ಬೆಳಗಾವಿ [ಸೆ.11]: ಸಂತ್ರಸ್ತರು ಸ್ಥಳಾಂತರಕ್ಕೆ ಲಿಖಿತವಾಗಿ ಒಪ್ಪಿಗೆ ನೀಡಿದಲ್ಲಿ ನವಗ್ರಾಮಗಳನ್ನು ನಿರ್ಮಿಸಿ ಶಾಲೆ, ಆಸ್ಪತ್ರೆ ಸೇರಿದಂತೆ ಎಲ್ಲ ಬಗೆಯ ಮೂಲ ಸೌಕರ್ಯ ಒದಗಿಸಲು ಸರ್ಕಾರ ಸಿದ್ಧವಿರುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮಾತ್ರವಲ್ಲದೆ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾದರೂ ಪರವಾಗಿಲ್ಲ. ನೆರೆಯಿಂದ ಸಂತ್ರಸ್ತರಾದವರಿಗೆ ಬದುಕು ಕಟ್ಟಿಕೊಳ್ಳುವ ಉದ್ದೇಶದಿಂದ ಪರಿಹಾರ ಕಾರ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪುನರುಚ್ಚರಿಸಿದ್ದಾರೆ.

ಜಿಲ್ಲೆಯ ರಾಮದುರ್ಗ ತಾಲೂಕಿನ ನೆರೆ ಪೀಡಿತ ಪ್ರದೇಶದಲ್ಲಿ ಮಂಗಳವಾರ ಸಂಚರಿಸಿದ ಅವರು ಸುರೇಬಾನ ಗ್ರಾಮದ ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರೊಂದಿಗೆ ಮತ್ತು ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಅವರು ಸಂತ್ರಸ್ತರು ಒಪ್ಪಿದರೆ ನದಿ ತೀರದ ಗ್ರಾಮಗಳನ್ನು ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸಲಾ​ಗು​ವುದು ಎಂದು ಸ್ಪಷ್ಟಪಡಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಭೀಕರ ಪ್ರವಾಹದಿಂದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಬೆಳೆ, ಮನೆ ಹಾನಿಯಾಗಿದೆ. ಜನ ಜಾನುವಾರುಗಳು ಮೃತ​ಪ​ಟ್ಟಿ​ವೆ. ಆದ್ದರಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾದರೂ ಪರವಾಗಿಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲಾಗುವುದು. ರೈತರು ಬೆಳೆದ ಬೆಳೆಗಳು ಸಂಪೂರ್ಣ ಹಾಳಾಗಿದ್ದರಿಂದ ಸಮರ್ಪಕ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಸಂತ್ರಸ್ತರ ಕಷ್ಟಅರಿತುಕೊಳ್ಳುವ ಉದ್ದೇಶದಿಂದ ದೆಹಲಿ ಪ್ರವಾಸ ರದ್ದುಗೊಳಿಸಿ ಬೆಳಗಾವಿ ಪ್ರವಾಸ ಕೈಗೊಂಡಿರುವುದಾಗಿಯೂ ತಿಳಿಸಿದರು.

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ರಾಜ್ಯದ ಖಜಾನೆ ಖಾಲಿಯಾಗಿಲ್ಲ. ಹೆಚ್ಚಿನ ಪರಿಹಾರ ಕಾರ್ಯದ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಪರಿಹಾರ ಹಣದ ನಿರೀಕ್ಷೆಯಲ್ಲಿದ್ದೇವೆ ಎಂದರು.

ವಾರದೊಳಗೆ 1 ಲಕ್ಷ ರು. ಬಿಡುಗಡೆಗೆ ಸೂಚನೆ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಕುಟುಂಬದವರಿಗೆ 10 ಸಾವಿರ ರು. ಪರಿಹಾರ ನೀಡುವ ಕಾರ್ಯ ಈಗಾಗಲೇ ಮುಗಿದಿದೆ. ಒಂದು ಮನೆ ನಿರ್ಮಾಣಕ್ಕೆ 5 ಲಕ್ಷ ರು. ನೀಡಲು ಸರ್ಕಾರ ನಿರ್ಧರಿಸಿದ್ದು, ಮನೆಗಳು ಹಾಳಾದವ​ರಿಗೆ ಅಡಿಪಾಯ ಹಾಕಿಕೊಡಲು ವಾರದೊಳಗೆ ಲಕ್ಷ ರು. ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗೆ ಸೂಚಿಸ​ಲಾ​ಗಿದೆ. ವಾಸಿಸಲು ಯೋಗ್ಯವಿಲ್ಲದ ಮನೆಯ ಕುಟುಂಬಸ್ಥರಿಗೆ ತಾತ್ಕಾಲಿಕ ಶೆಡ್‌ ನಿರ್ಮಾಣಕ್ಕೂ 50 ಸಾವಿರ ರು. ಕೊಡುತ್ತೇವೆ. ತಾತ್ಕಾಲಿಕ ಶೆಡ್‌ ನಿರ್ಮಾಣ ಕಾಮಗಾರಿಯನ್ನೂ ಮೂರ್ನಾಲ್ಕು ದಿನಗಳಲ್ಲಿ ಪ್ರಾರಂಭಿಸಬೇಕು ಎಂದು ಸೂಚಿಸಿದರು.

ಪ್ರವಾಹದಿಂದ ಹಾನಿಗೊಳಗಾದ ಅಂಗಡಿ ಮುಂಗಟ್ಟುಗಳ ಮಾಲೀಕರಿಗೂ ತಲಾ 10 ಸಾವಿರ ರು. ಪರಿಹಾರ ನೀಡಲಾಗುವುದು. ನೇಕಾರ ಕುಟುಂಬಗಳಿಗೂ ಸೂಕ್ತ ಪರಿಹಾರ ನೀಡಲಾಗುವುದು ಎಂದರು.