ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲಾಧಿಕಾರಿಗಳು ಸತತ 3ನೇ ದಿನವಾಗಿ ನಾಳೆಯೂ ಆ.30 ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ (ಆ.29): ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಡಾ. ದರ್ಶನ್ ಎಚ್.ವಿ. ಅವರು ನಾಳೆ, ಆಗಸ್ಟ್ 30 ರಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆ.28ರಿಂದಲೂ ರಜೆ ಘೋಷಣೆ ಮಾಡುತ್ತಾ ಬರಲಾಗುತ್ತಿದೆ. ಕಳೆದ ಎರಡು ದಿನಗಳ ಕಾಲ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿದರೆ, ನಾಳೆ (ಆ.30ರಂದು) ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಆದೇಶವು ಅಂಗನವಾಡಿ, ಪ್ರಾಥಮಿಕ, ಮತ್ತು ಪ್ರೌಢ ಶಾಲೆಗಳು ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೂ ಅನ್ವಯಿಸಲಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಮಳೆ ತೀವ್ರಗೊಂಡಿದ್ದು, ಕೆಲವು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ರಜಾ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.