ಹಾವೇರಿ ಜಿಲ್ಲೆಯ ಸವಣೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಂದಲೇ ಮಲಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಮತ್ತು ಹಿರಿಯ ಶುಶ್ರೂಷಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಆರೋಗ್ಯ ಇಲಾಖೆ ಈ ಕಠಿಣ ಕ್ರಮ ಕೈಗೊಂಡಿದೆ.

ಬೆಂಗಳೂರು/ಹಾವೇರಿ (ಸೆ.01): ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಂದ ಮಲಗುಂಡಿ ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಹಿರಿಯ ಶುಶ್ರೂಷಾಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಘಟನೆ ಹಿನ್ನೆಲೆ ಏನು?

ಆಗಸ್ಟ್ 28, 2024 ರಂದು ಸವಣೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ವಾರ್ಡ್‌ನಲ್ಲಿ ಮಲಮೂತ್ರ ವಿಸರ್ಜನೆ ಮಾಡಿದ್ದು, ಅದನ್ನು ಆಸ್ಪತ್ರೆಯ ಸಿಬ್ಬಂದಿ ರೋಗಿಗಳ ಕೈಯಿಂದಲೇ ಸ್ವಚ್ಛಗೊಳಿಸುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಕರ್ನಾಟಕ ಸರ್ಕಾರವು ಮಲಮೂತ್ರವನ್ನು ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಇದು ಕಾನೂನುಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಆದಾಗ್ಯೂ, ಆಡಳಿತ ವೈದ್ಯಾಧಿಕಾರಿ ಹಾಗೂ ಹಿರಿಯ ಶುಶ್ರೂಷಾಧಿಕಾರಿಗಳ ಕಣ್ತಾವಲಿನಲ್ಲಿ ಈ ಅಮಾನವೀಯ ಕೃತ್ಯ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಈ ಸಂಬಂಧ ಸವಣೂರು ಪೊಲೀಸ್ ಠಾಣೆಯಲ್ಲಿ BNS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಅಮಾನತುಗೊಂಡ ಅಧಿಕಾರಿಗಳು:

  1. ಡಾ. ಶಂಕರ ಹಿರೇಗೌಡರ್, ಆಡಳಿತ ವೈದ್ಯಾಧಿಕಾರಿ, ಸಾರ್ವಜನಿಕ ಆಸ್ಪತ್ರೆ, ಸವಣೂರು, ಹಾವೇರಿ ಜಿಲ್ಲೆ.
  2. ಶ್ರೀಮತಿ ವನಿತಾ ಕುರುಂದವಾಡ, ಹಿರಿಯ ಶುಶ್ರೂಷಾಧಿಕಾರಿ, ಸಾರ್ವಜನಿಕ ಆಸ್ಪತ್ರೆ, ಸವಣೂರು, ಹಾವೇರಿ ಜಿಲ್ಲೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಶ್ರೀ ಗುರುದತ್ತ ಹೆಗಡೆ (ಭಾ.ಆ.ಸೆ.) ಅವರು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 10(1)(ಡಿ) ರಡಿ ಪ್ರದತ್ತವಾದ ಅಧಿಕಾರ ಬಳಸಿ ಈ ಕಠಿಣ ಕ್ರಮ ಕೈಗೊಂಡಿದ್ದಾರೆ. ಅಮಾನತು ಅವಧಿಯಲ್ಲಿ ಈ ಅಧಿಕಾರಿಗಳು ಸರ್ಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಟ್ಟು ತೆರಳುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.