ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಆಗಬೇಕೆನ್ನುವ ಬೇಡಿಕೆ ನ್ಯಾಯಸಮ್ಮತವಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರವೇ ಅಂತಿಮ ಅಧಿಸೂಚನೆ ಹೊರಡಿಸಲಿದೆ ಎಂದು ಸಚಿವ ಯತೀಂದ್ರ ಭರವಸೆ ನೀಡಿದರು.

ಹುಬ್ಬಳ್ಳಿ (ಜೂ.08): ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಆಗಬೇಕೆನ್ನುವ ಬೇಡಿಕೆ ನ್ಯಾಯಸಮ್ಮತವಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರವೇ ಅಂತಿಮ ಅಧಿಸೂಚನೆ ಹೊರಡಿಸಲಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದರು. ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಹೋರಾಟ ಸಮಿತಿ ಸದಸ್ಯರ ಜತೆ ಚರ್ಚಿಸಿದ ಸಚಿವರು, ಬೇಡಿಕೆ ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದ್ದು, ಹೋರಾಟಗಾರರು ಸತ್ಯಾಗ್ರಹ ಕೈಬಿಡಬೇಕು ಎಂದು ವಿನಂತಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೋರಾಟಗಾರ ವಕೀಲ ಬಿ.ಡಿ. ಹೀರೆಮಠ ಮಾತನಾಡಿ, ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಜನಾಂದೋಲನವಾಗಿ ಮಾರ್ಪಟ್ಟಿದೆ. ಪಕ್ಷಾತೀತ ಹೋರಾಟದಲ್ಲಿ ಎಲ್ಲ ಪಕ್ಷದವರು, ಸಂಘ–ಸಂಸ್ಥೆಗಳು, ಮಹಿಳಾ ಮಂಡಳಗಳು, ಯುವ ಸಂಘಟನೆಗಳು, ರೖತರು, ಕಾರ್ಮಿಕರು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ವಿವಿಧ ಧರ್ಮಗಳ ಮುಖಂಡರು, ಗಣ್ಯರು, ಸಾಹಿತಿಗಳು, ಕಲಾವಿದರು ವೈದ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದಾರೆ. ಎಲ್ಲರ ಜತೆ ಚರ್ಚಿಸಿ ಹೋರಾಟ ಕೈ ಬಿಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು. ಆದರೆ ಪ್ರತ್ಯೇಕ ಪಾಲಿಕೆ ರಚನೆ ಕುರಿತಂತೆ ರಾಜ್ಯಪಾಲರು ಇದೀಗ ಅಂಕಿತ ಹಾಕಿದ್ದು, ಸರ್ಕಾರ ತಕ್ಷಣ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತ್ಯೇಕ ಪಾಲಿಕೆ: ಇಂದು ಮಹತ್ವದ ಸಭೆ

ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟದ ಅಂಗವಾಗಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆಯಲ್ಲಿ ನಡೆದಿರುವ ಚರ್ಚೆ ಹಾಗೂ ಸಚಿವರು ನೀಡಿರುವ ಅಭಿಪ್ರಾಯ ಮತ್ತು ಭರವಸೆಗಳ ಕುರಿತು ಚರ್ಚಿಸಲು ಜೂನ್‌ 8ರ ಸೋಮವಾರ ಸಂಜೆ 4ಕ್ಕೆ ಪಾಲಿಕೆ ಕಚೇರಿ ಬಳಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ವೇದಿಕೆ ಬಳಿ ಮಹತ್ವದ ಸಭೆ ಕರೆಯಲಾಗಿದೆ. ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಎಲ್ಲರೂ ಭಾಗವಹಿಸಲು ಹೋರಾಟಗಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.