ಧಾರವಾಡ ಜಿಲ್ಲೆಯ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಜಿಲ್ಲಾಧಿಕಾರಿ ಸೂಚನೆ
ಧಾರವಾಡ ಜಿಲ್ಲೆಯಲ್ಲಿ 1261 ಕೆರೆಗಳು ಇದ್ದು ಇವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸೂಕ್ತವಾಗಿರುವ ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ.
ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್
ಧಾರವಾಡ (ಅ.3): ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್, ನೀರಾವರಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆಯ ಅಧೀನದಲ್ಲಿ 1261 ಕೆರೆಗಳು ಇದ್ದು ಇವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸೂಕ್ತವಾಗಿರುವ ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಇಂದು ಕಚೇರಿ ಸಭಾಂಗಣದಲ್ಲಿ ಕೆರೆಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ಕುರಿತು ತಹಶೀಲ್ದಾರ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ಮಾತನಾಡಿದರು ಜಿಲ್ಲೆಯಲ್ಲಿರುವ 1261 ಕೆರೆಗಳ ಪೈಕಿ 1225 ಕೆರೆಗಳ ಸಮೀಕ್ಷೆಯನ್ನು ಭೂದಾಖಲೆಗಳ ಇಲಾಖೆಯಿಂದ ಮಾಡಲಾಗಿದ್ದು ಕೆರೆಗಳ ಒಟ್ಟು ಕ್ಷೇತ್ರ, ಒತ್ತುವರಿ ಹಾಗೂ ಇತರ ಬಳಕೆ ಕುರಿತು ಮಾಹಿತಿ ಸಿದ್ಧಗೊಳಿಸಲಾಗಿದೆ ಆಯಾ ತಹಶೀಲ್ದಾರರು ಹಾಗೂ ಜಿಲ್ಲಾ ಪಂಚಾಯತ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಜಂಟಿಯಾಗಿ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಹೇಳಿದರು. ತಹಶೀಲ್ದಾರ ಹಾಗೂ ಜಿಲ್ಲಾ ಪಂಚಾಯತಿಯ ಸಂಬಂಧಪಟ್ಟ ಅಧಿಕಾರಿಗಳು ಕೆರೆಗಳಿಗೆ ಖುದ್ದು ಭೇಟಿ ನೀಡಿ ವರದಿ ಸಲ್ಲಿಸಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಕೆರೆಗಳ ಸಂರಕ್ಷಣೆ ಮತ್ತು ಒತ್ತುವರಿ ತೆರವಿಗೆ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು ಕೆರೆಗಳ ಒತ್ತುವರಿ ತೆರವಿಗೆ ಈಗಾಗಲೇ ಉಚ್ಛ ನ್ಯಾಯಾಲಯ ನಿರ್ದೇಶನ ನೀಡಿದ್ದು, ಅದರಂತೆ ಕ್ರಮ ಕೈಗೊಳ್ಳಬೇಕೆಂದು ಅವರು ಅಧಿಕಾರಿಗಳಿ ಸೂಚಿಸಿದರು ಅನೇಕ ಕೆರೆಗಳಿಗೆ ಚರಂಡಿ ಹಾಗೂ ಇತರ ಮೂಲಗಳಿಂದ ಕಲುಷಿತ ನೀರು, ವಸ್ತಗಳು ಸೇರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗಳು ಕಲುಷಿತ ನೀರು ಕೆರೆಗಳಿಗೆ ಸೇರದಂತೆ ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕೆರೆಗಳ ಸಂರಕ್ಷಣೆ ಜೊತೆಗೆ ಸೌಂದರ್ಯಿಕರಣಕ್ಕೂ ಆದ್ಯತೆ ನೀಡಬೇಕು. ನರೇಗಾ ಯೋಜನೆಯಡಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ಕೆರೆಗಳ ಅಭಿವೃದ್ಧಿಗೆ ಕ್ರಮ ವಹಿಸಬೇಕು. ಕೆರೆಗಳ ಸುತ್ತ ಅರಣ್ಯ ಇಲಾಖೆಯ ಸಹಕಾರದಿಂದ ಸಸಿಗಳನ್ನು ನೆಟ್ಟು ಉದ್ಯಾನವನಗಳನ್ನು ನಿರ್ಮಿಸಲು ಆದ್ಯತೆ ನೀಡಬೇಕೆಂದು ಅವರು ತಿಳಿಸಿದರು.
Kolara Rains; ಕೋಡಿ ಬಿದ್ದ ತಲ್ಲೂರು ಕೆರೆ, ನಟ ಯಶ್ ಗೆ ಧನ್ಯವಾದ ಅರ್ಪಿಸಿದ ಜನತೆ
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತ ಸಿ.ಎಂ ಅವರು ಮಾತನಾಡಿ, ಕೆರೆಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕೆರೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಜೀವವೈವಿದ್ಯತೆಗಳನ್ನು ಕಾಪಾಡಲು ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಬೇಕು. ಜಿಲ್ಲೆಯ ಅನೇಕ ಕೆರೆಗಳು ಪೂರ್ಣ ಪ್ರಮಾಣದಲ್ಲಿ ತುಂಬಿದ್ದು, ಅವುಗಳ ರಕ್ಷಣೆಗೂ ಕ್ರಮವಹಿಸಬೇಕೆಂದು ಅವರು ಹೇಳಿದರು.
ಐತಿಹಾಸಿಕ ಡಣಾಯಕನ ಕೆರೆಯಲ್ಲಿ ಬೊಂಗಾ: ಆತಂಕದಲ್ಲಿ ರೈತರು
ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೌರಭಕುಮಾರ, ಡಿವೈಎಸ್‍ಪಿ ಮಲ್ಲಿಕಾರ್ಜುನ ಬಿ.ಸಂಕದ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಮಹಾನಗರ ಪಾಲಿಕೆ ಅಧೀಕ್ಷಕ ಅಭಿಯಂತರ ಎಸ್.ತಿಮ್ಮಪ್ಪ, ಭೂದಾಖಲೆಗಳ ಇಲಾಖೆಯ ಉಪ ನಿರ್ದೇಶಕ ವಿಜಯಕುಮಾರ ಎ.ಪಿ, ತಹಶೀಲ್ದಾರರಾದ ಸಂತೋಷ ಹಿರೇಮಠ, ಅನಿಲಕುಮಾರ ಬಡಿಗೇರ, ಅಮರೇಶ ಪಮ್ಮಾರ, ಯಲ್ಲಪ್ಪ ಗೋನೆಣ್ಣವರ, ಅಶೋಕ ಶಿಗ್ಗಾಂವಿ, ಉಪ ತಹಶೀಲ್ದಾರ ಶಿವಾನಂದ ಹೆಬ್ಬಳ್ಳಿ, ಪರಿಸರ ಅಧಿಕಾರಿ ಶೋಭಾ ಪೋಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.