ರೈತರ ಬದುಕು ಹಸನಾಗಲು ಕಾಂಗ್ರೆಸ್‌ಗೆ ಅಧಿಕಾರ ನೀಡಿ
ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಷಡಕ್ಷರಿ ಮಂಗಳವಾರ ತಿಪಟೂರು ಗ್ರಾಮ ದೇವತೆ ಕೆಂಪಮ್ಮದೇವಿ, ಕಲ್ಲೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮುಖಂಡರಾದ ಲೋಕೇಶ್ವರ ನೇತೃತ್ವದಲ್ಲಿ ಸಾವಿರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಕಲ್ಪಶ್ರೀರವರಿಗೆ ನಾಮಪತ್ರ ಸಲ್ಲಿಸಿದರು.
ತಿಪಟೂರು : ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಷಡಕ್ಷರಿ ಮಂಗಳವಾರ ತಿಪಟೂರು ಗ್ರಾಮ ದೇವತೆ ಕೆಂಪಮ್ಮದೇವಿ, ಕಲ್ಲೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮುಖಂಡರಾದ ಲೋಕೇಶ್ವರ ನೇತೃತ್ವದಲ್ಲಿ ಸಾವಿರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಕಲ್ಪಶ್ರೀರವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನತೆಯನ್ನುದ್ದೇಶಿಸಿ ಮಾತನಾಡಿ, ಸುಳ್ಳು ಭರವಸೆ, ಭ್ರಷ್ಟಾಚಾರ, ಕೋಮುವಾದಿ, ಜಾತಿವಾದಿ ಬಿಜೆಪಿ ಸರ್ಕಾರವನ್ನು ತೊಲಗಿಸಿ ರೈತರಿಗೆ ಸ್ಪಂದಿಸುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ರೈತರ ಆದಾಯವನ್ನು ಹೆಚ್ಚು ಮಾಡುತ್ತೇನೆಂದು ಹೇಳಿಕೊಂಡು ಮತ ಹಾಕಿಸಿಕೊಂಡ ಬಿಜೆಪಿ ಸರ್ಕಾರ ರೈತರ ಬದುಕನ್ನು ಸಂಕಷ್ಟಕ್ಕೀಡು ಮಾಡಿದ್ದಾರೆ. 20 ಸಾವಿರವಿದ್ದ ಕೊಬ್ಬರಿ 9 ಸಾವಿರಕ್ಕಿಳಿದಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 15ಸಾವಿರ ರು. ಬೆಂಬಲ ಬೆಲೆ ಘೋಷಣೆ ಮಾಡುತ್ತೇವೆ. ತುಮಕೂರು ಜಿಲ್ಲೆಯಲ್ಲಿ 11 ಕ್ಷೇತ್ರಗಳಲ್ಲಿ 10 ಕ್ಷೇತ್ರ ಕಾಂಗ್ರೆಸ್‌ಗೆ ಬರಲಿದ್ದು ಉತ್ತಮ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಕಾರ್ಯಕರ್ತರು ಪಕ್ಷದ ಗ್ಯಾರಂಟಿ ಕಾರ್ಡ್‌ಗಳನ್ನು ಮನೆ ಮನೆಗಳಿಗೆ ತಲುಪಿಸುವ ಮೂಲಕ ಅಭ್ಯರ್ಥಿ ಕೆ. ಷಡಕ್ಷರಿಯವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಡಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡ ಲೋಕೇಶ್ವರ ಮಾತನಾಡಿ, ಕಾರ್ಯಕರ್ತರು ನಮ್ಮ ಅಭ್ಯರ್ಥಿ ಷಡಕ್ಷರಿಯವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವತ್ತ ಶ್ರಮಿಸಬೇಕೆಂದರು.
ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅಭ್ಯರ್ಥಿ ಕೆ. ಷಡಕ್ಷರಿ, ಬಿಜೆಪಿ ಪಕ್ಷದ ಸರ್ವಾಧಿಕಾರಿ ಧೋರಣೆಯಿಂದ ಜನತೆ ರೋಸಿ ಹೋಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಶುರುವಾಗಿದ್ದು ನಮ್ಮ ಪಕ್ಷ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ. ತಾಲೂಕಿನ ಜನತೆ ಮತ್ತೊಂದು ಬಾರಿ ನನಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಮುರಳೀಧರ್ ಹಾಲಪ್ಪ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಡೇನೂರು ಕಾಂತರಾಜು, ಜಿಲ್ಲಾಧ್ಯಕ್ಷರು, ಜನಪ್ರತಿನಿಧಿಗಳು, ತಾ.ಪಂ ಮತ್ತು ಜಿ.ಪಂ ಮಾಜಿ ಅಧ್ಯಕ್ಷರು, ಸದಸ್ಯರು, ನಗರಸಭೆ ಸದಸ್ಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕರ್ತರು ಡಿ.ಕೆ ಶಿವಕುಮಾರ್‌ರವರಿಗೆ ಕೊಬ್ಬರಿ ಹಾರ ಹಾಕಿ ಜೈಕಾರ ಕೂಗಿದರು.