ಬೆಂಗಳೂರು(ಜ.29): ತೀವ್ರ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್‌ ಸೋಂಕು ಶಂಕೆ ಹಿನ್ನೆಲೆಯಲ್ಲಿ ನಗರದಲ್ಲಿ ಮತ್ತೆ ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದು, ರಕ್ತದ ಮಾದರಿಯನ್ನು ಪುಣೆಯ ನ್ಯಾಷನಲ್‌ ಇನ್ಸಿಟಿಟ್ಯೂಟ್‌ ಆಫ್‌ ವೈರಾಲಜಿ (ಎನ್‌ಐವಿ) ಸಂಸ್ಥೆಗೆ ಕಳುಹಿಸಿದೆ. 

"

ಈ ಮಧ್ಯೆ, ರಾಜ್ಯದಲ್ಲಿ ಶಂಕಿತ ರೋಗಿಗಳ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಗುರುವಾರ ಆರೋಗ್ಯ ಇಲಾಖೆ ಪ್ರಮುಖ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಕೊರೋನಾ ವೈರಸ್‌ ಕುರಿತು ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಜತೆಗೆ ರೋಗ ಲಕ್ಷಣ ಹೊಂದಿರುವ ಶಂಕಿತರ ಕುರಿತು ಕೂಡಲೇ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕರುನಾಡಿನಲ್ಲಿ ಕೊರೋನಾ ಚಿಂತೆ; ಬೆಂಗ್ಳೂರಿನಲ್ಲಿ ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ

ಭಾನುವಾರ ನಗರದ ಪ್ರಮುಖ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಇಬ್ಬರ ರಕ್ತದ ಮಾದರಿಯನ್ನು ಈಗಾಗಲೇ ಎನ್‌ಐವಿಗೆ ಕಳುಹಿಸಲಾಗಿದ್ದು, ಬುಧವಾರ ವರದಿ ಬರುವ ಸಾಧ್ಯತೆಗಳಿವೆ. ಈವರೆಗೂ ಕೊರೋನಾ ವೈರಸ್‌ ರೋಗ ಲಕ್ಷಣಗಳಿಂದಾಗಿ ಆರು ಮಂದಿ ಚಿಕಿತ್ಸೆಗೆ ದಾಖಲಾಗಿದ್ದು, ಈ ಪೈಕಿ ಒಬ್ಬರಿಗೆ ಸೋಂಕು ಇಲ್ಲ ಎಂದು ಪ್ರಯೋಗಾಲಯದ ವರದಿ ಬಂದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಿಂದ ತೆರಳಿದ್ದಾರೆ. ಉಳಿದಂತೆ ಐವರು ಶಂಕಿತ ರೋಗಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ತಪಾಸಣೆ:

"

ಚೀನಾದಲ್ಲಿ ಕೊರೋನಾ ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ವತಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶಾದ್ಯಂತ 21 ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಥರ್ಮಲ್‌ ಸ್ಕ್ಯಾನರ್‌ಗೆ ಒಳಪಡಿಸಲಾಗುತ್ತಿದೆ. ಕಳೆದ ಒಂದು ವಾರದಲ್ಲಿ 3,275 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಸಿಎಂಡಿ) ಸಹ ನಿರ್ದೇಶಕ ಡಾ. ಬಿ.ಜಿ. ಪ್ರಕಾಶ್‌ ಕುಮಾರ್‌ ತಿಳಿಸಿದ್ದಾರೆ.