ಬೆಂಗಳೂರು (ಸೆ.08): ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಸೆ.8 ಮತ್ತು 10ರಂದು ಭಾರಿ ಮಳೆ ಬೀಳಲಿರುವುದರಿಂದ ‘ಆರೆಂಜ್‌ ಅಲರ್ಟ್‌’, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸೆ.10ರವರೆಗೆ ವ್ಯಾಪಕ ಮಳೆ ಸಾಧ್ಯತೆ ಕಾರಣಕ್ಕೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರ್ಗಿ ಸೇರಿ ಕೆಲ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ನಿರೀಕ್ಷೆ ಹಿನ್ನೆಲೆಯಲ್ಲಿ ಸೆ.9ಹಾಗೂ 10ರಂದು ಎರಡು ದಿನ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಈ ವೇಳೆ ಮೋಡ ಕವಿದ ವಾತಾವರಣ ಇರಲಿದೆ.

ಇನ್ನು ಕರಾವಳಿಯ ಭಾಗದ ಸಮುದ್ರದಲ್ಲಿ ಅಂದಾಜು 3.3 ಮೀಟರ್‌ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ. ಪ್ರತಿ ಗಂಟೆಗೆ ಸುಮಾರು 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರರಿಗೆ ನೀರಿಗಿಳಿಯದಂತೆ ಸೂಚಿಸಲಾಗಿದೆ.

ಐದು ಜಿಲ್ಲೆಗಳಲ್ಲಿ ಭಾರೀ ಮಳೆ : ಸಿಡಿಲಿಗೆ ಇಬ್ಬರ ಸಾವು ...

ನಿನ್ನೆ ಎಲ್ಲೆಲ್ಲಿ ಮಳೆ: ಆ.7ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು 24 ಸೆಂ.ಮೀ, ಶಿವಮೊಗ್ಗ ಜಿಲ್ಲೆಯ ಹೊಸನಗರ 13, ಉಡುಪಿಯ ಕಾರ್ಕಳ 11, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ 10, ಬೆಳಗಾವಿಯ ಬೈಲಹೊಂಗಲ, ದಾವಣಗೆರೆಯ ಹೊನ್ನಾಳಿ, ಶಿವಮೊಗ್ಗದ ಸಾಗರ, ಚಿಕ್ಕಮಗಳೂರಿನ ಶಿವನಿ ಮತ್ತು ಶಿವಮೊಗ್ಗದಲ್ಲಿ ತಲಾ 7, ಬಾಗಲಕೋಟೆಯ ಮಹಾಲಿಂಗಪುರ, ಉತ್ತರ ಕನ್ನಡದ ಸಿದ್ದಾಪುರದಲ್ಲಿ ತಲಾ 6 ಸೆಂ.ಮೀ. ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.