ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ಹರಿದು 8 ಜನರು ಸಾವನ್ನಪ್ಪಿದ ಘಟನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಹಾಸನ/ಬೆಂಗಳೂರು (ಸೆ.12): ಹಾಸನದ ಮೊಸಳೆಹೊಸಳ್ಳಿಯನ್ನು ಗಣೇಶ ವಿಸರ್ಜನಾ ಮೆರವಣಿಗೆಯ ಮೇಲೆ ಕ್ಯಾಂಟರ್ ಹರಿದಿದ್ದು, 8 ಜನರು ಸಾವನ್ನಪ್ಪಿದ ಸುದ್ದಿ ತಿಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡವರಿಗೆ ರಾಜ್ಯ ಸರ್ಕಾರ ಉತ್ತಮ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ.
ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ.
ಮೃತರ ಕುಟುಂಬಗಳಿಗೆ ₹15 ಲಕ್ಷ ಪರಿಹಾರ ಕೊಡಿ:
ಇನ್ನು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಕ್ರಮ ಕೈಗೊಂಡಿದ್ದಾರೆ. ಇನ್ನು ಘಟನೆಯಲ್ಲಿ ಪೊಲೀಸರ ನಿರ್ಲಕ್ಷ್ಯವೂ ಎದ್ದು ಕಾಣುತ್ತಿದೆ. ಇದರ ಹೊಣೆಯನ್ನು ಸರ್ಕಾರವೇ ಹೊತ್ತು ಮೃತರ ಕುಟುಂಬಗಳಿಗೆ 15 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹ ಮಾಡಿದ್ದಾರೆ.
