ದೇವರಾಯನದುರ್ಗದಲ್ಲಿ ಅರಣ್ಯ ಒತ್ತುವರಿ: ಹೈಕೋರ್ಟ್ ನೋಟಿಸ್
ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿರುವ ಅರ್ಜಿ ಸಂಬಂಧ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಬೆಂಗಳೂರು : ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿರುವ ಅರ್ಜಿ ಸಂಬಂಧ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತಂತೆ ತುಮಕೂರು ತಾಲೂಕು ಬೆಳ್ಳಾವಿ ಹೋಬಳಿ ವಕ್ಕೋಡಿ ಗ್ರಾಮದ ಮಾರಣ್ಣ ಪಾಳೆಗಾರ ಎಂಬಾತ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿ ಬಳಿಕ ಅರ್ಜಿಯಲ್ಲಿ ಆರೋಪಿಸಲಾಗಿರುವ ವಿಷಯಗಳ ಕುರಿತು ಕೂಲಂಕುಶವಾಗಿ ಉತ್ತರಿಸಿ ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು.
ಪ್ರಕರಣವೇನು?
ತುಮಕೂರು ತಾಲೂಕು ಊರ್ಡಿಗೇರಿ ಹೋಬಳಿಯ ವ್ಯಾಪ್ತಿ ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ 3 ಎಕರೆ 20 ಗುಂಟೆ ಜಮೀನನ್ನು ಖಾಸಗಿ ವ್ಯಕ್ತಿ ಜೆ. ಶ್ವೇತಕುಮಾರಿ ಒತ್ತುವರಿ ಮಾಡಿಕೊಂಡು, ಕಟ್ಟಡ ನಿರ್ಮಾಣ ಮಾಡಿದ್ದಾರೆ. ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ವಶಕ್ಕೆ ಪಡೆದುಕೊಳ್ಳಬೇಕು ಮತ್ತು ಅಲ್ಲಿ ನಿರ್ಮಿಸಿರುವ ಕಟ್ಟಡವನ್ನು ನೆಲಸಮ ಮಾಡಬೇಕು. ಅದೇ ರೀತಿ ಶ್ವೇತಕುಮಾರಿ ಅವರು ಮುತ್ತಸಂದ್ರ ಗ್ರಾಮದ ಸರ್ವೇ ನಂ. 17 ಹಾಗೂ ವಡ್ಡರಹಳ್ಳಿ ಗ್ರಾಮದ ಸರ್ವೆ ನಂ.26ರ ಗೋಮಾಳ ಜಾಗದಲ್ಲಿ ನಿರ್ಮಿಸಿರುವ ಕಾಂಕ್ರಿಟ್ ರಸ್ತೆಯನ್ನು ತೆರವುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.