ಕೃಷಿ ಬೆಲೆ ಆಯೋಗಕ್ಕೆ ಪರಿಣಿತರನ್ನು ನೇಮಿಸಲು ರೈತ ಸಂಘ ಆಗ್ರಹ
ರಾಜ್ಯದ ಕೃಷಿ ಬೆಲೆ ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸುವಾಗ ರಾಜ್ಯ ಸರ್ಕಾರವು ಈ ಕ್ಷೇತ್ರದಲ್ಲಿ ಪರಿಣಿತಿ ಹೊಂದಿರುವವರೆನ್ನೇ ನೇಮಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.
ಮೈಸೂರು : ರಾಜ್ಯದ ಕೃಷಿ ಬೆಲೆ ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸುವಾಗ ರಾಜ್ಯ ಸರ್ಕಾರವು ಈ ಕ್ಷೇತ್ರದಲ್ಲಿ ಪರಿಣಿತಿ ಹೊಂದಿರುವವರೆನ್ನೇ ನೇಮಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.
ಈ ಆಯೋಗಕ್ಕೆ ಶಾಸಕರು ಅಥವಾ ರಾಜಕೀಯ ಕಾರಣಕ್ಕಾಗಿ ರಾಜಕೀಯ ಹಿನ್ನೆಲೆ ಹೊಂದಿರುವವರನ್ನು ನೇಮಕ ಮಾಡಿಕೊಂಡರೆ ಏನೂ ಪ್ರಯೋಜನವಾಗುವುದಿಲ್ಲ. ಈ ಸಂಬಂಧ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದ್ದು, ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಪರಿಣಿತರನ್ನು ನೇಮಿಸಿದರೆ ಅನುಕೂಲವಾಗುತ್ತದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಜ್ಯ ಸರ್ಕಾರ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ರಾಜ್ಯದ ಶೇ.90 ಭಾಗ ಬರಗಾಲ ಪೀಡಿತವಾಗಿದೆ. ರೈತರು ಬೆಲೆ ಮೋಸದಿಂದ ಈಗಾಗಲೇ ಅತಂತ್ರ ಸ್ಥಿತಿಯಲ್ಲಿದ್ದು, ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಹೀಗಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬೆಳೆ ಸಾಲ ಮನ್ನಾ ಮಾಡಬೇಕು. ಕಬ್ಬು ಬೆಳಗಾರರಿಗೆ ಸರ್ಕಾರ ಘೋಷಣೆ ಮಾಡಿರುವ ಪ್ರತಿ ಟನ್ ಕಬ್ಬಿಗೆ 150 ರೂ. ನೀಡಬೇಕು ಎಂದು ಅವರು ಒತ್ತಾಯಿಸಿದರು.
ರೈತರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯುವ ಹಿನ್ನೆಲೆಯಲ್ಲಿ ಈ ತಿಂಗಳ ಕೊನೆ ವಾರ ಅಥವಾ ಬರುವ ಜನವರಿ ಮೊದಲನೇ ವಾರದಲ್ಲಿ ಪಿರಿಯಾಪಟ್ಟಣದಲ್ಲಿ ಸಾಲಗಾರರ ರೈತರ ಸಮಾವೇಶ ಆಯೋಜಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಇತರೆಡೆಯೂ ಹಮ್ಮಿಕೊಳ್ಳಲಾಗುವುದು ಎಂದರು.
ಪಿರಿಯಾಪಟ್ಟಣ ಹಾಗೂ ಎಚ್.ಡಿ. ಕೋಟೆ ತಾಲೂಕಿನಲ್ಲಿ ಕರೂರ್ ವೈಶ್ಯ ಬ್ಯಾಂಕ್ ಸುಮಾರು 600 ರೈತರಿಗೆ ಸಾಲ ನೀಡಿದೆ. ಆದರೆ, ಸಾಲ ಮಂಜೂರು ಮಾಡಿದಷ್ಟು ಹಣ ನೀಡದೇ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳು ಅರ್ಧದಷ್ಟು ಹಣ ಲೂಟಿ ಮಾಡಿದ್ದಾರೆ. ಹೀಗಾಗಿ, ಬ್ಯಾಂಕಿನ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ರೈತರಿಗೆ ನೀಡಿದಷ್ಟೇ ಹಣ ಕಟ್ಟಿಸಿಕೊಂಡು ಸಾಲ ಮುಕ್ತಾಯಗೊಳಿಸಬೇಕು. ಇಲ್ಲದಿದ್ದರೆ ರೈತ ಸಂಘ ಹೋರಾಟ ನಡೆಸಲಿದೆ ಎಂದು ಅವರು ಎಚ್ಚರಿಸಿದರು.
ರಾಜ್ಯ ರೈತ ಸಂಘದ ವತಿಯಿಂದ ಡಿ.21 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತ ನಾಯಕರಾದ ಎನ್.ಡಿ. ಸುಂದರೇಶ್ ನೆನಪಿನ ದಿನಾಚರಣೆ, ಡಿ.23 ರಂದು ರಾಯಚೂರಿನಲ್ಲಿ ಕೆ.ಎಸ್. ಪುಟ್ಟಣ್ಣಯ್ಯ ಅವರ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪದಾಧಿಕಾರಿಗಳಾದ ಹೊಸಕೋಟೆ ಬಸವರಾಜು, ಪ್ರಸನ್ನ ಎನ್. ಗೌಡ, ಚಂದ್ರಶೇಖರ್, ವಿಜೇಂದ್ರ, ಪಿ. ಮರಂಕಯ್ಯ, ಮಂಡಕಳ್ಳಿ ಮಹೇಶ್ ಇದ್ದರು.