ರಾಜ್ಯ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ ನಡೆಸಿದ ರೈತರು| ಸಚಿವ ಜಗದೀಶ್ ಶೆಟ್ಟರ್ ಕಾರಿಗೆ ರೈತರಿಂದ ಮುತ್ತಿಗೆ| ರಾಜ್ಯ ಸರ್ಕಾರದ ರೈತ ವಿರೋಧಿ, ಜನ ವಿರೋಧಿ ನೀತಿಯನ್ನು ಖಂಡಿಸಿ ಸೆ.24ರಂದು ಹಾವೇರಿಯಲ್ಲಿ ಬೃಹತ್‌ ರೈತರ ಸಮಾವೇಶ| 

ಬೆಳಗಾವಿ(ಸೆ:21) ಮಹಾಪ್ರವಾಹದಿಂದ ಸಂತ್ರಸ್ತರಾದವರಿಗೆ ಪರಿಹಾರ ನೀಡುವ ಕುರಿತು ಯಾವುದೇ ಸ್ಪಷ್ಟ ತೀರ್ಮಾನ ಪ್ರಕಟಿಸಲಿಲ್ಲ ಎಂದು ಆರೋಪಿಸಿ ರೈತ ಮುಖಂಡರು ಸಚಿವ ಜಗದೀಶ ಶೆಟ್ಟರ್‌ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ನಡೆದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 


ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಸಚಿವ ಜಗದೀಶ ಶೆಟ್ಟರ್‌ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ರೈತ ಮುಖಂಡರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಪ್ರವಾಹದಿಂದ ಉಂಟಾಗಿರುವ ನಷ್ಟದ ಕುರಿತು ಮಾಹಿತಿ ನೀಡಿದ ರೈತ ಮುಖಂಡರು ಸಂಕಷ್ಟದಲ್ಲಿರುವ ಜಿಲ್ಲೆಯ ಜನತೆಗೆ ತ್ವರಿತವಾಗಿ ಪರಿಹಾರ ನೀಡುವಂತೆ ಮನವಿ ಮಾಡಿದರು. 


ಸಮಸ್ಯೆಗಳನ್ನು ಗಮನಕ್ಕೆ ತರುತ್ತಿರುವ ವೇಳೆಯೇ ಸಚಿವರು ಸಭೆಯಿಂದ ಹೊರ ನಡೆದರೂ. ಹೀಗಾಗಿ ಆಕ್ರೋಶಗೊಂಡ ರೈತರು ಸಭಾಭವನದಲ್ಲಿ ಸಚಿವರ ವಿರುದ್ಧ ಘೋಷಣೆ ಕೂಗಿ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ತಂದ ಪೊಲೀಸರು ಪ್ರತಿಭಟನಾನಿರತ ರೈತರನ್ನು ಪೊಲೀಸರು ಎತ್ತಿ ಬೇರೆಡೆಗೆ ಸಾಗಿಸಿದರು.

24ರಂದು ರೈತರ ಸಮಾವೇಶ


ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ ಅವರು ಮಾತನಾಡಿ, ರಾಜ್ಯ ಸರ್ಕಾರದ ರೈತ ವಿರೋಧಿ, ಜನ ವಿರೋಧಿ ನೀತಿಯನ್ನು ಖಂಡಿಸಿ ಸೆ.24ರಂದು ಹಾವೇರಿಯಲ್ಲಿ ಬೃಹತ್‌ ರೈತರ ಸಮಾವೇಶವನ್ನು ಮಾಡಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಕರ್ನಾಟಕ ಬಂದ್‌ಗೆ ಕರೆ ಕೊಡಲಾಗುವುದು ಎಂದು ತಿಳಿಸಿದ್ದಾರೆ.