ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ಜುಲೈ 23 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಈ ಆದೇಶವು ಅಂಗನವಾಡಿಯಿಂದ ಪಿಯುಸಿ ವರೆಗಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗಲಿದೆ.
ಮಂಗಳೂರು (ಜು.22): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) 'ಯೆಲ್ಲೋ ಅಲರ್ಟ್' (Yellow Alert) ಮುನ್ಸೂಚನೆ ನೀಡಿರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ಜುಲೈ 23ರ ಗುರುವಾರದಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ದರ್ಶನ್ ಹೆಚ್.ವಿ. ಅವರು ಈ ಕುರಿತು ಅಧಿಕೃತ ತುರ್ತು ಆದೇಶ ಹೊರಡಿಸಿದ್ದಾರೆ.
12ನೇ ತರಗತಿಯವರೆಗೆ ರಜೆ ಅನ್ವಯ
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ (ಪಿಯುಸಿ) ಮತ್ತು ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಜುಲೈ 23 ರಂದು ರಜೆ ಸಾರಲಾಗಿದೆ. ಯಾವುದೇ ಕಾರಣಕ್ಕೂ ತರಗತಿಗಳನ್ನು ನಡೆಸದಂತೆ ಸೂಚಿಸಲಾಗಿದ್ದು, ಈ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51(ಬಿ) ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.
ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ನೀಡಲಾದ ಪ್ರಮುಖ ಮಾರ್ಗದರ್ಶನಗಳು
ಮಕ್ಕಳ ಸುರಕ್ಷತೆ: ನೀರಿರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಕಡ್ಡಾಯವಾಗಿ ಜಾಗ್ರತೆ ವಹಿಸಬೇಕು.
ಮೀನುಗಾರರು ಹಾಗೂ ಪ್ರವಾಸಿಗರಿಗೆ ನಿರ್ಬಂಧ: ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಕ್ಕೆ ತೆರಳಬಾರದೆಂದು ಸೂಚಿಸಲಾಗಿದೆ.
ಅಧಿಕಾರಿಗಳಿಗೆ ಅಲರ್ಟ್: ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಿ ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.
ಕಾಳಜಿ ಕೇಂದ್ರಗಳು: ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಲು ಆದೇಶಿಸಲಾಗಿದೆ.
ತುರ್ತು ನೆರವಿಗೆ ಸಂಪರ್ಕಿಸಿ (Toll-Free Numbers)
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0824-2442590 ಅನ್ನು ಸಂಪರ್ಕಿಸಬಹುದಾಗಿದೆ.


