Asianet Suvarna News Asianet Suvarna News

ಪ್ರತಿಯೊಬ್ಬರು ಗ್ರಾಹಕರ ಹಕ್ಕು ತಿಳಿದುಕೊಳ್ಳಬೇಕು: ನ್ಯಾಯಾಧೀಶೆ ಶರ್ಮಿಳಾ ಸಲಹೆ

ಸಮಾಜದ ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ. ಸರಕುಗಳು ಮತ್ತು ಸೇವೆಗಳ ಮೌಲ್ಯ, ಸಮಗ್ರತೆ, ವೆಚ್ಚ ಹಾಗೂ ಅವುಗಳ ಗುಣಮಟ್ಟದ ತಿಳಿಯಲು ಗ್ರಾಹಕರ ಹಕ್ಕುಗಳ ದಿನಾಚರಣೆ ಆಚರಿಸಲಾಗುತ್ತದೆ.

Everyone should know consumer rights Justice Sharmila advises sat
Author
First Published Mar 16, 2023, 9:00 PM IST

ಉಡುಪಿ (ಮಾ.16): ಸಮಾಜದ ಪ್ರತಿಯೊಬ್ಬ ಪ್ರಜೆಯೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ. ಪ್ರಪಂಚದಾದ್ಯಂತ ಇರುವ ವಸ್ತುಗಳು, ಸರಕುಗಳು ಮತ್ತು ಸೇವೆಗಳ ಮೌಲ್ಯ, ಸಮಗ್ರತೆ, ವೆಚ್ಚ ಹಾಗೂ ಅವುಗಳ ಗುಣಮಟ್ಟದ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ ಈ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು.

ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ಗ್ರಾಹಕರನ್ನು ಸಬಲೀಕರಣಗೊಳಿಸುವುದು ಹಾಗೂ ಅವರ ಹಕ್ಕುಗಳ ಮತ್ತು ಬೇಡಿಕೆಗಳ ಬಗ್ಗೆ ಅರಿವು ಮೂಡಿಸಬೇಕು. ಸರಕಾರ ಗ್ರಾಹಕ ಸಂರಕ್ಷಣಾ ಕಾಯ್ದೆಯಡಿ ಸರಕುಗಳ ಕುರಿತು ವ್ಯಾಪಾರ ಮತ್ತು ಪ್ರಚಾರ ಮಾಡುವ ಹಕ್ಕನ್ನು ನೀಡಿದೆ ಅದರ ಬಗ್ಗೆ ಗ್ರಾಹಕರು ಇನ್ನೂ ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಗ್ರಾಹಕರ ಸಂರಕ್ಷಣಾ ಕಾಯ್ದೆಯಡಿ ದೂರುಗಳನ್ನು ಪರಿಹರಿಸಲು ಯಾವುದೇ ರೀತಿಯ ದೂರುಗಳನ್ನು ಆಯಾ ಜಿಲ್ಲೆಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ನೀಡಬಹುದು. ಗ್ರಾಹಕರಿಗೆ ಸರಕುಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕು, ಶಿಕ್ಷಣ ಮತ್ತು ವ್ಯವಹಾರದ ಜಾಗೃತಿ ಹಕ್ಕು, ಅವಧಿ ಮುಗಿದ ಸರಕುಗಳ ಬಗ್ಗೆ ದೂರು ನೀಡುವ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಮಾಹಿತಿ ನೀಡಿದರು. 

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಎಚ್ಚರವಹಿಸಿ: ಡಿಸಿ ಕೂರ್ಮಾರಾವ್

ಈ ವೇಳೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಜಿಲ್ಲಾಧ್ಯಕ್ಷ ಸುನಿಲ್ ಟಿ ಮಾಸರೆಡ್ಡಿ, ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಮಾಜಿ ಪ್ರಾಂಶುಪಾಲೆ ಸುರೇಖಾ, ಪ್ರಾಧ್ಯಾಪಕ ಕೆ ನಾರಾಯಣ, ನಿರ್ದೇಶಕಿ ನಿರ್ಮಲಾ, ಬಳಕೆದಾರರ ವೇದಿಕೆಯ ಎ.ಪಿ ಕೊಡಂಚ, ಜಿಲ್ಲಾ ಗ್ರಾಹಕ ಪರಿಹಾರ ಆಯೋಗದ ಸದಸ್ಯೆ ಸುಜಾತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಿರಲಿ: ಕೊಡಗು ಡಿಸಿ ಕೂರ್ಮಾರಾವ್ ಎಚ್ಚರಿಕೆ
ಉಡುಪಿ (ಮಾ.16): ಬೇಸಿಗೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಎಲ್ಲಾ ರೀತಿಯ ಎಚ್ಚರಿಕೆ ವಹಿಸಿ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು. ಸಾಮಾನ್ಯವಾಗಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನೀರಿನ ಸಮಸ್ಯೆಗಳು ಉಂಟಾಗುತ್ತವೆ . ಜಿಲ್ಲೆಯಲ್ಲಿ ಕಳೆದ ಸೆಪ್ಟಂಬರ್ ಇಂದ ಈವರೆಗೆ ಹೇಳುವಂತಹ ಮಳೆ ಬೀಳದೆ ಇರುವ ಕಾರಣ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ. ಆದ್ದರಿಂದ ಎಲ್ಲಾ ಸ್ಥಳೀಯ ಸಂಸ್ಥೆಗಳು , ಗ್ರಾಮ ಪಂಚಾಯತ್ ಗಳು ತಮ್ಮ ವ್ಯಾಪ್ತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು, ಒಂದೊಮ್ಮೆ ನೀರಿನ ಸಮಸ್ಯೆಯಾದಲ್ಲಿ ಟ್ಯಾಂಕರ್‌ಗಳ ಮೂಲಕ ಜನ ಸಾಮಾನ್ಯರಿಗೆ ನೀರು ಸರಬರಾಜು ಮಾಡಬೇಕೆಂದು ತಿಳಿಸಿದರು.

ಉಡುಪಿ: ಕಡಿಯಾಳಿ ದೇವಸ್ಥಾನದಲ್ಲಿ ಧ್ವಜ ಪ್ರತಿಷ್ಠೆ ಧೂಳಿ ಮಂಡಲ

ಜಿಲ್ಲೆಯಲ್ಲಿ ಈಗಾಗಲೇ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳುವುದರೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಕಲ್ಪಿಸಬೇಕು ಎಂದ ಅವರು ಕುಡಿಯುವ ನೀರಿನ ಅವಶ್ಯವಿರುವ ತುರ್ತು ಕಾಮಗಾರಿಗಳನ್ನೂ ಸಹ ಕೈಗೆತ್ತಿಕೊಳ್ಳುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ತಾಲೂಕು ಮಟ್ಟದಲ್ಲಿಯೂ ಸಹ ತಹಸೀಲ್ದಾರ್ ನೇತೃತ್ವದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತ ಟಾಸ್ಕ್ ಪೋರ್ಸ್ ಸಮಿತಿಯ ಪ್ರತೀ ಶುಕ್ರವಾರ ಸಭೆಯನ್ನು ನಡೆಸುವದರೊಂದಿಗೆ ಸ್ಥಳೀಯ ನೀರಿನ ಸಮಸ್ಯೆ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಅಪರ ಜಿಲ್ಲಾದಿಕಾರಿ ವೀಣಾ ಬಿ.ಎನ್. ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Follow Us:
Download App:
  • android
  • ios