ಧರ್ಮಸ್ಥಳದಲ್ಲಿ ನಡೆಯುತ್ತಿರುವ ಶವಗಳ ಹೂಳುವಿಕೆ ಆರೋಪದ ತನಿಖೆಯಲ್ಲಿ SIT ಹೊಸ ತಿರುವು ಪಡೆದುಕೊಂಡಿದೆ. ಬಿಜೆಪಿ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವ ಆರೋಪಕ್ಕೆ ಸಂಬಂಧಿಸಿದದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ ನೆಟ್ಟಿಗರಿಗೆ ಎಸ್‌ಐಟಿ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದೆ. ಕಳೆದ ಒಂದೂವರೆ ತಿಂಗಳಿನಿಂದ ಸಾಮಾಜಿಕ ಜಾಲತಾಣದ ಮೇಲೆ ಎಸ್‌ಐಟಿ ಹದ್ದಿನ ಕಣ್ಣಿರಿಸಿತ್ತು. ಇದೀಗ ಸಾಮಾಜಿಕ ಜಾಲತಾಣಿಗರ ಪಟ್ಟಯನ್ನು ಸಿದ್ಧಪಡಿಸಿಕೊಂಡಿದ್ದು, ಎಲ್ಲರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಲು ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಲವರು ಸಾಮಾಜಿಕ ಜಾಲತಾಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬೆನ್ನಲ್ಲೇ ಎಸ್‌ಐಟಿ ನೋಟಿಸ್ ಕಳುಹಿಸಿದೆ. ಭಾನುವಾರವಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ನಿಯೋಗ ಧರ್ಮಸ್ಥಳಕ್ಕೆ ಭೇಟಿ ನೀಡಿತ್ತು.

ಎಸ್‌ಐಟಿ ತನಿಖೆಯ ನೆಪದಲ್ಲಿ ನಡೆಯುತ್ತಿರುವ ಅಪಪ್ರಚಾರ

ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಶಾಸಕರು, ನಾಯಕರು, ಕಾರ್ಯಕರ್ತರು ಮಂಜುನಾಥೇಶ್ವರನಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿ, ನಂತರ ಧರ್ಮಸ್ಥಳ ಧರ್ಮಾದಿಕಾರಿ ಡಾ। ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ವಿಜಯೇಂದ್ರ ‘ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದ ಬಗ್ಗೆ ಕಳೆದ ಕೆಲವು ದಿನಗಳಿಂದ ಎಸ್‌ಐಟಿ ತನಿಖೆಯ ನೆಪದಲ್ಲಿ ನಡೆಯುತ್ತಿರುವ ಅಪಪ್ರಚಾರಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು. ವೃಥಾ ದೂರು ನೀಡಿರುವ ಮಾಸ್ಕ್ ಮ್ಯಾನ್‌ಗೆ ಶಿಕ್ಷೆ ವಿಧಿಸಬೇಕು. ಹಾಗೂ ಇತನ ಬೆನ್ನ ಹಿಂದಿರುವ ವ್ಯಕ್ತಿಗಳನ್ನು ಸರ್ಕಾರ ಪತ್ತೆಹಚ್ಚಬೇಕು’ ಎಂದು ಆಗ್ರಹಿಸಿದರು.

ಮುಸುಕುಧಾರಿಯ ವಿಚಾರಣೆ

ನೂರಾರು ಶವ ಹೂತಿದ್ದೇನೆ ಎಂದು ಹೇಳಿಕೊಂಡಿರುವ ಮುಸುಕುಧಾರಿಯನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಮುಸುಕುಧಾರಿ ತನ್ನ ವಕೀಲರೊಂದಿಗೆ ಖಾಸಗಿ ವಾಹನದಲ್ಲಿ ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಆಗಮಿಸಿದ್ದಾನೆ.

ಎಸ್ಐಟಿ ಅಗೆದೆ ಗುಂಡಿಗಳ ಪರಿಶೀಲನೆ ನಡೆಸಿ ಮಾಹಿತಿ ಪಡೆದ ಶಾಸಕ ಚನ್ನಬಸಪ್ಪ

ವಿಶೇಷ ತನಿಖಾ ದಳ ನಡೆಸಿರುವ ಭೂಮಿಯ ಸ್ಥಳಗಳನ್ನು ಶಿವಮೊಗ್ಗ ಕ್ಷೇತ್ರದ ಬಿಜೆಪಿ ಶಾಸಕ ಎಸ್ಎನ್ ಚೆನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಕ್ಷೇತ್ರದ ವಿರುದ್ಧ ಕುತಂತ್ರಿಗಳು ಹಬ್ಬಿಸುತ್ತಿರುವ ಅಪಪ್ರಚಾರ ಮತ್ತು ಷಡ್ಯಂತ್ರಗಳ ಬಗ್ಗೆ ಕಿಡಿ ಕಾರಿರುವ, ಶಾಸಕ ಎಸ್ ಎನ್ ಚನ್ನಬಸಪ್ಪ ಎಸ್ಐಟಿ ನಡೆಸುತ್ತಿರುವ ತನಿಖಾ ಪ್ರಕ್ರಿಯೆಯ ಭಾಗವಾಗಿರುವ ಸ್ಪಾಟ್ ನಂ. 13(A), 12, 11, 6 ಹಾಗೂ 3 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿ ಸ್ಥಳದಲ್ಲಿಯೂ ನಡೆಯುತ್ತಿರುವ ತನಿಖಾ ಕ್ರಮಗಳ ಕುರಿತು ಸ್ಥಳೀಯರಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ರವರು ಶಾಸಕರ ಜೊತೆಗೆ ಉಪಸ್ಥಿತರಿದ್ದರು.

400 ಕಾರುಗಳಲ್ಲಿ ಧರ್ಮಸ್ಥಳಕ್ಕೆ ಯಾತ್ರೆ

ಶ್ರೀ ಕ್ಷೇತ್ರದ ತೇಜೋವಧೆ ನಡೆಯುತ್ತಿದೆ ಎಂದು ಆರೋಪಿಸಿ ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಶನಿವಾರ 400 ಕಾರುಗಳಲ್ಲಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದ್ದರು. ಭಾನುವಾರ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಬಂದ ಬಿಜೆಪಿ ನಾಯಕರು ಹೋರಾಟಕ್ಕೆ ಕಿಚ್ಚು ಹಚ್ಚಿದರು. ಕ್ಷೇತ್ರದ ಮುಂಭಾಗ ಭಿತ್ತಿಪತ್ರ ಹಿಡಿದ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಯ ಮುಖಂಡರು ‘ನಮ್ಮ ಧರ್ಮ, ನಮ್ಮ ಹಕ್ಕು’, ‘ಶಿಕ್ಷಿಸಿ ಶಿಕ್ಷಿಸಿ ಹಿಂದೂ ವಿರೋಧಗಳನ್ನು ಶಿಕ್ಷಿಸಿ’ ಎನ್ನುವ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು.