ಬೆಳಗಾವಿ(ಸೆ.29): ನಗರದಲ್ಲಿ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿ ಸಮಯದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಜತೆಗೆ ನಗರದಲ್ಲಿ ಯಾವುದೇ ಕಾರಣಕ್ಕೂ ಅಂಡರ್ ಗ್ರೌಂಡ್ ನಿರ್ಮಾಣ ಕಾರ್ಯಕೈಗೊಳ್ಳದೇ ಮೇಲ್ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸುವಂತೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ನಗರದ ಕಾಡಾ ಕಚೇರಿಯಲ್ಲಿ ಶನಿವಾರ ಕರೆಯಲಾಗಿದ್ದ ಪಾಲಿಕೆ, ಲೋಕಪಯೋಗಿ, ಹೆಸ್ಕಾಂ ರೈಲ್ವೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈಲ್ವೆ ಗೇಟ್‌ಗಳಿಗೆ ನಿರ್ಮಾಣ ಮಾಡಲಾಗುತ್ತಿರುವ ಸೇತುವೆಗಳನ್ನು ಯಾವುದೇ ಕಾರಣಕ್ಕೂ ಅಂಡರ್ ಗ್ರೌಂಡ್ ನಿರ್ಮಾಣ ಮಾಡಬೇಡಿ. ಇದರಿಂದ ಮಳೆಗಾಲದ ಸಮಯದಲ್ಲಿ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಬೇಕು ಎಂದರು ಅಧಿಕಾರಿಗಳಿಗೆ ತಿಳಿಸಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ  

ನಗರದ 3ನೇ ರೈಲ್ವೆ ಗೇಟ್‌ಗೆ ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು. ಜತೆಗೆ ರೈಲ್ವೆ ಇಲಾಖೆಯಲ್ಲಿನ ಕಾಮಗಾರಿಗಳು ತ್ವರಿತವಾಗಿ ನಡೆಯಬೇಕು. ನಗರದ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು. 

ಅಧಿಕಾರಿಗಳು ಯೋಜನೆ ರೂಪಿಸುವಾಗ ಮುಂದಿನ 30 ವರ್ಷಗಳ ಅಭಿವೃದ್ಧಿ ಗಮನದಟ್ಟುಕೊಳ್ಳಬೇಕು. ಅಲ್ಲದೇ ಅಭಿವೃದ್ಧಿ ಕಾರ್ಯಗಳಿಗೆ ಅಡತಡೆಯನ್ನುಂಟು ಮಾಡುವ ವಿದ್ಯುತ್ ಕಂಬಗಳನ್ನು ತ್ವರಿತವಾಗಿ ಸ್ಥಳಾಂತರ ಮಾಡಲು ಕ್ರಮಕೈಗೊಳ್ಳಬೇಕು ಹೊರತು ವಿಳಂಬ ಸಲ್ಲದು. ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.