ಬೆಂಗಳೂರು(ಡಿ. 02): ನಗರದ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕು ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ನ್ಯಾಯಾಂಗ ವಶದಲ್ಲಿರುವ ಮಾಜಿ ಮೇಯರ್‌ ಸಂಪತ್‌ ರಾಜ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 67ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ. 

ಜಾಮೀನು ಕೋರಿ ಸಂಪತ್‌ ರಾಜ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿದೆ. ಮಾಜಿ ಮೇಯರ್‌ ಆಗಿರುವ ಅವರು ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಈ ಅವಧಿಯಲ್ಲಿ ಆರೋಪಿತನಿಗೆ ಜಾಮೀನು ನೀಡುವುದು ಸೂಕ್ತವಲ್ಲ. ತನಿಖೆಗೆ ಅಡ್ಡಿಯಾಗಲಿದೆ ಎಂದು ಸಿಸಿಬಿ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್‌ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ.

ಡಿ.ಜೆ.ಹಳ್ಳಿ ಗಲಭೆ: ಸಂಪತ್‌ ಉಚ್ಛಾಟಿಸಲು ಡಿಕೆಶಿಗೆ ಅಖಂಡ ಮನವಿ

ಈ ಹಿಂದೆ ಸಂಪತ್‌ ರಾಜ್‌ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಬಳಿಕ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯೂ ಪುರಸ್ಕೃತಗೊಂಡಿರಲಿಲ್ಲ.