪ್ರಸ್ತುತ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು ಹಾಗೂ ಪ್ರಮುಖ ಮಾರ್ಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ರಾಜೀವ್ ಗೌಡನ ಬಂಧನ ಯಾವುದೇ ಕ್ಷಣದಲ್ಲಾದರೂ ಸಾಧ್ಯ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಕಾನೂನು ಮತ್ತು ಆಡಳಿತ ವ್ಯವಸ್ಥೆಯ ಕಠಿಣತೆ ಬಗ್ಗೆ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.


