ಉನ್ನತ ಶಿಕ್ಷಣವು ಕೇವಲ ಪದವಿಗೆ ಸೀಮಿತವಾಗದೆ ಕೌಶಲ್ಯ, ಸಂಶೋಧನೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಬೇಕು ಎಂದು ರಾಜ್ಯಪಾಲರಾದ ಡಾ. ಸುಧಾ ಯಾದವ್ ತಿಳಿಸಿದ್ದಾರೆ. ವಿಶ್ವವಿದ್ಯಾಲಯಗಳು ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ಗ್ರಾಮ ದತ್ತು ಸ್ವೀಕಾರದಂತಹ ಕಾರ್ಯಕ್ರಮಗಳ ಮೂಲಕ ಸಮಾಜಮುಖಿಯಾಗಲು ಅವರು ಕುಲಪತಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು: “ಉನ್ನತ ಶಿಕ್ಷಣವು ಕೇವಲ ಪದವಿ ಪ್ರಮಾಣಪತ್ರಕ್ಕೆ ಸೀಮಿತವಾಗಬಾರದು. ಪಠ್ಯಪುಸ್ತಕಗಳ ಜ್ಞಾನವನ್ನು ಮೀರಿ ಜ್ಞಾನವನ್ನು ಬೆಳೆಸುವುದು, ಕೌಶಲ್ಯಗಳನ್ನು ಹೆಚ್ಚಿಸುವುದು, ಸಂಶೋಧನೆಯನ್ನು ಉತ್ತೇಜಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದರ ಮೇಲೂ ಗಮನಹರಿಸಬೇಕು. ಬದಲಾಗುತ್ತಿರುವ ಜಾಗತಿಕ ಸವಾಲುಗಳಿಗೆ ಅನುಗುಣವಾಗಿ ವಿಶ್ವವಿದ್ಯಾಲಯಗಳು ತಮ್ಮ ಶಿಕ್ಷಣ ವ್ಯವಸ್ಥೆಯನ್ನು ನಿರಂತರವಾಗಿ ಅಭಿವೃದ್ಧಿಪಡಿಸಬೇಕು,” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಹೇಳಿದರು.

ರಾಜ್ಯಪಾಲರು ಹೇಳಿದ್ದೇನು?

ಕರ್ನಾಟಕದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಅಧಿಕಾರಿಗಳನ್ನು ಲೋಕಭವನದಲ್ಲಿ ಉದ್ದೇಶಿಸಿ ಮಾತನಾಡಿದ ಗೌರವಾನ್ವಿತ ರಾಜ್ಯಪಾಲರು, ರಾಜ್ಯದಾದ್ಯಂತ ವಿಶ್ವವಿದ್ಯಾಲಯಗಳ ಗುಣಮಟ್ಟ, ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಒಟ್ಟಾರೆ ಕಾರ್ಯಕ್ಷಮತೆಯನ್ನು ಬಲಪಡಿಸುವ ಅಗತ್ಯವನ್ನು ಒತ್ತಿಹೇಳಿದರು.

“ವಿಶ್ವವಿದ್ಯಾಲಯಗಳ ಆಡಳಿತ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸುವುದು, ಗ್ರಾಮೀಣ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಗ್ರಾಮ ದತ್ತು ಸ್ವೀಕಾರ ಕಾರ್ಯಕ್ರಮವನ್ನು ಉತ್ತೇಜಿಸುವುದು, ಶಿಕ್ಷಣ, ಆರೋಗ್ಯ, ನೈರ್ಮಲ್ಯ ಮತ್ತು ಸಮುದಾಯದ ಸಹಭಾಗಿತ್ವದ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದು ಹಾಗೂ ಪ್ರವೇಶಾತಿ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ (NEP)/ರಾಜ್ಯ ಶಿಕ್ಷಣ ನೀತಿ (SEP)ಯ ಪರಿಣಾಮಕಾರಿ ಅನುಷ್ಠಾನ, ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ನಡುವಿನ ಬಲವಾದ ಸಮನ್ವಯ ಹಾಗೂ ಕೌಶಲ್ಯ ಅಭಿವೃದ್ಧಿ, ಸಂಶೋಧನೆ, ನಾವೀನ್ಯತೆ ಮತ್ತು ಉದ್ಯೋಗಾರ್ಹತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಮುದಾಯ ಸೇವೆ ಮತ್ತು ಪರಿಸರ ಸಂರಕ್ಷಣೆಯ ಮೂಲಕ ವಿಶ್ವವಿದ್ಯಾಲಯಗಳು ತಮ್ಮ ಸಾಮಾಜಿಕ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಕರೆ ನೀಡಿದರು.

ಪ್ರತಿಯೊಂದು ವಿಶ್ವವಿದ್ಯಾಲಯವು ತನ್ನ ಪ್ರಸ್ತುತ ಕಾರ್ಯನಿರ್ವಹಣೆಯ ಸಮಗ್ರ ಪರಿಶೀಲನೆ ನಡೆಸಿ, ಸುಧಾರಣೆ ಅಗತ್ಯವಿರುವ ಕ್ಷೇತ್ರಗಳನ್ನು ಗುರುತಿಸಬೇಕು ಎಂದು ನಿರ್ದೇಶನ ನೀಡಿದ ಅವರು, ಆಯಾ ವಿಶ್ವವಿದ್ಯಾಲಯಗಳ ಪ್ರಸ್ತುತ ಸ್ಥಿತಿ, ಪ್ರಮುಖ ಸಾಧನೆಗಳು, ಸವಾಲುಗಳು, ನ್ಯೂನತೆಗಳು ಹಾಗೂ ಸುಧಾರಣೆಗಾಗಿ ಪ್ರಸ್ತಾಪಿಸಿರುವ ನಿರ್ದಿಷ್ಟ ಕ್ರಮಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಎಲ್ಲಾ ಕುಲಪತಿಗಳಿಗೆ ಸೂಚಿಸಿದರು.

ಕರ್ನಾಟಕದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ ಕುಲಪತಿಗಳು ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ (KSHEC) ಸಮನ್ವಯ ಮತ್ತು ಸಹಯೋಗದೊಂದಿಗೆ ಕಾರ್ಯನಿರ್ವಹಿಸಬೇಕೆಂದು ರಾಜ್ಯಪಾಲರು ಕರೆ ನೀಡಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ತುಳಸಿ ಮದ್ದಿನೇನಿ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ಪ್ರೊ. ಎಸ್. ಆರ್. ನಿರಂಜನ್, ಕೆಎಸ್‌ಎಚ್‌ಇಸಿಯ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಶಿವಶಂಕರ್ ಕೆ. ಸೇರಿದಂತೆ ಇತರರು ಉಪಸ್ಥಿತರಿದ್ದರು.