ಬೆಂಗಳೂರಿನ ಸಿಲ್ಕ್ ಬೋರ್ಡ್ ಫ್ಲೈಓವರ್ ಬಳಿ ವಿದೇಶಿಗನೊಬ್ಬ ಹೆಡ್‌ಫೋನ್ ಧರಿಸಿ, ಸಿಗರೇಟ್ ಸೇದುತ್ತಾ ಅಪಾಯಕಾರಿಯಾಗಿ ಬೈಕ್ ಚಲಾಯಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಚಾರ ನಿಯಮ ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.
ಬೆಂಗಳೂರು: ನಗರದಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಮತ್ತೊಂದು ಬಾರಿ ಚರ್ಚೆಗೆ ಕಾರಣವಾಗಿದೆ. ಸಿಲ್ಕ್ ಬೋರ್ಡ್ ಡಬಲ್ ಡೆಕ್ಕರ್ ಫ್ಲೈಓವರ್ ಬಳಿ ವಿದೇಶಿಗನೊಬ್ಬ ಯಾವುದೇ ಭಯವಿಲ್ಲದೆ ಅಪಾಯಕಾರಿ ರೀತಿಯಲ್ಲಿ ಬೈಕ್ ಚಾಲನೆ ಮಾಡಿರುವ ಘಟನೆ ಸಾರ್ವಜನಿಕರ ಗಮನ ಸೆಳೆದಿದೆ. ತಲೆಗೆ ಹೆಡ್‌ಫೋನ್ ಧರಿಸಿ, ಕೈಯಲ್ಲಿ ಸಿಗರೇಟ್ ಹಿಡಿದುಕೊಂಡೇ ಬೈಕ್ ಚಲಾಯಿಸುತ್ತಿದ್ದ ಈ ವ್ಯಕ್ತಿ, ಟ್ರಾಫಿಕ್ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ. ರಸ್ತೆಯ ಮಧ್ಯೆ ಇತರ ವಾಹನಗಳ ನಡುವೆ ನಿರ್ಲಕ್ಷ್ಯದಿಂದ ಬೈಕ್ ಓಡಿಸುತ್ತಿದ್ದುದರಿಂದ, ಇತರ ವಾಹನ ಸವಾರರ ಜೀವಕ್ಕೂ ಅಪಾಯ ಉಂಟಾಗುವ ಪರಿಸ್ಥಿತಿ ಇದೆ.
ಅಪಾಯಕಾರಿ ದೃಶ್ಯ ಸೆರೆ
ವಿಡಿಯೋದಲ್ಲಿ ದಾಖಲಾದಂತೆ ಈ ವ್ಯಕ್ತಿ KA 42 EE 1361 ಸಂಖ್ಯೆಯ ನೋಂದಣಿ ಹೊಂದಿರುವ ಬೈಕ್‌ನಲ್ಲಿ ಸಂಚರಿಸುತ್ತಿದ್ದನು. ಹಿಂಬದಿಯಿಂದ ಬರುತ್ತಿದ್ದ ಕಾರಿನಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಈ ಅಪಾಯಕಾರಿ ದೃಶ್ಯವನ್ನು ಮೊಬೈಲ್‌ನಲ್ಲಿ ವಿಡಿಯೋಗೆ ಸೆರೆಹಿಡಿದಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿದೇಶಿಗನಾಗಲಿ, ದೇಶೀಯ ನಾಗರಿಕನಾಗಲಿ ಎಲ್ಲರೂ ಒಂದೇ ನಿಯಮ ಪಾಲಿಸಬೇಕು; ಯಾರಿಗೂ ಕಾನೂನಿನ ಮೇಲೆ ಹಕ್ಕಿಲ್ಲ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದೇಶಿಗನ ವಿರುದ್ಧ ಕ್ರಮಕ್ಕೆ ಆಗ್ರಹ
ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡಿರುವ ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರನ್ನು ಸಾಮಾಜಿಕ ಜಾಲತಾಣ ಬಳಕೆದಾರರು ಆಗ್ರಹಿಸಿದ್ದಾರೆ. ಘಟನೆ ಕುರಿತು ಪೊಲೀಸರು ಗಮನ ಹರಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚಾಗಿದೆ.


