ಬೆಂಗಳೂರು(ಜೂ. 24)  ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗಿರುವ ಮೂರ್ನಾಲ್ಕು ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್ ಗಳಿಲ್ಲ, ವೆಂಟಿಲೇಟರ್ ಗಳ ಕೊರತೆ ಇದೆ. ಇದಕ್ಕೆ ಸ್ವಯಂ ಪ್ರೇರಿತ ಲಾಕ್ ಡೌನ್ ಒಂದೇ ಪರಿಹಾರ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ

ರಾಜ್ಯ ಸರ್ಕಾರ ಕೂಡ ಇದನ್ನೇ ಪರೋಕ್ಷವಾಗಿ ಹೇಳುತ್ತಿದೆ. ಕೊರೋನಾ ವೈರಸ್ ಸಮೂಹ ಪ್ರಸರಣದ ಈಗಿನ  ಸ್ಥಿತಿಯಲ್ಲಿ ಮನೆಯಲ್ಲಿರುವುದೇ 'ಮನೆಯೇ ಮದ್ದು'. ಈ ಸೋಂಕಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ನಿಗದಿಪಡಿಸಿರುವುದು ದಿನಕ್ಕೆ 10-15 ಸಾವಿರ ರೂ. ಈ ದರ ಬಡವರಿಗಿರಲಿ, ಮೇಲ್ ಮಧ್ಯಮ ವರ್ಗದವರಿಗೂ  ಭರಿಸಲು ಸಾಧ್ಯವಾಗದು ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೋನಾ ಬಂದಿದೆ, ಕರ್ಕೊಂಡು ಹೋಗಿ, ಬಿಬಿಎಂಪಿಗೆ ಕರೆ

ಒಂದು ಕುಟುಂಬದ ನಾಲ್ಕು ಜನರಿಗೆ ಕೊರೊನಾ ಬಂದರೆ ಖಾಸಗಿ ಆಸ್ಪತ್ರೆಯಲ್ಲಿ 15 ದಿನಗಳ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿರುವ ದರದ ಪ್ರಕಾರ 5-6 ಲಕ್ಷ ರೂ ಬೇಕು. ಬಡವರು ಮಧ್ಯಮವರ್ಗದವರು ಎಲ್ಲಿಂದ ತರುತ್ತಾರೆ?  ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಸರ್ಕಾರ ಕೈಚೆಲ್ಲಿ ಕುಳಿತಿರುವಾಗ ನಮ್ಮ ಜೀವ ನಾವೇ ಉಳಿಸಿಕೊಳ್ಳಬೇಕು. ದಯಮಾಡಿ ಎಚ್ಚರದಿಂದಿರಿ. ಇದು ನನ್ನ ಕಳಕಳಿಯ ಮನವಿ ಎಂದು ಹೇಳಿರುವ ಕುಮಾರಸ್ವಾಮಿ ಕೊರೋನಾ ವಿಚಾರದಲ್ಲಿ ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ನಿಲುವುಗಳನ್ನು ಖಂಡಿಸಿದ್ದಾರೆ.