ಕೊಪ್ಪಳದ ಮುನಿರಾಬಾದ್ ಬಳಿ ತುಂಗಭದ್ರಾ ಸೇತುವೆಯಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಸದಸ್ಯರು ಈ ದುರಂತದಲ್ಲಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಕೊಪ್ಪಳ/ವಿಜಯನಗರ: ಜಿಲ್ಲೆಯ ಮುನಿರಾಬಾದ್ ಸಮೀಪ ತುಂಗಭದ್ರಾ ಡ್ಯಾಂ ಬಳಿ ಸಂಭವಿಸಿದ ಭೀಕರ ಟ್ರ್ಯಾಕ್ಟರ್ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಮಾಯಾ (16) ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿ ಕೂಡ್ಲಿಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ದುರ್ಘಟನೆಯಲ್ಲಿ ಈಗಾಗಲೇ ಆರು ಮಂದಿ ಮೃತಪಟ್ಟಿದ್ದು, ಮಾಯಾ ಸಾವಿನೊಂದಿಗೆ ಒಟ್ಟು ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾಯಾಳಿಗೆ ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ಆಕೆಯ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಗಾಯಾಳುಗಳಿಗೆ ಮುಂದುವರೆದ ಚಿಕಿತ್ಸೆ

ಅಪಘಾತದಲ್ಲಿ ಗಾಯಗೊಂಡ ಇತರರಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಮೊದಲು ದಾಖಲಾದ 9 ಮಂದಿಯಲ್ಲಿ ಒಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇದೀಗ 8 ಮಂದಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಇನ್ನೂ ಗಂಭೀರವಾಗಿರುವುದರಿಂದ ವೈದ್ಯರು ವಿಶೇಷ ಗಮನ ಹರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

ಇನ್ನು ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, "ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ಭಕ್ತಾದಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಒಂದು ತುಂಗಭದ್ರಾ ಸೇತುವೆಯ ಮೇಲಿಂದ ಕೆಳಗೆಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಆರು ಮಂದಿ ದುರಂತ ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ದುರ್ಘಟನೆಯ ಬಗ್ಗೆ ಸಂಸದರಾದ ತುಕಾರಾಂ ಅವರೊಂದಿಗೆ ಮಾತನಾಡಿ, ಮಾಹಿತಿ ಪಡೆದುಕೊಂಡಿದ್ದೇನೆ. ಮೃತರೆಲ್ಲರೂ ಬಡ ಕುಟುಂಬಕ್ಕೆ ಸೇರಿದವರು, ಈ ಸಾವುಗಳು ಅವರ ಕುಟುಂಬದವರನ್ನು ಮತ್ತಷ್ಟು ಕಷ್ಟಕ್ಕೆ ನೂಕುವ ಹಿನ್ನೆಲೆಯಲ್ಲಿ, ಮಾನವೀಯ ನೆಲೆಯಲ್ಲಿ ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ." ಎಂದಿದ್ದಾರೆ

ಘಟನೆ ಹಿನ್ನೆಲೆ

ಟ್ರ್ಯಾಕ್ಟರ್‌ನಲ್ಲಿ ಒಟ್ಟು 19 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಸೇತುವೆಯಿಂದ ಕೆಳಗೆ ಬಿದ್ದು ದುರಂತ ಸಂಭವಿಸಿತ್ತು. ಒಂದು ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಒಟ್ಟು 7 ಮಂದಿ ಮೃತಪಟ್ಟಿದ್ದು ಎಲ್ಲರೂ ಒಂದೇ ಕುಟುಂಬದ ಸದಸ್ಯರು. ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾಂತೇಶ್, ಮಾಯಾ (16) ಹಾಗೂ ಗೌರಮ್ಮ ಮೃತರೆಲ್ಲರೂ ಸಂಡೂರು ತಾಲೂಕಿನ ಯಶವಂತನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮ ಮತ್ತು ಭೈರದೇರಗುಡ್ಡ ಗ್ರಾಮದ ನಿವಾಸಿಗಳಾಗಿದ್ದಾರೆ.

ಹುಲಿಗೆಮ್ಮ ದೇವಸ್ಥಾನಕ್ಕೆಂದು ಕುಟುಂಬದವರೆಲ್ಲ ಬ್ಯಾಟಿ ( ದೇವರು) ಮಾಡಲು ತೆರಳುತ್ತಿದ್ದ ವೇಳೆ ಈ ದುರಂತ ನಡೆದಿದೆ.ಕೃಷಿ ಚಟುವಟಿಕೆಗಾಗಿ ಬಳಕೆಯಾಗಬೇಕಾದ ವಾಹನದಲ್ಲಿ ಮನುಷ್ಯರನ್ನು ಹೊತ್ತೊಯ್ದು ಈಗ ಈ ದುರಂತ ನಡೆದಿದೆ.ಅಪಘಾತದಲ್ಲಿ ಗಾಯಗೊಂಡವರನ್ನು ಹೊಸಪೇಟೆ ಹಾಗೂ ಕೊಪ್ಪಳ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Scroll to load tweet…