ಮಂಗಳೂರು [ಆ.23]: ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಏಳು ಜಿಲ್ಲೆಗಳಿಗೆ ‘ಆರೇಂಜ್‌ ಅರ್ಲಟ್‌’ ನೀಡಿದೆ.

ರಾಜ್ಯದ ಕರಾವಳಿಯಲ್ಲಿ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಮುಂಗಾರು ಚುರುಕುಕೊಂಡಿದೆ. ಇದರಿಂದ ರಾಜ್ಯಾದ್ಯಂತ ಎರಡು ದಿನ ಮಳೆಯಾಗಲಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯಲ್ಲಿ 115 ಮಿ.ಮೀ.ನಿಂದ 205 ಮಿ.ಮೀ.ವರೆಗೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೇಂಜ್‌ ಅರ್ಲಟ್‌’ ನೀಡಲಾಗಿದೆ.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಆ.24ರಿಂದ ಆ.27ರ ವರೆಗೆ 65 ರಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯಲ್ಲೋ ಅರ್ಲಟ್‌’ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ರಾಜ್ಯದಲ್ಲಿ ಸಾಧಾರಣದಿಂದ ಕೂಡಿದ ವ್ಯಾಪಕ ಮಳೆ ಮುಂದುವರೆಯಲಿದೆ. ಕೆಲವೆಡೆ ಮಾತ್ರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.