ಮತದಾನ ಮುಕ್ತಾಯವಾಗುವವರೆಗೆ ಪ್ರತಿಬಂಧಕಾಜ್ಞೆಯ ಜಾರಿ
ಕರ್ನಾಟಕ ವಿಧಾನಸಭಾ ಮತಕ್ಷೇತ್ರಗಳಿಗೆ ಸಾರ್ವತ್ರಿಕ ಚುನಾವಣೆ ನಿಮಿತ್ತ ಮೇ 10 ರಂದು ಮತದಾನ ಮುಕ್ತಾಯವಾಗುವವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಮೈಸೂರು : ಕರ್ನಾಟಕ ವಿಧಾನಸಭಾ ಮತಕ್ಷೇತ್ರಗಳಿಗೆ ಸಾರ್ವತ್ರಿಕ ಚುನಾವಣೆ ನಿಮಿತ್ತ ಮೇ 10 ರಂದು ಮತದಾನ ಮುಕ್ತಾಯವಾಗುವವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಜಿಲ್ಲೆ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದ್ದು, ಚುನಾವಣಾ ಅಭ್ಯರ್ಥಿ/ ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಊರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರ್ಕಾರ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.
ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದ್ದು, ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿಬಂರ್‍ಧಿಸಿದೆ. ಕಲ್ಲುಗಳನ್ನು, ಕ್ವಾರ ಪಾದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಇತ್ಯಾದಿ ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ನಿಷೇಧಿಸಲಾಗಿದೆ.
ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.
ಈ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯ ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗುವಂತಿಲ್ಲ.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿ ಪಾಲಿಸಬೇಕುಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.
--ಮತದಾರರಲ್ಲದವರು ಹೊರಗಿರಿ--
ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾಡ್ರ್ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್, ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮತಗಟ್ಟೆಗಳ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗಬೇಕು.
ಈ ಆದೇಶ ಉಲ್ಲಂಘಿಸುವವರ ವಿರುದ್ಧ ಐಪಿಸಿ 188ರ ಪ್ರಕಾರ ಕ್ರಮ ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ/ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ. ಪ್ರತಿಬಂಧಕಾಜ್ಞೆಯ ಉಲ್ಲಂಘನೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.