Asianet Suvarna News Asianet Suvarna News

ಬೆಂಗ್ಳೂರಲ್ಲಿ ಅನಧಿಕೃತ ಚುನಾವಣಾ ಫ್ಲೆಕ್ಸ್‌: ಬಿಬಿಎಂಪಿಗೆ ಹೈಕೋರ್ಟ್ ಚಾಟಿ

ಬೆಂಗಳೂರು ನಗರದಲ್ಲಿನ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಯಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಮಾಯಿಗೇಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಪಾಲಿಕೆ ವಿರುದ್ಧ ಬೇಸರ ವ್ಯಕ್ತಪಡಿಸಿತು.

High Court of Karnataka Slams BBMP for Unofficial Election Flex in Bengaluru grg
Author
First Published Sep 20, 2023, 4:33 AM IST

ಬೆಂಗಳೂರು(ಸೆ.20):  ನಗರದಲ್ಲಿ ನಾಯಿಕೊಡೆಗಳಂತೆ ಅನಧಿಕೃತ ಚುನಾವಣಾ ಹೋರ್ಡಿಂಗ್‌ಗಳು ತಲೆ ಎತ್ತುತ್ತಿರುವುದರಿಂದ ಬೆಂಗಳೂರು ಜನತೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೈಕೋರ್ಟ್‌ ಅಸಮಾಧಾನ ಹೊರಹಾಕಿದೆ.
ನಗರದಲ್ಲಿನ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಯಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಮಾಯಿಗೇಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಪಾಲಿಕೆ ವಿರುದ್ಧ ಬೇಸರ ವ್ಯಕ್ತಪಡಿಸಿತು.

ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆ ಹೆಚ್ಚುತ್ತಿದೆ. ಈ ಬೆಳವಣಿಗೆಯು ಪಾಲಿಕೆಯ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಸೂಕ್ತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಹಾಗೂ ಸಂಪೂರ್ಣ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡುವಂತೆ ಮಾಡಿರುವುದಾಗಿ ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಅವರ ವಾದವು ನ್ಯಾಯಸಮ್ಮತವಾಗಿದ್ದು, ಜಾಹೀರಾತು ಹಾವಳಿಯಿಂದ ಸಾರ್ವಜನಿಕರು ಮತ್ತು ವಿಶೇಷವಾಗಿ ಬೆಂಗಳೂರು ನಗರದ ನಾಗರಿಕರು ಬಳಲುತ್ತಿದ್ದಾರೆ ಎಂದು ನ್ಯಾಯಪೀಠ ಬಿಬಿಎಂಪಿ ಅಧಿಕಾರಿಗಳ ಕಾರ್ಯವೈಖರಿಗೆ ಚಾಟಿ ಬೀಸಿದೆ.

ನೌಕರ ಮೃತಪಟ್ಟರೆ ಸೋದರಿಗೆ ಅನುಕಂಪ ನೌಕರಿ ಇಲ್ಲ: ಹೈಕೋರ್ಟ್‌

ಅಲ್ಲದೆ, ನಗರದಲ್ಲಿ ಅನಧಿಕೃತ ಚುನಾವಣಾ ಹೋರ್ಡಿಂಗ್‌, ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳು ಸುಗಮ ಸಂಚಾರಕ್ಕೆ ಗಂಭೀರ ಅಡಚಣೆ ಉಂಟುಮಾಡುತ್ತಿದೆ. ಈ ಪರಿಸ್ಥಿತಿ ತಡೆಯುವ ನಿಟ್ಟಿನಲ್ಲಿ ಬಿಬಿಎಂಪಿ ಕಾರ್ಯೋನ್ಮುಖವಾಗಬೇಕು. ಆ ಕುರಿತು ಬಿಬಿಎಂಪಿ ಸಮಗ್ರವಾದ ವರದಿಯನ್ನು ಮೂರು ವಾರದಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಅ.11ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ಮೆಮೋ ಸಲ್ಲಿಸಿ, 2023ರ ಆ.30ರಿಂದ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆ ಸಂಬಂಧ 701 ಪ್ರಕರಣ ದಾಖಲಿಸಲಾಗಿದೆ. 2022ರಲ್ಲಿ 76, 2021ರಲ್ಲಿ 19, 2020ರಲ್ಲಿ 120 ಪ್ರಕರಣಗಳು ದಾಖಲಾಗಿವೆ. ಒಟ್ಟಾರೆ ಪ್ರಕರಣಗಳ ಪೈಕಿ 164 ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ. 17 ಪ್ರಕರಣಗಳು ಇತ್ಯರ್ಥಗೊಂಡಿದ್ದು, 132 ಪ್ರಕರಣಗಳು ವಿಲೇವಾರಿಗೆ ಬಾಕಿಯಿವೆ. 2023ರ ಆಗಸ್ಟ್‌ ತಿಂಗಳ ಒಂದರಲ್ಲೇ 327 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ಅನಧಿಕೃತ ಜಾಹೀರಾತು ಕಂಡರೆ ಇನ್‌ಸ್ಪೆಕ್ಟರ್‌ಗಳೇ ಹೊಣೆ: ಸರ್ಕಾರ

ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯಲ್ಲಿ ಕರ್ನಾಟಕ ಮುಕ್ತ ಪ್ರದೇಶದ ವಿರೂಪ ತಡೆ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿ ನಗರದ ಎಲ್ಲ ವಲಯಗಳ ಉಪ ಪೊಲೀಸ್‌ ಆಯುಕ್ತರು, ಸಹಾಯಕ ಪೊಲೀಸ್‌ ಆಯುಕ್ತರು, ಠಾಣೆಗಳ ಇನ್‌ಸ್ಪೆಕ್ಟರ್‌ಗಳಿಗೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು 2023ರ ಆ.23ರಂದು ನಿರ್ದೇಶಿಸಿದ್ದಾರೆ. ಗಸ್ತು ವೇಳೆ ಅನಧಿಕೃತ ಜಾಹೀರಾತು ಅಳವಡಿಸುತ್ತಿರುವುದು ಕಂಡು ಬಂದಲ್ಲಿ, ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಎಲ್ಲ ಸ್ಥಳಗಳನ್ನು ಪರಿಶೀಲಿಸಿ ಹೆಚ್ಚಿನ ಪ್ರಕರಣ ದಾಖಲಿಸಬೇಕು. ಅದಕ್ಕಾಗಿ ಬಿಬಿಎಂಪಿ ಅಧಿಕಾರಿಗಳ ನೆರವು ಪಡೆದು ಕ್ರಮ ಜರುಗಿಸಬೇಕು. ಆದಾಗ್ಯೂ ಮುಂದಿನ ದಿನಗಳಲ್ಲಿ ಅನಧಿಕೃತ ಜಾಹೀರಾತು ಫಲಕಗಳು ಅಳವಡಿಸಿರುವುದು ಕಂಡುಬಂದರೆ ಸಂಬಂಧಪಟ್ಟ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಿ, ಮುಂದಿನ ಇಲಾಖಾ ಶಿಸ್ತು ಕ್ರಮಕ್ಕೆ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ವರದಿ ಕಳುಹಿಸಿಕೊಡುವಂತೆ ಎಲ್ಲ ಸಹಾಯಕ ಪೊಲೀಸ್‌ ಆಯುಕ್ತರಿಗೆ ನಿರ್ದೇಶಿಸಲಾಗಿದೆ ಎಂದು ವಿವರಿಸಿದೆ.

Follow Us:
Download App:
  • android
  • ios