ಸ್ವಾತಂತ್ರ್ಯ ಹೋರಾಟಗಾರ, ದೇಶದ ಮೊದಲ ಪ್ರಧಾನಿ ಜವಾಹರ್‌ ಲಾಲ್‌ ನೆಹರುಗೆ ಅವಮಾನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ

ಮೈಸೂರು (ಆ.14): ಸ್ವಾತಂತ್ರ್ಯ ಹೋರಾಟಗಾರ, ದೇಶದ ಮೊದಲ ಪ್ರಧಾನಿ ಜವಾಹರ್‌ ಲಾಲ್‌ ನೆಹರು ಅವರನ್ನು ಅವಮಾನ ಮಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು ಮಾಡುವುದಾಗಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್‌ಕುಮಾರ್‌ ತಿಳಿಸಿದರು.

ಮೈಸೂರಿನ ಕಾಂಗ್ರೆಸ್‌ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಟಿ. ರವಿ ಅವರಿಗೆ ನೆಹರು ಕಾಂಗ್ರೆಸ್‌ ಪ್ರಧಾನಿ ಎಂಬುದಷ್ಟೇ ಗೊತ್ತು. ನೆಹರು ಈ ದೇಶದ ಮಹಾನ್‌ ಸ್ವಾತಂತ್ರ್ಯ ಹೋರಾಟಗಾರ. 1916ರಿಂದಲೇ ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿ 4 ಬಾರಿ ಬಂಧನಕ್ಕೆ ಒಳಗಾಗಿದ್ದರು ಎಂದರು.

'ತಲೆಕೆಟ್ಟವರಿಗೆ ಇನ್ನೇನು ಹೇಳಲು ಸಾಧ್ಯ' ರವಿಗೆ ಉಗ್ರಪ್ಪ ಏಟು!

ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದರೆ ದೂರು ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಈ ಬಗ್ಗೆ ವಕೀಲರೊಂದಿಗೆ ಚರ್ಚಿಸಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಒಪ್ಪಿಗೆ ಪಡೆದು ದೇವರಾಜ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದೇವೆ ಎಂದು ಅವರು ಹೇಳಿದರು.

ಅಮೃತೋತ್ಸವದ ನಡಿಗೆ: ಕಾಂಗ್ರೆಸ್‌ ನಗರಾಧ್ಯಕ್ಷ ಆರ್‌. ಮೂರ್ತಿ ಮಾತನಾಡಿ, ನಗರ ಮತ್ತು ಜಿಲ್ಲಾ ಕಾಂಗ್ರೆಸ್‌ ಸಮಿತಿ ಸಹಯೋಗದಲ್ಲಿ ಅಮೃತ ಮಹೋತ್ಸವ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಎರಡು ದಿನಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ.14ರ ಸಂಜೆ 4 ಗಂಟೆಗೆ ಸ್ವಾತಂತ್ರ್ಯ ಉದ್ಯಾನವನದಲ್ಲಿ 10 ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸಲಾಗುವುದು. ಆ.15ರ ಬೆಳಗ್ಗೆ 8ಕ್ಕೆ ರಾಮಸ್ವಾಮಿ ವೃತ್ತದಿಂದ ಕಾಂಗ್ರೆಸ್‌ ಕಚೇರಿವರೆಗೆ ಅಮೃತೋತ್ಸವನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಎರಡೂ ಕಾರ್ಯಕ್ರಮಗಳಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಭಾಗವಹಿಸುವರು ಎಂದು ತಿಳಿಸಿದರು

ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ, ಮುಖಂಡರಾದ ಗಿರೀಶ್‌, ಮಹೇಶ್‌, ರಾಘವೇಂದ್ರ, ಎಂ. ಶಿವಣ್ಣ, ರೋಹಿತ್‌ ಮೊದಲಾದವರು ಇದ್ದರು.