ಸಾರ್ವಜನಿಕರಿಂದ ದೂರು ಬಾರದಂತೆ ಕಾರ್ಯನಿರ್ವಹಿಸಿ : ಡಾ. ಜಿ.ಪರಮೇಶ್ವರ್
ಬರ ನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ, ರೈತರಿಗೆ ಬೆಳೆ ನಷ್ಟ ಪರಿಹಾರ ಸೇರಿದಂತೆ ವಿವಿಧ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಸಾರ್ವಜನಿಕರಿಂದ ಯಾವುದೇ ದೂರು ಬಂದರೂ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತುಮಕೂರು : ಬರ ನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ, ರೈತರಿಗೆ ಬೆಳೆ ನಷ್ಟ ಪರಿಹಾರ ಸೇರಿದಂತೆ ವಿವಿಧ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಸಾರ್ವಜನಿಕರಿಂದ ಯಾವುದೇ ದೂರು ಬಂದರೂ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಪ್ರಸ್ತುತ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯಲ್ಲಿ ದೂರು ಬಂದರೂ ಮುಲಾಜಿಲ್ಲದೆ ಅಂತಹ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದೆಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಮುಂಗಾರು ಹಂಗಾಮಿನಲ್ಲಿ ಉತ್ಪಾದಿಸಬಹುದಾದ ಬೆಳೆ ಪ್ರಮಾಣದ ವಾಸ್ತಾವಿಕ ಮಾಹಿತಿ ನೀಡಬೇಕು. ಇದರಿಂದ ಆಹಾರ ಧಾನ್ಯ ಕೊರತೆಯನ್ನು ಅಂದಾಜಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರಲ್ಲದೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಬರ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟ ಹೊಂದಿರುವ ರೈತರಿಗೆ ವಿಮಾ ಮೊತ್ತ ವಿತರಣೆಯಾಗಬೇಕು. ವಿಮಾ ಸೌಲಭ್ಯಕ್ಕೆ ಈವರೆಗೂ ನೋಂದಣಿಯಾಗದ ರೈತರಿಗೆ ಅರಿವು ಮೂಡಿಸಿ ರೈತರ ನೋಂದಣಿಗೆ ಕ್ರಮ ಕೈಗೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ಅವರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ನಿರೀಕ್ಷಿತ ಮಳೆಯಾಗದಿರುವುದರಿಂದ ಬೆಳೆ ನಷ್ಟ ಪರಿಸ್ಥಿತಿ ಎದುರಿಸಬೇಕಾಗುವುದಲ್ಲದೆ ಜಾನುವಾರುಗಳ ಮೇವಿಗೂ ಕೊರತೆ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನೀರಿನ ಲಭ್ಯತೆ ಇರುವ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ವಿತರಿಸಿ ಮೇವು ಬೆಳೆಯಲು ಹುರಿದುಂಬಿಸಬೇಕು. ಜಿಲ್ಲೆಯಲ್ಲಿ ಉಂಟಾಗಬಹುದಾದ ಮೇವಿನ ಕೊರತೆಯನ್ನು ನೀಗಿಸಲು ಹೊರ ರಾಜ್ಯಗಳಲ್ಲಿ ಮೇವಿನ ಲಭ್ಯತೆಯ ಬಗ್ಗೆ ಮಾಹಿತಿ ಪಡೆಯಬೇಕೆಂದು ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಗಿರೀಶ್ ಬಾಬು ರೆಡ್ಡಿ ಅವರಿಗೆ ಸೂಚನೆ ನೀಡಿದರು.
ಜಂಟಿ ಕೃಷಿ ನಿರ್ದೇಶಕ ಎನ್.ರಮೇಶ್ ಮಾತನಾಡಿ, 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 219554 ಹೆಕ್ಟೇರ್ ಪ್ರದೇಶದಲ್ಲಿ ಭತ್ತ, ಜೋಳ, ರಾಗಿ, ಮೆಕ್ಕೆಜೋಳ ಸೇರಿ ಏಕದಳ ಧಾನ್ಯ, ದ್ವಿದಳ ಧಾನ್ಯ, ಎಣ್ಣೆಕಾಳು ಹಾಗೂ ವಾಣಿಜ್ಯ ಬೆಳೆಯನ್ನು ಬಿತ್ತನೆ ಮಾಡಲಾಗಿದ್ದು, ಮಳೆ ಅಭಾವದಿಂದ ಶೇ.೮೫ರಷ್ಟು ಬೆಳೆ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಇದರಿಂದ ಬಿತ್ತನೆಯಾದ ಪ್ರದೇಶವನ್ನೊಳಗೊಂಡಂತೆ ಬಿತ್ತನೆಯಾಗಿ ಹಾನಿಯುಂಟಾದ ಬೆಳೆಯಿಂದ ಅಂದಾಜು 1791.45 ಕೋಟಿ ರು.ಗಳಷ್ಟು ನಷ್ಟ ಉಂಟಾಗಿದೆ. ಮಳೆ ಅಭಾವದಿಂದ 180422 ಹೆಕ್ಟೇರ್ ಪ್ರದೇಶದ 212137 ರೈತರು ಬೆಳೆನಷ್ಟಕ್ಕೊಳಗಾಗಿದ್ದಾರೆ ಎಂದು ಮಾಹಿತಿ ನೀಡಿದರಲ್ಲದೆ, ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಈಗಾಗಲೇ ಎಲ್ಲಾ ತಾಲ್ಲೂಕುಗಳ 186 ಕಾಮಗಾರಿಗಳಿಗೆ 360.75ಲಕ್ಷ ರೂ.ಗಳ ಕಾಂಟೆಜೆನ್ಸಿ ಕ್ರಿಯಾ ಯೋಜನೆ ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮಳೆ ಕೊರತೆ ಹೀಗೆ ಮುಂದುವರೆದಲ್ಲಿ ಜಿಲ್ಲೆಯ ಸುಮಾರು 415 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರು ಸಮಸ್ಯೆ ಬಾರದಂತೆ ಜಲಜೀವನ ಮಿಷನ್ ಯೋಜನೆಯಡಿ ೮೮೧ ಕೊಳವೆ ಬಾವಿಗಳನ್ನು ಕೊರೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರೇಗಾ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ನೀಡುತ್ತಾ ನರೇಗಾ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ನಗರ ಸೇರಿದಂತೆ ಗ್ರಾಮಗಳನ್ನು ಸ್ವಚ್ಛವಾಗಿಡಬೇಕು. ಸ್ವಚ್ಛಭಾರತ್ ಮಿಷನ್ ಯೋಜನೆಯಡಿ ತ್ಯಾಜ್ಯ ನಿರ್ವಹಣೆ ಮಾಡುವ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಬೇಕು. ಸ್ವಚ್ಛತೆಗೆ ಆದ್ಯತೆ ನೀಡದ ಪಿಡಿಓಗಳ ಅಮಾನಿತ್ತಿಗೆ ಸ್ವತಃ ನಾನೇ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದ ಅವರು, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ., ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಜಿಲ್ಲಾ ಪಂಚಾಯತಿಯ ನರಸಿಂಹಮೂರ್ತಿ, ಸಣ್ಣಮಸಿಯಪ್ಪ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ರವೀಶ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿಗಳು ಉಪಸ್ಥಿತರಿದ್ದರು.