ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಮೀನುಗಳಲ್ಲಿ ನಾಟಿ ಮಾಡಿರುವ ಭತ್ತದ ಪೈರನ್ನು ಕಿತ್ತು ಕಾವೇರಿ ನದಿಗೆ ಎಸೆದು ರೈತರು ಶನಿವಾರ ಪ್ರತಿಭಟನೆ ನಡೆಸಿದರು.

 ಶ್ರೀರಂಗಪಟ್ಟಣ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಮೀನುಗಳಲ್ಲಿ ನಾಟಿ ಮಾಡಿರುವ ಭತ್ತದ ಪೈರನ್ನು ಕಿತ್ತು ಕಾವೇರಿ ನದಿಗೆ ಎಸೆದು ರೈತರು ಶನಿವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಮುಖ್ಯ ರಸ್ತೆಯಲ್ಲಿ ರೈತರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಬೀದಿಗಳಲ್ಲಿ ಭತ್ತದ ಪೈರು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಸ್ನಾನಘಟ್ಟ ಬಳಿಯ ಕಾವೇರಿ ನದಿಗೆ ಹರಿಬಿಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದರು.

ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂ ಕೋರ್ಟ್ ಕರ್ನಾಟಕದ ವಿರುದ್ಧವೇ ತೀರ್ಪು ಹೊರ ಬರುತ್ತಿದೆ. ತಮಿಳುನಾಡಿನ ಪರವಾಗಿ ನಿಂತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕಿದ್ದ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸಿ ರಾಜ್ಯದ ರೈತರ ಹಿತವನ್ನು ಬಲಿಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಭತ್ತ ನಾಟಿ ಮಾಡಿರುವ ರೈತರಿಗೆ ನೀರಿಲ್ಲದೆ ಭತ್ತದ ಬೆಳೆ ಒಣಗುತ್ತಿದೆ. ತಮಿಳುನಾಡಿಗೆ ನೀರು ಬಿಟ್ಟು ಅಣೆಕಟ್ಟೆಯಲ್ಲೇ ನೀರಿಲ್ಲದೆ ಬರಿದಾಗುತ್ತಿದೆ ಎಂದು ರೈತರು ತಾವು ಬೆಳೆದಿರುವ ಭತ್ತದ ಪೈರನ್ನು ಕಿತ್ತು ಕಾವೇರಿ ನದಿ ಮೂಲಕ ತಮಿಳುನಾಡಿಗೆ ಕಳುಹಿಸಿಕೊಡುತ್ತಿದ್ದೇವೆ ಅವರೇ ಭತ್ತದ ಪೈರನ್ನು ಹಿಡಿದು ನಾಟಿ ಮಾಡಿಕೊಳ್ಳಲಿ ಎಂದು ಅಸಮಾಧಾನ ಹೊರಹಾಕಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಮರಳಗಲ ಕೃಷ್ಣೇಗೌಡ, ಪಿಎಸ್‌ಎಸ್‌ಕೆ ಮಾಜಿ ನಿರ್ದೇಶಕ ಪಾಂಡು, ಮುಖಂಡರಾದ ಜಯರಾಮೇಗೌಡ, ಪ್ರಿಯಾರಮೇಶ್ ಸೇರಿದಂತೆ ಇತರರು ಇದ್ದರು. 

ತಮಿಳುನಾಡಿಗೆ 5,000 ಕ್ಯೂಸೆಕ್ಸ್‌ ನೀರು ಬಿಡುವಂತೆ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ (ಸೆ.21): ಕರ್ನಾಟಕದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ಸ್‌ ನೀರು ಬಿಡುವಂತೆ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ. ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ತಲಾ 5 ಸಾವಿರ ಕ್ಯೂಸೆಕ್ಸ್‌ ನೀರು ಹರಿಸಬೇಕು ಎಂದು ತಿಳಿಸಿದೆ.

ಕನ್ನಡ ನಾಡಿನಲ್ಲಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿಯೂ ತಮಿಳುನಾಡು ನಮಗೆ ಸಾಮಾನ್ಯ ವರ್ಷಗಳಂತೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದು, ಕರ್ನಾಟಕ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಈ ಬಗ್ಗೆ ಕರ್ನಾಟಕ ಹಾಗೂ ತಮಿಳುನಾಡು ಪರ ವಕೀಲರು ಪರಸ್ಪರ ವಾದ ಮಂಡಿಸಿದ್ದಾರೆ. ಇಲ್ಲಿದೆ ನೋಡಿ ಪರಸ್ಪರ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್‌ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ಸ್‌ ನೀಡು ಬಿಡುವಂತೆ ಆದೇಶ ಹೊರಡಿಸಿದೆ. ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳಿಗೊಮ್ಮೆ ಸಭೆಯನ್ನು ಮಾಡಬೇಕು. ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಗವಾಯ್‌ ಆದೇಶ ಹೊರಡಿಸಿದ್ದಾರೆ.