ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾದ ರೈತ ಕೃಷ್ಣಮೂರ್ತಿ ಅವರ ಕುಟುಂಬಕ್ಕೆ ಸರ್ಕಾರದಿಂದ 20 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಶಾಸಕ ಟಿ.ಡಿ.ರಾಜೇಗೌಡ ಅವರು ಕುಟುಂಬಕ್ಕೆ ಸಾಂತ್ವನ ಹೇಳಿ ಚೆಕ್ ಹಸ್ತಾಂತರಿಸಿದರು, ಆನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ರೈತರ ಪ್ರತಿಭಟನೆ ಮುಂದುವರಿದಿದೆ.

ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾದ ರೈತ ಕೃಷ್ಣಮೂರ್ತಿ ಅವರ ಕುಟುಂಬಕ್ಕೆ ಸರ್ಕಾರದಿಂದ 20 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ.

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರು ಮೃತ ರೈತ ಕೃಷ್ಣಮೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮೃತರ ಪುತ್ರ ರಾಕೇಶ್ ಅವರಿಗೆ ಸರ್ಕಾರದ ವತಿಯಿಂದ 20 ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ ಹಸ್ತಾಂತರಿಸಿದರು. ಇದೇ ವೇಳೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸರ್ಕಾರದಿಂದ ಅಗತ್ಯ ನೆರವು ಒದಗಿಸುವುದಾಗಿ ತಿಳಿಸಿದ ಶಾಸಕರು, ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಮಾನವ ಮತ್ತು ಕಾಡಾನೆ ಸಂಘರ್ಷ ಮುಂದುವರಿದಿದ್ದು, ನಿರಂತರವಾಗಿ ರೈತರು ಪ್ರಾಣ ಕಳೆದುಕೊಳ್ಳುತ್ತಿರುವುದು ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರೈತ ಕೃಷ್ಣಮೂರ್ತಿ ಸಾವನ್ನು ಖಂಡಿಸಿ ಹಾಗೂ ಆನೆ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವಂತೆ ಆಗ್ರಹಿಸಿ ರೈತರು ಮತ್ತು ಸಾರ್ವಜನಿಕರು ಎನ್.ಆರ್. ಪುರ ಬಂದ್‌ಗೆ ಕರೆ ನೀಡಿ ಪ್ರತಿಭಟನೆ ಆರಂಭಿಸಿದ್ದಾರೆ.

ನಿನ್ನೆ (ನವೆಂಬರ್ 18) ಘಟನೆ ನಡೆದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಮೃತದೇಹವನ್ನು ರವಾನಿಸಲು ಮುಂದಾಗಿದ್ದರು. ಆದರೆ ಆಕ್ರೋಶಗೊಂಡ ಗ್ರಾಮಸ್ಥರು ಮೂಡಬಾಗಿಲು ಸಮೀಪ ಅಂಬುಲೆನ್ಸ್ ತಡೆದು, ಮೃತದೇಹವನ್ನು ಹೆನ್ನಂಗಿಗೆ ವಾಪಸ್ ಕಳುಹಿಸುವ ಮೂಲಕ ತಮ್ಮ ಪ್ರತಿಭಟನೆ ದಾಖಲಿಸಿದ್ದರು.

ಶಾಶ್ವತ ಪರಿಹಾರಕ್ಕೆ ಆಗ್ರಹ

ನವೆಂಬರ್ 18ರಂದು ಹೆನ್ನಂಗಿ ಗ್ರಾಮದ ಕೃಷಿಕ ಕೃಷ್ಣಮೂರ್ತಿ ಅವರು ತಮ್ಮ ತೋಟದಲ್ಲಿದ್ದಾಗ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿತ್ತು. ದಾಳಿಯ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಡಾನೆಗಳ ನಿರಂತರ ಹಾವಳಿ ಹಾಗೂ ಪ್ರಾಣ ಹಾನಿಯಿಂದಾಗಿ ಈ ಭಾಗದ ರೈತರು ಭಯದ ನೆರಳಿನಲ್ಲಿ ಬದುಕುವಂತಾಗಿದೆ. ಕಾಡಾನೆಗಳು ಅರಣ್ಯದಿಂದ ನಾಡಿಗೆ ಬಾರದಂತೆ ತಡೆಯಲು ತಕ್ಷಣವೇ ಶಾಶ್ವತ ಕ್ರಮ ಕೈಗೊಳ್ಳಬೇಕು. ಆಗ ಮಾತ್ರ ರೈತರು ಹಾಗೂ ಸಾರ್ವಜನಿಕರು ತಮ್ಮ ತೋಟ, ಗದ್ದೆಗಳಲ್ಲಿ ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಆನೆಗಳ ದಾಳಿಗೆ ಇದೇ ರೀತಿ ಅಮಾಯಕರು ಬಲಿಯಾಗಬೇಕಾಗುತ್ತದೆ ಎಂದು ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.