ಕೋಮುಲ್ ನೇಮಕಾತಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡರಿಗೆ ಧಾರವಾಡ ಹೈಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದೆ.

ಕೋಲಾರ: ಕೋಮುಲ್ ನೇಮಕಾತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡರಿಗೆ ಧಾರವಾಡ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್‌ ದೊರೆತಿದೆ.

ನ್ಯಾಯಮೂರ್ತಿ ಎಂ.ಐ.ಅರುಣ್ ಅವರು ಶಾಸಕ ನಂಜೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಆದೇಶ ಹೊರಡಿಸಿದ್ದಾರೆ. ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅರ್ಜಿ ವಿರುದ್ಧ ಶಾಸಕರು ಸಲ್ಲಿಸಿದ್ದ ಅರ್ಜಿಗೆ ಈ ಆದೇಶ ಪ್ರಕಟವಾಗಿದೆ.

ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿತ್ತು. ಕೋಮುಲ್ ನೇಮಕಾತಿ ವಿಚಾರದಲ್ಲಿ ಈ ಪ್ರಕರಣ ದಾಖಲಾಗಿತ್ತು.

ಜನವರಿ 20, 2024ರಂದು ಶಾಸಕ ನಂಜೇಗೌಡರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಮಾಲೂರು ತಾಲೂಕಿನ ಕೊಮ್ಮನಹಳ್ಳಿ ನಿವಾಸ ಹಾಗೂ ಇತರೆಡೆ ದಾಳಿ ನಡೆಸಿದ್ದ ಅಧಿಕಾರಿಗಳು, ಸೆಪ್ಟೆಂಬರ್ 12, 2024ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ದಾಳಿ ವೇಳೆ ನಂಜೇಗೌಡ ಕುಟುಂಬಕ್ಕೆ ಸೇರಿದ್ದ ಜಮೀನು, ಆಸ್ತಿ, ನಗದು ಹಾಗೂ ಮೊಬೈಲ್‌ಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿತ್ತು. ನೇಮಕಾತಿ ವಿಚಾರದಲ್ಲಿ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಲು ಅವಕಾಶವಿಲ್ಲ ಎಂದು ಶಾಸಕ ನಂಜೇಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದರು. ಸತತ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಹೊರಡಿಸಿದೆ.

ಶಾಸಕ ನಂಜೇಗೌಡರ ಪರ ವಕೀಲ ಮಹೇಂದ್ರ ಗೌಡ ವಾದ ಮಂಡಿಸಿದ್ದರು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ನಂಜೇಗೌಡ ವಿರುದ್ಧ ಪ್ರಕರಣ ರದ್ದು, ಕಾಂಗ್ರೇಸಿಗರ ಹರ್ಷ

ಶಾಸಕ ಕೆ.ವೈ. ನಂಜೇಗೌಡ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ದಾಖಲಿಸಿದ್ದ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿರುವುದು ನ್ಯಾಯಕ್ಕೆ ಸಂದ ಜಯವಾಗಿದೆ ಎಂದು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ವಿಜಯ ನರಸಿಂಹ ಹೇಳಿದ್ದಾರೆ.

ನಗರದ ಮಾರುತಿ ಬಡಾವಣೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾಲೂರು ಹಾಗೂ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, 2024ರಲ್ಲಿ ಬಿಜೆಪಿ ಸರ್ಕಾರವು ಇ.ಡಿ.ಯನ್ನು ದುರುಪಯೋಗಪಡಿಸಿಕೊಂಡು ಶಾಸಕ ಕೆ.ವೈ. ನಂಜೇಗೌಡ ಅವರ ನಿವಾಸದ ಮೇಲೆ ದಾಳಿ ನಡೆಸಿ ಮಾನಸಿಕ ಕಿರುಕುಳ ನೀಡಿತ್ತು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ ಸಂವಿಧಾನಾತ್ಮಕವಾಗಿ ಈ ಪ್ರಕರಣದ ತನಿಖೆ ನಡೆಸುವ ಅಧಿಕಾರ ಇ.ಡಿ.ಗೆ ಇಲ್ಲವೆಂದು ಪ್ರಶ್ನಿಸಿ ಶಾಸಕರು ಹೈಕೋರ್ಟ್ ಮೊರೆ ಹೋಗಿದ್ದರು ಎಂದು ತಿಳಿಸಿದರು.

ಮಾಲೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ. ಕೃಷ್ಣಪ್ಪ ಮಾತನಾಡಿ, ಶಾಸಕರ ವಿರುದ್ಧ ದಾಖಲಿಸಲಾಗಿದ್ದ ಇ.ಡಿ. ಪ್ರಕರಣವನ್ನು ರದ್ದುಪಡಿಸಿರುವುದು ಪ್ರತಿಪಕ್ಷಗಳಿಗೆ ನಡುಕ ಉಂಟುಮಾಡಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಸೋಮಶೇಖರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಂಜಿನಪ್ಪ, ಉಪಾಧ್ಯಕ್ಷ ಅಶ್ವತ್ ರೆಡ್ಡಿ ಇದ್ದರು.